ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಸಿಬ್ಬಂದಿಗೆ ಸಿಗದ ವೇತನ: ಆಕ್ರೋಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ
Last Updated 24 ಫೆಬ್ರುವರಿ 2020, 12:22 IST
ಅಕ್ಷರ ಗಾತ್ರ

ಮಡಿಕೇರಿ: ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ‘ಎಲೆಕ್ಟ್ರಾನಿಕ್ ಫಂಡ್ ಮ್ಯಾನೇಜ್‌ಮೆಂಟ್ ಸಿಸ್ಟಂ’ (ಇಎಫ್‌ಎಂಎಸ್‌) ಮೂಲಕ ನೀಡುವ ವೇತನ ಬಾಕಿಯಿದ್ದು, ₹382 ಕೋಟಿಯನ್ನು ಬಜೆಟ್‌ನಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಕಚೇರಿ ಹಾಗೂ ಜಿಲ್ಲಾಡಳಿತ ಕಚೇರಿ ಎದುರು ಗ್ರಾಮ ಪಂಚಾಯಿತಿ ನೌಕರರ ಸಂಘದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಸಂಘದ ಅಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ 4, 5 ತಿಂಗಳಿಂದ ಕೆಲವು ಸಿಬ್ಬಂದಿಗಳಿಗೆ ವೇತನ ಸಿಕ್ಕಿಲ್ಲ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ಧಿಷ್ಟ ಧರಣಿ ನಡೆಸಲಾಗುತ್ತಿದೆ. ಈ ಬಗ್ಗೆ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಳ್ಳದಿದ್ದರೆ ತೀವ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

‘ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಪ್ರತಿ ತಿಂಗಳ 5ನೇ ತಾರೀಖಿನ ಒಳಗೆ ನೇರವಾಗಿ ನೌಕರರ ಖಾತೆಗೆ ಜಮಾ ಮಾಡಲು ಕ್ರಮ ಕೈಗೊಳ್ಳಬೇಕು. ಪಂಚಾಯಿತಿಯ ತೆರಿಗೆ ಸಂಗ್ರಹದಲ್ಲಿ ಶೇ 40ರಷ್ಟನ್ನು ನೌಕರರ ಸಂಬಳಕ್ಕೆ ಬಳಸಬೇಕು ಎಂಬ ಆದೇಶವಿದೆ. ಆದರೂ ಇದು ಬಳಸುತ್ತಿಲ್ಲ’ ಎಂದು ಆರೋಪಿಸಿದರು.

ರಾಜ್ಯದಲ್ಲಿ 6,024 ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು 65 ಸಾವಿರ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಇವರಿಗೆ ವಾರ್ಷಿಕ ಸಂಬಳಕ್ಕೆ ₹ 900 ಕೋಟಿ ಹಣ ಅಗತ್ಯವಿದೆ. ಆದರೆ, ಈ ಬಗ್ಗೆ ನಿಗಾ ವಹಿಸದ ಸರ್ಕಾರ ಸೂಕ್ತ ವೇತನ ನೀಡದೇ ಕಾರ್ಮಿಕರನ್ನು ದುಡಿಸುತ್ತಿದೆ ಎಂದು ದೂರಿದರು.

ಪಂಚಾಯಿತಿಗಳಲ್ಲಿ ಸರ್ಕಾರದ ಯಾವ ಆದೇಶ ಜಾರಿಯಾಗುತ್ತಿಲ್ಲ. ಜತೆಗೆ, ಗ್ರಾ.ಪಂ ಆಡಳಿತ ಅವಧಿ ಮುಗಿಯುತ್ತಿರುವುದರಿಂದ ಹೆಚ್ಚಿನ ಹಣ ದುರುಪಯೋಗವಾಗುತ್ತಿದೆ. ಮಾರ್ಚ್‌ ಅಂತ್ಯದೊಳಗೆ ಅನುದಾನ ಬಳಕೆಯಾಗದೇ ಹಲವಾರು ಅಭಿವೃದ್ಧಿ ಕಾಮಗಾರಿಗಳು ನೆಲಕಚ್ಚಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ 15ರಿಂದ 20 ವರ್ಷ ಸೇವೆ ಸಲ್ಲಿಸಿದರೂ ಬಿಲ್ ಕಲೆಕ್ಟರ್‌ಗಳಿಗೆ ಬಡ್ತಿ ಸಿಗುತ್ತಿಲ್ಲ. ಜತೆಗೆ, ಜಿಲ್ಲಾ ಪಂಚಾಯಿತಿಗಳಲ್ಲಿ ಬಡ್ತಿ ಪಟ್ಟಿ ಸಿದ್ಧತೆ ಮಾಡದೇ ಕಾಲ ವಿಳಂಬ ಮಾಡಲಾಗುತ್ತಿದೆ ಎಂದು ದೂರಿದರು.

ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಗಳಲ್ಲಿ ಗ್ರಾ.ಪಂ ನೌಕರರ ಸಮಸ್ಯೆ, ಬೇಡಿಕೆಗಳ ಕುರಿತು ಚರ್ಚೆ ನಡೆಸುತ್ತಿಲ್ಲ. ಪಂಚಾಯಿತಿಗಳಲ್ಲಿ ಅಧಿಕಾರಿಗಳು ಕಾಟಾಚಾರದ ಕೆಲಸ ಮಾಡುತ್ತಿದ್ದಾರೆ. ಕೆಲವು ಗ್ರಾ.ಪಂ ಅಧ್ಯಕ್ಷರು ಇಲ್ಲ ಸಲ್ಲದ ಆರೋಪಗಳನ್ನು ನೌಕರರ ಮೇಲೆ ಹೇರುವುದರ ಜತೆಗೆ ನೌಕರರನ್ನು ಕೆಲಸದಿಂದ ತೆಗೆಯುವ ಪ್ರವೃತ್ತಿ ನಡೆಯುತ್ತಿದೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

‘ಗ್ರಾಮ ಪಂಚಾಯಿತಿ ನೌಕರರಿಗೆ ಪಿಂಚಣಿ, ವೈದ್ಯಕೀಯ ವೆಚ್ಚ, ಭವಿಷ್ಯ ನಿಧಿ ಸಿಗಬೇಕು. ನಗರಾಭಿವೃದ್ಧಿ ಇಲಾಖೆಯ ಮಾದರಿಯಲ್ಲಿ ಗ್ರಾಮ ಪಂಚಾಯಿತಿ ನೌಕರರಿಗೆ ಸೇವಾ ನಿಯಮಾವಳಿ ರಚಿಸುವುದು ಪ್ರಗತಿಯಲ್ಲಿದ್ದು, ಅದನ್ನು ಪೂರ್ಣಗೊಳಿಸಲು ಆದೇಶ ಹೊರಡಿಸಬೇಕು’ ಎಂದು ಆಗ್ರಹಿಸಿದರು.

‘ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನೀಡುವ ಜತೆಗೆ ಸಕಾಲದಲ್ಲಿ ವೇತನ ಪಾವತಿಸಬೇಕು. ನೌಕರರಿಗೆ ಪಿಂಚಣಿ, ವೈದ್ಯಕೀಯ ವೆಚ್ಚ, ಭವಿಷ್ಯ ನಿಧಿ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.

ಜಿ.ಪಂ ಸಿಇಒ ಲಕ್ಷ್ಮಿಪ್ರಿಯ ಅವರಿಗೆ ಮನವಿ ಸಲ್ಲಿಸಲಾಯಿತು.

ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಎಂ.ಬಿ.ಹರೀಶ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ನವೀನ್, ಪ್ರಮುಖರಾದ, ವಿಜಯ್, ದಿಲೀಪ್, ಸಜೀತಾ, ವಸಂತ್ ಹಾಗೂ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT