ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುವರಿ ಪಡಿತರ ಪೂರೈಸುವ ಭರವಸೆ

ಪ್ರತಿ ಕುಟುಂಬಕ್ಕೂ ಆಹಾರ ಪೂರೈಸಿ: ಸಚಿವ ವಿ. ಸೋಮಣ್ಣ
Last Updated 31 ಮಾರ್ಚ್ 2020, 13:25 IST
ಅಕ್ಷರ ಗಾತ್ರ

ಮಡಿಕೇರಿ: ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯ ವರೆಗೆ ರಸಗೊಬ್ಬರ ಮಾರಾಟಕ್ಕೆ ಅವಕಾಶ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿ.ಪಂ ನೂತನ ಭವನದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಕೊರೊನಾ ವೈರಸ್ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ವಹಿಸುವ ಕುರಿತು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

‘ಜಿಲ್ಲೆಯು ಕೃಷಿ ಪ್ರಧಾನವಾಗಿದ್ದು, ಕಾಫಿ ಬೆಳೆ ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗೆ ರಸಗೊಬ್ಬರ ಅಗತ್ಯ ಇರುವುದರಿಂದ ರಸಗೊಬ್ಬರವನ್ನು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮಾರಾಟ ಮಾಡಬಹುದಾಗಿದೆ’ ಎಂದು ಹೇಳಿದರು.

ಜಿಲ್ಲೆಯ ಗಡಿಭಾಗದ ರಾಜ್ಯ ಹೆದ್ದಾರಿಗಳನ್ನು ಸಂಪೂರ್ಣ ಮುಚ್ಚಿರುವುದರಿಂದ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ. ಇದಕ್ಕೆ ಸಾರ್ವಜನಿಕ ಸಹಕಾರ ಅತ್ಯಗತ್ಯ ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಎಚ್ಚರವಹಿಸಲು ಜಿಲ್ಲಾಡಳಿತ, ಪೊಲೀಸ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸೇರಿದಂತೆ ಎಲ್ಲಾ ಹಂತದಲ್ಲಿ ಶ್ರದ್ಧೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಇದನ್ನು ಮುಂದುವರಿಸಿಕೊಂಡು ಹೋಗಬೇಕು. ಯಾವುದೇ ರೀತಿಯಲ್ಲಿ ಸೋಂಕು ಹರಡದಂತೆ ಗಮನಹರಿಸಬೇಕು ಎಂದು ಸೂಚಿಸಿದರು.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಶ್ರಮ ವಹಿಸಿದರೆ ಯಾವುದೇ ಸಮಸ್ಯೆಯನ್ನು ಪರಿಹರಿಸಬಹುದು. ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡಿದ್ದಲ್ಲಿ ಕೊರೊನಾ ಸೋಂಕು ತಡೆಯಬಹುದಾಗಿದೆ ಎಂದರು.

ಇನ್ನೂ 14 ದಿನಗಳ ಕಾಲ ಸರ್ಕಾರದ ನಿರ್ದೇಶನವನ್ನು ಚಾಚು ತಪ್ಪದೇ ಪಾಲಿಸಬೇಕು. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಜಿಲ್ಲೆಯ ಹಲವು ಬಿಪಿಎಲ್ ಕುಟುಂಬಗಳ ಪಡಿತರ ಚೀಟಿ ಎಪಿಎಲ್ ಆಗಿದ್ದು, ಎಪಿಎಲ್ ಕುಟುಂಬಗಳಿಗೂ ಬಿಪಿಎಲ್ ಕುಟುಂಬಗಳಿಗೆ ನೀಡುವಂತೆ ಆಹಾರ ಪೂರೈಕೆ ಮಾಡಬೇಕು ಎಂದು ಅವರು ತಿಳಿಸಿದರು.

ಇದಕ್ಕೆ ಧ್ವನಿಗೂಡಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಎಪಿಎಲ್ ಮತ್ತು ಬಿಪಿಎಲ್ ಮಾನದಂಡ ನೋಡದೇ ಪಡಿತರ ವಿತರಣೆ ಮಾಡಬೇಕು. ಹೆಚ್ಚುವರಿ ಪಡಿತರ ಬೇಕಿದ್ದಲ್ಲಿ ಪೂರೈಸಲಾಗುವುದು ಎಂದರು.

2 ದಿನದಲ್ಲಿ ಪಡಿತರ ವಿತರಿಸಬೇಕು. ಸರ್ಕಾರದ ಆದೇಶವನ್ನು ಪಾಲಿಸಬೇಕು ಎಂದು ಸೂಚಿಸಿದರು.

ತರಕಾರಿಯನ್ನು ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾ.ಪಂ ಮೂಲಕವೇ ಮಾರಾಟ ಮಾಡುವಂತಾಗಬೇಕು. ಮಕ್ಕಳಿಗೆ ಬಿಸಿಯೂಟದ ಪಡಿತರವನ್ನು ಕುಟುಂಬಗಳಿಗೆ ವಿತರಿಸಬೇಕು ಎಂದು ಬೋಪಯ್ಯ ಸಲಹೆ ಮಾಡಿದರು.

ಜಿಲ್ಲೆಯಲ್ಲಿ ಕಾಫಿ ಗ್ರೋವರ್ಸ್ ಸಹಕಾರ ಸಂಘವಿದ್ದು, ಈ ಸಂಘದ ಮೂಲಕ ಕಾಫಿ ಬೆಳೆಗಾರರು ಬೆಳೆದಿರುವ ಕಾಫಿ ಬೀಜವನ್ನು ದಾಸ್ತಾನು ಮಾಡಿಕೊಂಡು ಮುಂಗಡವಾಗಿ ಕಾಫಿ ಬೆಳೆಗಾರರಿಗೆ ಹಣ ಭರಿಸಲು ಅಗತ್ಯ ಕ್ರಮ ವಹಿಸುವಂತೆ ಸಲಹೆ ಮಾಡಿದರು.

ಸಹಕಾರ ಸಂಘಗಳ ಉಪ ನಿಬಂಧಕರಾದ ಸಲೀಂ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಕಾಫಿ ಬೆಳೆಗಾರರು ಬೆಳೆದಿರುವ ಕಾಫಿ ಬೀಜವನ್ನು ದಾಸ್ತಾನು ಮಾಡಿ ಸಾಲವನ್ನು ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ಜಿಲ್ಲೆಯಲ್ಲಿ ಹಸಿರು ಮೆಣಸಿನ ಕಾಯಿ ಮತ್ತು ಶುಂಠಿಯನ್ನು ಬೆಳೆಯುತ್ತಾರೆ. ಇವರಿಗೆ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಅವರು ಮನವಿ ಮಾಡಿದರು.

ನಗರ ಪ್ರದೇಶದಲ್ಲಿ 4-5 ಆಟೋಗಳು, ಗ್ರಾಮೀಣ ಭಾಗದಲ್ಲಿ ಕನಿಷ್ಠ 2 ಆಟೋಗಳು ಸಂಚಾರಕ್ಕೆ ಅವಕಾಶ ಮಾಡಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 1900 ಮಂದಿ ಕೂಲಿ ಕಾರ್ಮಿಕರಿದ್ದು ಇವರಿಗೆ ಪಡಿತರ ವಿತರಿಸಲಾಗುತ್ತಿದೆ. ಕಾರ್ಮಿಕರು ಅಡುಗೆ ಮಾಡಿಕೊಳ್ಳಲು ಸ್ಥಳೀಯವಾಗಿ ಶಾಲೆಯಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಯಾವ ಕುಟುಂಬಕ್ಕೆ ಪಡಿತರ ಚೀಟಿ ಇಲ್ಲ ಅಂತಹ ಕುಟುಂಬಕ್ಕೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಂಸದರಾದ ಪ್ರತಾಪ್ ಸಿಂಹ ಅವರು ಮಾತನಾಡಿ, ಕುಂಡಾಮೇಸ್ತ್ರಿ ಯೋಜನೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.

ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ಹಲವು ಮಾಹಿತಿ ನೀಡಿದರು. ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ಕಾಲೇಜಿನ ಡೀನ್ ಡಾ.ಕಾರ್ಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT