ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ: ಇಂಧನ ಬೆಲೆ ಏರಿಕೆಗೆ ಮುಂದುವರಿದ ಬಿಜೆಪಿ ಆಕ್ರೋಶ

ಕೊಡಗು ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ, ಮಾನವ ಸರಪಳಿ ರಚನೆ
Published 20 ಜೂನ್ 2024, 16:23 IST
Last Updated 20 ಜೂನ್ 2024, 16:23 IST
ಅಕ್ಷರ ಗಾತ್ರ

ಮಡಿಕೇರಿ: ಇಂಧನ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಹಾಗೂ ಕೂಡಲೇ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಗುರುವಾರ ಕೊಡಗಿನ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರತಿಭಟನೆ ನಡೆಸಿತು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಪ್ರತಿಭಟನೆಯು ಸೋಮವಾರಪೇಟೆ ಹಾಗೂ ಕುಶಾಲನಗರದಲ್ಲಿ ಜರುಗಿದರೆ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪ್ರತಿಭಟನೆಯು ವಿರಾಜಪೇಟೆ ಪಟ್ಟಣದಲ್ಲಿ ನಡೆಯಿತು. ಒಟ್ಟು 3 ಕಡೆ ಪಕ್ಷ ಸಂಘಟಿಸಿದ್ದ ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಈ ಪ್ರತಿಭಟನೆ ಇಲ್ಲಿಗೆ ನಿಲ್ಲುವುದಿಲ್ಲ. ಬೆಲೆ ಇಳಿಕೆ ಮಾಡುವವರೆಗೂ ಬಿಜೆಪಿಯ ಪ್ರತಿಭಟನೆ ಮುಂದುವರಿಯಲಿದೆ. ಈ ಪ್ರತಿಭಟನೆಗಳಿಗೂ ಸರ್ಕಾರ ಬಗ್ಗದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಪ್ರತಿಭಟನೆ ನಡೆಸಲಾಗುವುದು’ ಎಂದು ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ರವಿ ಕಾಳಪ್ಪ ತಿಳಿಸಿದರು.

ಕುಶಾಲನಗರ: ಬೆಲೆ ಇಳಿಸಲು ಒತ್ತಾಯ

ಕುಶಾಲನಗರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಗುರುವಾರ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಕೆಲಕಾಲ‌ ರಸ್ತೆ ತಡೆ ನಡೆಸಿದರು.

ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ‌ ಬಂದ ನಂತರ ನಿರಂತರವಾಗಿ ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ಆಡಳಿತ ನಡೆಸುತ್ತಿದೆ. ಗ್ಯಾರಂಟಿ ಹೆಸರಿನಲ್ಲಿ ಜನರಿಂದ ಕಿತ್ತು ಜನರಿಗೆ ಕೊಡುಗೆ ನೀಡುವ ಮೂಲಕ ಜನರಿಗೆ ಮೋಸ ಮಾಡುತ್ತಿದೆ’ ಎಂದು ಹರಿಹಾಯ್ದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಎಂ.ಎಂ.ಚರಣ್ ಮಾತನಾಡಿ, ‘ಕೂಡಲೇ ಬೆಲೆ ಏರಿಕೆಗೆ ಕಡಿವಾಣ ಹಾಕಿ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ಪಕ್ಷದ ಮುಖಂಡರಾದ ಆರ್.ಕೆ.ಚಂದ್ರ, ಅಮೃತ್ ರಾಜ್, ಮಧುಸೂದನ್, ರಾಮನಾಥನ್, ಸಚಿನ್, ಜೈವರ್ಧನ್, ಗೌತಮ್, ಕೃಷ್ಣಪ್ಪ, ಪುಂಡರೀಕಾಕ್ಷ, ಗಣಿಪ್ರಸಾದ್, ಪ್ರವೀಣ್, ಚಂದ್ರಶೇಖರ್ ಹೇರೂರು, ಜಿ.ಎಲ್.ನಾಗರಾಜ್, ಸೋಮಶೇಖರ್, ಸರಳ‌ರಾಮಣ್ಣ, ಅನಿತಾ ಉತ್ತಪ್ಪ, ಗಂಗಮ್ಮ, ಶೋಭಾ, ಗೀತಾಂಜಲಿ ಪಾಲ್ಗೊಂಡಿದ್ದರು.

ಇಂಧನ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇಂಧನ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ವಿರಾಜಪೇಟೆಯಲ್ಲಿ ಕೆಲಕಾಲ ರಸ್ತೆ ತಡೆ

ವಿರಾಜಪೇಟೆ: ಇಂಧನ ಬೆಲೆ ಇಳಿಕೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಅಣಕು ಶವಯಾತ್ರೆ ನಡೆಸಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.  ಪ್ರತಿಭಟನಕಾರರು ರಸ್ತೆ ತಡೆಗೆ ಮುಂದಾದಾಗ ಪೊಲೀಸರು ‘ಸಾರ್ವಜನಿಕರಿಗೆ ತೊಂದರೆಯಾಗುವುದರಿಂದ ರಸ್ತೆ ತಡೆಗೆ ಅವಕಾಶ ನೀಡುವುದಿಲ್ಲ’ ಎಂದರು. ‘ವಾಹನ ಸವಾರರಿಗಾಗಿಯೇ ಪ್ರತಿಭಟನೆ ನಡೆಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಪಟ್ಟು ಬಿಡದ ಪ್ರತಿಭಟನಕಾರರು ಕೆಲಕಾಲ ರಸ್ತೆ ತಡೆ ನಡೆಸಿದರು. ಪಕ್ಷದ ಕಚೇರಿಯಿಂದ ಗಡಿಯಾರ ಕಂಬದವರೆಗೆ ಜಾಥಾವನ್ನೂ ನಡೆಸಲಾಯಿತು. ಬಳಿಕ ತಹಶೀಲ್ದಾರ್ ರಾಮಚಂದ್ರ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಎಂ.ಸುಜಾ ಕುಶಾಲಪ್ಪ ‘ತೈಲ ಬೆಲೆ ಏರಿಕೆಯ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯುವವರೆಗೂ ಬಿಜೆಪಿ ಹೋರಾಟ ಮುಂದುವರೆಸಲಿದೆ’ ಎಂದು ಎಚ್ಚರಿಕೆ ನೀಡಿದರು. ಪಕ್ಷ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಮಾಚಿಮಾಡ ರವೀಂದ್ರ ಮಾತನಾಡಿ ‘ಅವೈಜ್ಞಾನಿಕವಾದ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದೆ ಕಂಗೆಟ್ಟು ಹೋಗಿರುವ ಕಾಂಗ್ರೆಸ್ ಸರ್ಕಾರ ಹಣವನ್ನು ಸರಿದೂಗಿಸಲು ಸಾಮಾನ್ಯ ಜನರ ಕಿಸೆಗೆ ಕನ್ನ ಹಾಕುತ್ತಿದೆ’ ಎಂದು ಖಂಡಿಸಿದರು. ವಿರಾಜಪೇಟೆ ಮಂಡಲ ಬಿ.ಜೆ.ಪಿ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ಮಾತನಾಡಿ ‘ರಾಜ್ಯ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಹಣ ನೀಡಲಾಗದಂತಹ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ’ ಎಂದು ಆರೋಪಿಸಿದರು. ಬಿಜೆಪಿ ಮುಖಂಡರಾದ ಮನೆಯಪಂಡ ಕಾಂತಿ ಸತೀಶ್ ಪದ್ಮಿನಿ ಸೋಮಯ್ಯ ಪಳೆಯಂಡ ರಾಬಿನ್ ದೇವಯ್ಯ ರೀನಾ ಪ್ರಕಾಶ್ ಮಂಜು ಗಣಪತಿ ಅಜಿತ್ ಕರುಂಬಯ್ಯ ಭಾಗವಹಿಸಿದ್ದರು.

ಇಂಧನ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಸೋಮವಾರಪೇಟೆಯ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
ಇಂಧನ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಸೋಮವಾರಪೇಟೆಯ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.

ಸೋಮವಾರಪೇಟೆಯಲ್ಲಿ ಮಾನವ ಸರಪಳಿ ರಚನೆ

ಸೋಮವಾರಪೇಟೆ: ರಾಜ್ಯ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಏರಿಸಿರುವುದನ್ನು ಖಂಡಿಸಿ ಮಂಡಲ ಬಿಜೆಪಿ ವತಿಯಿಂದ ಗುರುವಾರ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಲಾಯಿತು. ಬಿಜೆಪಿ ಮುಖಂಡ ಅಪ್ಪಚ್ಚು ರಂಜನ್ ಮಾತನಾಡಿ ‘ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರದಿಂದ ಇಂಧನ ಬೆಲೆ ಏರಿಕೆಯಿಂದ ಎಲ್ಲಾ ಸಾಮಾಗ್ರಿಗಳ ಬೆಲೆಗಳು ಏರಿಕೆಯಾಗುತ್ತದೆ. ಇದು ಜನಸಾಮಾನ್ಯರಿಗೆ ಹೊರೆಯಾಗಿದೆ’ ಎಂದು ಖಂಡಿಸಿದರು. ತಕ್ಷಣವೇ ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು. ಇಲ್ಲವಾದಲ್ಲಿ ಮುಂದೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು. ‘ನೀಟ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಗಮನ ಬೇರೆಡೆಗೆ ಸೆಳೆಯಲು ನೀಟ್ ಪರೀಕ್ಷೆ ವಿಚಾರ ತೆಗೆದು ಪ್ರತಿಭಟನೆ ಮಾಡಲು ಹೊರಟಿದ್ದಾರೆ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ನೀಟ್ ವಿಚಾರ ಎತ್ತಿದ್ದಾರೆ’ ಎಂದು ದೂರಿದರು. ಹಿರಿಯ ಮುಖಂಡ ಎಸ್.ಜಿ.ಮೇದಪ್ಪ ಮಾತನಾಡಿ ‘ಜನಹಿತ ಕಾಯಬೇಕಾದ ಸರ್ಕಾರ ಬೆಲೆ ಏರಿಸುವ ಮೂಲಕ ಜನಸಾಮಾನ್ಯರ ನೆಮ್ಮದಿಯನ್ನು ಕಸಿದುಕೊಂಡಿದೆ’ ಎಂದು ಟೀಕಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಕಾಳಪ್ಪ ಜಿಲ್ಲಾ ಬಿಜೆಪಿ ಮಾಜಿ ಆಧ್ಯಕ್ಷ ಭಾರತೀಶ್ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಮಂಡಲ ಅಧ್ಯಕ್ಷ ಗೌತಮ್ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ವಿರುಪಾಕ್ಷ ಮುಖಂಡರಾದ ವಿ.ಕೆ.ಲೋಕೇಶ್ ಮಹೇಶ್ ಜೈನಿ ಲೋಕೇಶ್ವರಿ ಗೋಪಾಲ್ ಜಗದೀಶ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT