ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ; 5,251 ವಿದ್ಯಾರ್ಥಿಗಳ ನೋಂದಣಿ

ಸೂಕ್ತ ಬಸ್‌ ಸೌಲಭ್ಯ ಕಲ್ಪಿಸುವಂತೆ ಸ್ಪಷ್ಟ ಸೂಚನೆ ನೀಡಿದ ಜಿಲ್ಲಾಧಿಕಾರಿ ವೆಂಕಟ್‌ರಾಜಾ
Published 27 ಫೆಬ್ರುವರಿ 2024, 4:15 IST
Last Updated 27 ಫೆಬ್ರುವರಿ 2024, 4:15 IST
ಅಕ್ಷರ ಗಾತ್ರ

ಮಡಿಕೇರಿ: ಮಾರ್ಚ್ 1ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಕೊಡಗು ಜಿಲ್ಲೆಯಲ್ಲಿ 5,251 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.

ಇವರಲ್ಲಿ 4,709 ಹೊಸ ವಿದ್ಯಾರ್ಥಿಗಳಾಗಿದ್ದರೆ, 402 ಖಾಸಗಿ ವಿದ್ಯಾರ್ಥಿಗಳು ಮತ್ತು 140 ಪುನರಾವರ್ತಿತ ವಿದ್ಯಾರ್ಥಿಗಳು ಇದ್ದಾರೆ. ಒಟ್ಟು ಜಿಲ್ಲೆಯಲ್ಲಿ 19 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 5, ಸೋಮವಾರಪೇಟೆ ತಾಲ್ಲೂಕಿನಲ್ಲಿ 8 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೋಮವಾರ ಇಲ್ಲಿ ‍ಪೂರ್ವಭಾವಿ ಸಭೆ ನಡೆಸಿ ಹಲವು ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

ಮುಖ್ಯವಾಗಿ, ಪರೀಕ್ಷೆಗಾಗಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಬಸ್ ಸೌಕರ್ಯ ಕಲ್ಪಿಸಬೇಕು ಎಂದು ಕೆಎಸ್‍ಆರ್‌ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಿಗೆ ಸ್ಪಷ್ಟ ನಿರ್ದೇಶನ ನೀಡಿದರು.

‘ಬಸ್‍ಗಳಲ್ಲಿ ಜನದಟ್ಟಣೆ ಹೆಚ್ಚು ಇದೆ ಎಂದು ನಿಲ್ದಾಣದಲ್ಲಿ ಬಸ್‌ ನಿಲ್ಲಿಸದೆ ಹೋಗಬಾರದು, ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಬರಬೇಕು. ಈಗಾಗಲೇ ಸರ್ಕಾರ ಪರೀಕ್ಷೆಗೆ ತೆರಳುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ‘ಪ್ರವೇಶ ಪತ್ರ’ ತೋರಿಸಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು’ ಎಂದು ಸೂಚಿಸಿದರು.

‘ಪ್ರಶ್ನೆಪತ್ರಿಕೆಯನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಮಾರ್ಗದಲ್ಲಿ ಪೊಲೀಸರ ನಿಯೋಜನೆ, ಪರೀಕ್ಷಾ ಕೇಂದ್ರದಲ್ಲಿ ಶುಶ್ರೂಷಕರು ಹಾಗೂ ಪೊಲೀಸರ ನಿಯೋಜನೆ, ಬ್ಯಾಗ್ ಇಟ್ಟುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ, ಕುಡಿಯುವ ನೀರು ಕಲ್ಪಿಸುವುದು, ಮತ್ತಿತರ ಅಗತ್ಯ ಮೂಲ ಸೌಕರ್ಯವನ್ನು ಒದಗಿಸಲು’ ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರಿಗೆ ಸಲಹೆ ನೀಡಿದರು.

‘ಪರೀಕ್ಷೆ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಗಮನಹರಿಸಬೇಕು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಪರೀಕ್ಷೆ ನಡೆಸಬೇಕು’ ಎಂದರು.

ಸರ್ಕಾರದ ನಿಯಮದಂತೆ ವಸ್ತ್ರ ಸಂಹಿತೆ (ಡ್ರೆಸ್‍ಕೋಡ್)ಯನ್ನು ಪಾಲಿಸುವ ಸಂಬಂಧ ವಿದ್ಯಾರ್ಥಿಗಳಿಗೆ ಮೊದಲೇ ಮಾಹಿತಿ ನೀಡುವಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ತಮಗೆ ವಹಿಸಿರುವ ಕೆಲಸವನ್ನು ವ್ಯವಸ್ಥಿತವಾಗಿ ಮತ್ತು ಗಂಭೀರವಾಗಿ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ನೀಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟರಾಜು ಮಾತನಾಡಿ, ‘ಪ್ರಶ್ನೆ ಪತ್ರಿಕೆಗಳ ರಹಸ್ಯ ಬಂಡಲ್‍ಗಳನ್ನು ಸರಬರಾಜು ಮಾಡಲು ಮಡಿಕೇರಿ 2, ಸೋಮವಾರಪೇಟೆ 3 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 2 ಒಟ್ಟು 7 ಮಾರ್ಗಗಳನ್ನು ಗುರುತಿಸಲಾಗಿದ್ದು, ಈ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುವುದು’ ಎಂದರು.

‘ಜಿಲ್ಲಾ ಖಜಾನೆಯಲ್ಲಿ ತ್ರಿಸದಸ್ಯ ಸಮಿತಿ ಅಧಿಕಾರಿಗಳಿಗೆ ಮತ್ತು ಎಲ್ಲಾ ಮಾರ್ಗ ಅಧಿಕಾರಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ನಿರ್ವಹಿಸಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್ ಭಾಗವಹಿಸಿದ್ದರು.

ಕೊಡಗು ಜಿಲ್ಲೆಯಲ್ಲಿ ಮಾರ್ಚ್ 1ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ಪರೀಕ್ಷೆ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೋಮವಾರ ಮಡಿಕೇರಿಯಲ್ಲಿ ನಡೆಸಿದ ಪೂರ್ವಸಿದ್ಧತಾ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು
ಕೊಡಗು ಜಿಲ್ಲೆಯಲ್ಲಿ ಮಾರ್ಚ್ 1ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ಪರೀಕ್ಷೆ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೋಮವಾರ ಮಡಿಕೇರಿಯಲ್ಲಿ ನಡೆಸಿದ ಪೂರ್ವಸಿದ್ಧತಾ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು

Highlights - ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ ವಸ್ತ್ರ ಸಂಹಿತೆ ಕುರಿತು ವಿದ್ಯಾರ್ಥಿಗಳಿಗೆ ಮೊದಲೇ ಮಾಹಿತಿ ನೀಡಿ ಬಸ್‌ ಕೊರತೆ ಉಂಟಾಗದಂತೆ ಗಮನಹರಿಸಲು ನಿರ್ದೇಶನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT