ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೈಕೆ ಕೇಂದ್ರಗಳಲ್ಲಿ ಮಕ್ಕಳಿಗೆ ಪ್ರತ್ಯೇಕ ವ್ಯವಸ್ಥೆ

ಕೋವಿಡ್ ಮೂರನೇ ಅಲೆ ಎದುರಿಸಲು ಸಜ್ಜಾಗಿ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ
Last Updated 24 ಜೂನ್ 2021, 14:35 IST
ಅಕ್ಷರ ಗಾತ್ರ

ಮಡಿಕೇರಿ: ‘ಕೋವಿಡ್ 3ನೇ ಅಲೆ ಎದುರಿಸುವ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ರಕ್ಷಣೆಗೆ ತ್ವರಿತ ಚಿಕಿತ್ಸೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕೋವಿಡ್ ಅಲೆ ಮುನ್ನೆಚ್ಚರಿಕೆ ಮತ್ತು ಪೂರ್ವಭಾವಿ ಸಿದ್ಧತೆ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಕೋವಿಡ್-19 ಪ್ರಕರಣಗಳು ಎಷ್ಟು ಮಂದಿ ಮಕ್ಕಳಲ್ಲಿ ಕಂಡುಬಂದಿದೆ? ಎಷ್ಟು ಮಂದಿ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಮಕ್ಕಳಲ್ಲಿ ಕೋವಿಡ್ ಪಾಸಿಟಿವಿಟಿ ಕಂಡುಬಂದಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಆಮ್ಲಜನಕ ಅವಶ್ಯವಿರುವ ಮಕ್ಕಳಿಗೆ ತಾಲ್ಲೂಕು ಆಸ್ಪತ್ರೆಗಳಿಗೆ ದಾಖಲು ಮಾಡಿಸಬೇಕು. ಉಳಿದಂತೆ ಕೋವಿಡ್ ಆರೈಕೆ ಕೇಂದ್ರದಲ್ಲಿ ಮಕ್ಕಳನ್ನು ದಾಖಲಿಸಿ, ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ತೆರೆದಿರುವ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಜೊತೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿರುವ ವಿಕಲಚೇತನ ಮಕ್ಕಳ ಕಡೆ ಹೆಚ್ಚಿನ ಗಮನಹರಿಸಬೇಕು. ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಮಕ್ಕಳಿಗೆ ಅಗತ್ಯವಿರುವ ಪೌಷ್ಟಿಕ ಆಹಾರವನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯ ಲೋಪದೋಷವಾಗದಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಡಾ.ಮಹೇಶ್ ಅವರು ಮಾತನಾಡಿ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಕಿರಿಯ ಆರೋಗ್ಯ ಸಹಾಯಕರು ದಿನಕ್ಕೊಮ್ಮೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬೇಕು. ಮಕ್ಕಳಿಗಾಗಿಯೇ ಕೋವಿಡ್ ಆಸ್ಪತ್ರೆಯಲ್ಲಿ 50 ಹಾಸಿಗೆಗಳನ್ನು ಕಾಯ್ದಿರಿಸಿಕೊಳ್ಳಬೇಕಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ಕೋವಿಡ್ ಆರೈಕೆ ಕೇಂದ್ರದಲ್ಲಿ ದಾಖಲಾಗುವ ಮಕ್ಕಳ ಪೋಷಕರಿಗೆ ಆರೈಕೆ ಕೇಂದ್ರದಲ್ಲಿಯೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಪೋಷಕರು ಇರಲು ವ್ಯವಸ್ಥೆ ಮಾಡಬೇಕು ಎಂದು ಅವರು ಸಲಹೆ ಮಾಡಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧೀಕ್ಷಕ ಡಾ.ಮಂಜುನಾಥ್, ಮಕ್ಕಳ ತಜ್ಞರಾದ ಡಾ.ಪುರುಷೋತ್ತಮ, ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಡಾ.ಆನಂದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ವಿ.ಸುರೇಶ್ ಅವರು ಹಲವು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಆಡಳಿತಾಧಿಕಾರಿ ನಂಜುಂಡೇಗೌಡ, ಡಾ.ಪ್ರದೀಪ್, ಡಾ.ವಿಶಾಲ್ ಕುಮಾರ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT