ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಆದೇಶ ವಾಪಸ್ ಪಡೆಯಿರಿ, ನಿವೇಶನ ನೀಡಿ’

ಸಿಐಟಿಯು ನೇತೃತ್ವದಲ್ಲಿ ಕೊಡಗು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ
Published 25 ಜೂನ್ 2024, 4:44 IST
Last Updated 25 ಜೂನ್ 2024, 4:44 IST
ಅಕ್ಷರ ಗಾತ್ರ

ಮಡಿಕೇರಿ: ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಾಗವನ್ನು ಕಡಿಮೆ ದರಕ್ಕೆ ಒತ್ತುವರಿದಾರರಿಗೆ ಗುತ್ತಿಗೆ ನೀಡುವ ಆದೇಶವನ್ನು ವಾಪಸ್ ಪಡೆಯಬೇಕು ಹಾಗೂ ನಿವೇಶನರಹಿತರಿಗೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ನೇತೃತ್ವದಲ್ಲಿ ಇಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ನೂರಾರು ಮಂದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು.

ಈ ವೇಳೆ ಮಾತನಾಡಿದ ಸಿಐಟಿಯು ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಆರ್. ಭರತ್, ‘ಬಿಜೆಪಿ ಸರ್ಕಾರ ಕೈಗೊಂಡ ತೀರ್ಮಾನವನ್ನೇ ಕಾಂಗ್ರೆಸ್ ಸರ್ಕಾರ ಸಹ ಕೈಗೊಂಡಿದೆ. ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡವರಿಗೇ ಕಡಿಮೆ ಹಣಕ್ಕೆ ಗುತ್ತಿಗೆ ನೀಡುವ ಆದೇಶ ಹೊರಡಿಸಿದೆ. ಈ ಮೂಲಕ ಇಲ್ಲಿನ ಆದಿವಾಸಿ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ‌

ಇನ್ನೂ 2018–19ರಲ್ಲಿ ಸುರಿದ ಮಹಾಮಳೆಯಿಂದ ಮಳೆ ಕಳೆದುಕೊಂಡ ಎಲ್ಲರಿಗೂ ನಿವೇಶನ ನೀಡಿಲ್ಲ. ಸಾವಿರಾರು ಮಂದಿ ಸೂರಿಲ್ಲದವರು ಜಿಲ್ಲೆಯಲ್ಲಿದ್ದಾರೆ. ಕೂಡಲೇ ಸರ್ಕಾರ ತನ್ನ ಆದೇಶವನ್ನು ವಾಪಸ್ ಪಡೆಯಬೇಕು. ನಿರಾಶ್ರಿತರ ಹೊಸ ಪಟ್ಟಿಯನ್ನು ತಯಾರಿಸಬೇಕು ಎಂದು ಒತ್ತಾಯಿಸಿದರು.

ವಾಲ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ 8.5 ಎಕರೆ ಜಾಗದಲ್ಲಿ ಮೂಲ ಸೌಕರ್ಯ ಒದಗಿಸಬೇಕು, ಮನೆ ನಿರ್ಮಿಸಿಕೊಳ್ಳಲು ತಲಾ ₹ 10 ಲಕ್ಷ ನೀಡಬೇಕು, ನಿವೇಶನ ಹೊಂದಿರುವ ದಾಖಲಾತಿಗಳಿಲ್ಲದ ಸಾವಿರಾರು ಮನೆಗಳಿದ್ದು, 94 ಸಿ ಮೂಲಕ ಹಕ್ಕು ಪತ್ರ ವಿತರಣೆಯಾಗದೆ ಇರುವ ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ವನ್ಯಜೀವಿಗಳ ದಾಳಿಯಿಂದ ಮನುಷ್ಯರನ್ನು ಮತ್ತು ಕೃಷಿಯನ್ನು ರಕ್ಷಿಸಬೇಕು, ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆಗಳಿಗೆ ಡಾಂಬರು ಹಾಕಬೇಕು, ಚರಂಡಿ ನಿರ್ಮಾಣ ಮಾಡಬೇಕು, ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು, ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ಬಿಡಿಸಿ ನಿವೇಶನ ರಹಿತ ಬಡವರಿಗೆ ಹಾಗೂ ಆದಿವಾಸಿ ಕುಟುಂಬಗಳಿಗೆ ನೀಡಬೇಕು ಮತ್ತು ಮನೆ ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.

ಸಿಐಟಿಯು ಕಾರ್ಯದರ್ಶಿ ಎ.ಸಿ. ಸಾಬು, ಉಪಾಧ್ಯಕ್ಷ ಮಹದೇವ್, ಖಜಾಂಚಿ ಎನ್.ಡಿ. ಕುಟ್ಟಪ್ಪನ್, ಸಹ ಕಾರ್ಯದರ್ಶಿಗಳಾದ ಕೆ.ಎಸ್. ಶಾಜಿ ರಮೇಶ್, ಕೆ.ಕೆ. ಹರಿದಾಸ್, ಪುಷ್ಪಾ, ಎಚ್.ಬಿ. ರಮೇಶ್, ಜಾನಕಿ, ಮುಖಂಡರಾದ ಲಕ್ಷ್ಮಣ್,  ರಘು, ಸುರೇಶ್, ಮುತ್ತ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT