ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಭಾಗದಲ್ಲಿ ಕನ್ನಡದ ಅಸ್ಮಿತೆ ಹೆಚ್ಚಿಸಿ

ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ರಾಜ್ಯ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಸೂಚನೆ
Last Updated 21 ಸೆಪ್ಟೆಂಬರ್ 2022, 16:12 IST
ಅಕ್ಷರ ಗಾತ್ರ

ಮಡಿಕೇರಿ: ‘ಜಿಲ್ಲಾಮಟ್ಟದ ಅಧಿಕಾರಿಗಳು ಗಡಿ ಪ್ರದೇಶದ ಗ್ರಾಮಗಳಲ್ಲಿ ತಿಂಗಳಿಗೊಮ್ಮೆಯಾದರೂ ಗ್ರಾಮ ವಾಸ್ತವ್ಯ ಮಾಡಿ, ಕುಂದುಕೊರತೆ ಆಲಿಸಬೇಕು ಹಾಗೂ ಕನ್ನಡದ ಅಸ್ಮಿತೆ ಹೆಚ್ಚಿಸುವ ಕಾರ್ಯಕ್ರಮ ರೂಪಿಸಬೇಕು’ ಎಂದು ರಾಜ್ಯ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಅವರು ಪ್ರಾಧಿಕಾರದಿಂದ ಬಿಡುಗಡೆಯಾಗಿರುವ ಅನುದಾನ, ಹಣ ಬಳಕೆ ಪ್ರಮಾಣ ಪತ್ರ ಹಾಗೂ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಮಾತನಾಡಿದರು.

‘ಕೊಡಗು ಜಿಲ್ಲೆಗೆ ಪ್ರಾಧಿಕಾರದಿಂದ 2011-12 ರಿಂದ 2021-22 ರವರೆಗೆ ₹ 66 ಕೋಟಿ ಬಿಡುಗಡೆ ಮಾಡಲಾಗಿದೆ. ಗಡಿ ಭಾಗದ ಜನರಲ್ಲಿ ಕನ್ನಡ ಭಾಷೆ, ಸಂಸ್ಕೃತಿಯನ್ನು ಉತ್ತೇಜಿಸುವ ಪ್ರಯತ್ನಗಳು ನಿಲ್ಲದೇ ಸತತವಾಗಿ ಮುಂದುವರಿಯಬೇಕು’ ಎಂದೂ ಕಿವಿಮಾತು ಹೇಳಿದರು.

‘ಗಡಿ ಪ್ರದೇಶದಲ್ಲಿ ಕೊಡಗಿನ ಇತಿಹಾಸ, ದಾರ್ಶನಿಕರನ್ನು ಒಳಗೊಂಡ ಕಿರುಪುಸ್ತಕ ಪ್ರಕಟಿಸುವುದು, ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಗಳನ್ನು ರಕ್ಷಿಸಲು ಪ್ರಾಧಿಕಾರದಿಂದ ನೆರವು ನೀಡಲಾಗುವುದು’ ಎಂದೂ ಭರವಸೆ ನೀಡಿದರು.

ಗಡಿ ಪ್ರದೇಶದ ವ್ಯಾಪ್ತಿಯಲ್ಲಿನ ಎಲ್ಲ 998 ಗ್ರಾಮಗಳಲ್ಲೂ ಕನ್ನಡ ಅಸ್ಮಿತೆಯನ್ನು ಹೆಚ್ಚಿಸಲು ಪ್ರಾಧಿಕಾರದಿಂದ ಸಾಂಸ್ಕೃತಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಗ್ರಂಥಾಲಯ ಮತ್ತು ಪಠ್ಯಪುಸ್ತಕಗಳ ವಿತರಣೆ, ಶುದ್ಧ ಕುಡಿಯುವ ನೀರು ಘಟಕ ನಿರ್ಮಾಣ, ಕನ್ನಡ ಶಿಕ್ಷಕರ ನೇಮಕ, ಸಾಂಸ್ಕೃತಿಕ ಉತ್ಸವ, ಶಾಲೆಗಳಲ್ಲಿ ಕನ್ನಡ ಪಠ್ಯಕ್ರಮ ಬೋಧನೆಯಲ್ಲಿ ತಾರತಮ್ಯವಾಗದಂತೆ ಗಮನಹರಿಸಬೇಕು ಎಂದು ಸೂಚಿಸಿದರು.

ಗಡಿ ಪ್ರದೇಶಗಳಲ್ಲಿ ಹೊರ ರಾಜ್ಯದಲ್ಲಿ ಹಳ್ಳಿಗಳ ಹೆಸರು ಬದಲಾವಣೆಯಾಗಿದೆಯೇ ಎಂಬ ಬಗ್ಗೆ ಖಾತರಿಪಡಿಸಿಕೊಳ್ಳಬೇಕು, ಕುಟ್ಟ, ಮಾಕುಟ್ಟ, ಕರಿಕೆ ಗಡಿ ಪ್ರದೇಶಗಳಲ್ಲಿ ಪ್ರವೇಶ ದ್ವಾರ ನಿರ್ಮಾಣ ಮಾಡಲು ಅಗತ್ಯ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಸ್ಮಾರ್ಟ್ ಕ್ಲಾಸ್‍ಗೆ ಹಣ ಒದಗಿಸಲಾಗುತ್ತಿದೆ. ಗಡಿ ಭಾಗದ ಗ್ರಾಮಗಳಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣ, ಗ್ರಾಮೀಣ ಭಾಗದಲ್ಲಿ ಕಲಾವಿದರಿಗೆ ಪ್ರೋತ್ಸಾಹ, ಯರವ ಭಾಷೆಯ ಜೊತೆ ಕನ್ನಡ ಭಾಷೆ ಕಲಿಸಬೇಕು ಎಂದರು.

ಸುವರ್ಣ ಸಮುಚ್ಚಯ ಭವನ ಕಾಮಗಾರಿ; ಶೀಘ್ರ ಪೂರ್ಣ

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ‘ನಗರದಲ್ಲಿ ನಿರ್ಮಾಣ ಆಗುತ್ತಿರುವ ಸುವರ್ಣ ಸಮುಚ್ಚಯ ಭವನ ನಿರ್ಮಾಣ ಕಾಮಗಾರಿಯನ್ನು ಆದಷ್ಟು ತ್ವರಿತವಾಗಿ ಪೂರ್ಣಗೊಳಿಸಲಾಗುವುದು’ ಎಂದರು.

‘ಜಿಲ್ಲೆಯಲ್ಲಿ ದಾರ್ಶನಿಕರು, ಸಂತರ ಸ್ಮಾರಕವನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಕಿರುಪುಸ್ತಕ ಪ್ರಕಟಿಸಬೇಕು. ಗಡಿ ಭಾಗದಲ್ಲಿ ಕನ್ನಡ ಶಾಲೆಗಳು ಸೊರಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಶಾಲೆಗಳಲ್ಲಿ ಗ್ರಂಥಾಲಯ, ಪೀಠೋಪಕರಣ, ಬಯಲು ರಂಗಮಂದಿರ ನಿರ್ಮಾಣ, ಸಾಂಸ್ಕೃತಿಕ ಭವನ ನಿರ್ಮಾಣ ಸೇರಿದಂತೆ ಮತ್ತಿತರ ಕಾರ್ಯಗಳು ಆಗಬೇಕಿದೆ’ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಗದೀಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೇದಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎನ್.ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT