ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ಜಿಲ್ಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಸಂತ್ರಸ್ತರ ಬದುಕು ರೂಪಿಸಲು ಪಣ
Last Updated 26 ಜನವರಿ 2019, 11:58 IST
ಅಕ್ಷರ ಗಾತ್ರ

ಮಡಿಕೇರಿ: ‘ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ಕುಟುಂಬಗಳ ಬದುಕು ಹಸನು ಮಾಡಲು ರಾಜ್ಯ ಸರ್ಕಾರವು ಪಣ ತೊಟ್ಟಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್‌ ಅವರು ಹೇಳಿದರು.

ಇಲ್ಲಿನ ಜನರಲ್‌ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಜಿಲ್ಲೆಯ ಕರ್ಣಂಗೇರಿ, ಮದೆ, ಬಿಳಿಗೇರಿ, ಗಾಳಿಬೀಡು, ಜಂಬೂರು ಪ್ರದೇಶಗಳಲ್ಲಿ ಮನೆ ನಿರ್ಮಾಣಕ್ಕೆ ಜಾಗ ಗುರುತಿಸಿ ಪ್ರತಿ ಮನೆಗೆ ₹ 9.85 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಸುಸಜ್ಜಿತ ಬಡಾವಣೆಯನ್ನೂ ನಿರ್ಮಿಸಲಾಗುವುದು. ಅಲ್ಲದೇ, ಮನೆ ನಿರ್ಮಾಣ ಆಗುವ ತನಕ ಪ್ರತಿ ತಿಂಗಳು ₹ 10 ಸಾವಿರ ಬಾಡಿಗೆ ನೀಡಲಾಗುತ್ತಿದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಮೂಲಸೌಲಭ್ಯಗಳಾದ ರಸ್ತೆ, ಸೇತುವೆ, ಶಾಲಾ–ಕಾಲೇಜು, ಅಂಗನವಾಡಿ ಕಟ್ಟಡಕ್ಕೆ ಹಾನಿ ಆಗಿದೆ. ಅವುಗಳ ಪುನರ್‌ ನಿರ್ಮಾಣಕ್ಕೆ ತುರ್ತು ನೆರವು ನೀಡಲಾಗಿದೆ. ಲೋಕೋಪಯೋಗಿ ಇಲಾಖೆಗೆ ₹ 99.22 ಕೋಟಿ ಅನುದಾನ ನೀಡಲಾಗಿದೆ. ಎಲ್ಲ ಕಾಮಗಾರಿಗಳೂ ಪ್ರಗತಿಯಲ್ಲಿವೆ’ ಎಂದು ಮಾಹಿತಿ ನೀಡಿದರು.

ಪ್ರಕೃತಿ ವಿಕೋಪದಿಂದ ಜೀವಹಾನಿ ಸಂಭವಿಸಿದ 19 ಪ್ರಕರಣಗಳಿಗೆ ಒಟ್ಟು ₹ 95 ಲಕ್ಷ ಪರಿಹಾರ, 268 ಜಾನುವಾರುಗಳಿಗೆ ₹ 31 ಲಕ್ಷ ಪರಿಹಾರ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬೆಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ತಂತ್ರಾಂಶದಲ್ಲಿ ವಿವರ ನಮೂದಿಸಲಾಗಿದೆ. ನೇರವಾಗಿ ರೈತರ ಬ್ಯಾಂಕ್‌ ಖಾತೆಗೆ ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಕಳೆದ ಆಗಸ್ಟ್‌ನಲ್ಲಿ ಸುರಿದಿದ್ದ ಮಳೆಯಿಂದ ಕೊಡಗು ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದರು. ನಾರಿಕರು ಮನೆ, ಮಾರು ಕಳೆದುಕೊಂಡು ಅಕ್ಷರಶಃ ನಿರಾಶ್ರಿತರಾಗಿದ್ದರು, ಅವರಿಗೆ ಪುನರ್ ಬದುಕನ್ನು ಕಟ್ಟಿಕೊಡಲು ನಾವು ಶ್ರಮಿಸುತ್ತಿದ್ದೇವೆ ಎಂದು ಹೇಳಿದರು.

ಸಾಂಸ್ಕೃತಿಕ ರಸದೌತಣ: ಗಣರಾಜ್ಯೋತ್ಸವದ ಅಂಗವಾಗಿ ಸೇಂಟ್ ಮೈಕಲ್‌ ಶಾಲೆ, ವಿರಾಜಪೇಟೆ ಆಶ್ರಮ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೇಂಟ್‌ ಜೋಸೆಫ್‌, ಜನರಲ್‌ ತಿಮ್ಮಯ್ಯ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಅದಕ್ಕೂ ಮೊದಲು ಸಿವಿಲ್‌ ಪೊಲೀಸ್‌, ಡಿಎಆರ್‌ ತುಕಡಿ, ಹೋಂಗಾರ್ಡ್ಸ್, ಕೂಡಿಗೆ ಸೈನಿಕ ಶಾಲೆ, ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು ತಂಡದಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಬಳಿಕ ಸಾಧಕರನ್ನು ಸನ್ಮಾನಿಸಲಾಯಿತು.

ಮಾಜಿ ಸಚಿವ ಎಂ.ಸಿ. ನಾಣಯ್ಯ, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌, ವಿಧಾನ ಪರಿಷತ್‌ ಸದಸ್ಯ ಎಂ.ಪಿ. ಸುನಿಲ್‌ ಸುಬ್ರಮಣಿ, ವಿಧಾನ ಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್‌, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಪ್ರಭಾರ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ. ಪನ್ನೇಕರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT