ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮತಗಟ್ಟೆಗಳಲ್ಲಿ ಮೂಲಸೌಕರ್ಯ ಕಲ್ಪಿಸಿ’

ಮತಗಟ್ಟೆ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ
Published 4 ಏಪ್ರಿಲ್ 2024, 5:53 IST
Last Updated 4 ಏಪ್ರಿಲ್ 2024, 5:53 IST
ಅಕ್ಷರ ಗಾತ್ರ

ಸೋಮವಾರಪೇಟೆ: ‘ಲೋಕಸಭಾ ಚುನಾವಣೆಯಲ್ಲಿ ತಾಲ್ಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರಿಗೆ ಯಾವುದೇ ಸಮಸ್ಯೆ ಆಗದಂತೆ ಮೂಲ ಸೌಕರ್ಯಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿಯವರು ವ್ಯವಸ್ಥೆ ಮಾಡಿಕೊಡಬೇಕು’ ಎಂದು ತಹಶೀಲ್ದಾರ್ ನವೀನ್ ಕುಮಾರ್ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಸ್ವೀಪ್ ಸಮಿತಿಯಿಂದ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಮತಗಟ್ಟೆ ಅಧಿಕಾರಿಗಳು ಹಾಗೂ ಬಿಎಲ್ಒ ಮೇಲ್ವಿಚಾರಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

‘ಮತದಾನದ ಕೇಂದ್ರಗಳಲ್ಲಿ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸರಿ ಇರುವಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು. ಜನರಲ್ಲಿ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕಿದೆ. 85 ವರ್ಷ ಮೇಲ್ಪಟ್ಟವರು ಹಾಗೂ ಶೇ 40ಕ್ಕಿಂತಲೂ ಹೆಚ್ಚಿನ ಅಂಗವೈಕಲ್ಯಕ್ಕೊಳಗಾದವರಿಗೆ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಂತವರಿಗೆ ಮನೆಗಳಲ್ಲಿಯೇ ಮತದಾನಕ್ಕೆ ವ್ಯವಸ್ಥೆ ಮಾಡಲಿದ್ದು, ಸದ್ಯದಲ್ಲಿಯೇ ದಿನ ನಿಗದಿಗೊಳಿಸಿ ಮಾಹಿತಿ ನೀಡಲಾಗುವುದು. ಸಂಬಂಧಿಸಿದ ಅಧಿಕಾರಿಗಳು ಮನೆಗಳಿಗೆ ತೆರಳಿ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು. ಮತದಾನಕ್ಕೆ ಯಾವುದೇ ಚ್ಯುತಿ ಬಾರದ ಹಾಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಬೇಕು’ ಎಂದು ತಿಳಿಸಿದರು.

ಸ್ವೀಪ್ ಸಮಿತಿ ಅಧ್ಯಕ್ಷ, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಮಾತನಾಡಿ, ‘ಲೋಕಸಭಾ ಚುನಾವಣೆಯನ್ನು ಒಂದು ಹಬ್ಬದ ರೀತಿ ಆಚರಿಸಲು ಚುನಾವಣಾಧಿಕಾರಿ ತೀರ್ಮಾನಿಸಿದ್ದು, ಅದಕ್ಕೆ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೈಜೋಡಿಸಬೇಕು. ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ಸ್ಥಳೀಯ ಬಿಎಲ್ಒಗಳು ಮತದಾರರ ಮನವೊಲಿಸಬೇಕು’ ಎಂದರು.

‘ಮತದಾನಕ್ಕೆ ಆಗಮಿಸಲು ವಾಹನ ಸೌಲಭ್ಯಗಳಿಲ್ಲದವರಿಗೆ ಸ್ಥಳೀಯ ಪಂಚಾಯಿತಿಯಿಂದ ವಾಹನದ ವ್ಯವಸ್ಥೆ ಮಾಡಿಕೊಡಬೇಕು. ಎಲ್ಲ ಮತದಾರರಿಗೆ ಮತಪತ್ರ ಮತ್ತು ಮಾಹಿತಿ ಪತ್ರವನ್ನು ನೀಡಬೇಕು. ಜಾಗೃತಿ ಮೂಡಿಸಲು ಏ. 21ರಂದು ಮತಗಟ್ಟೆಯಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. 5ರಂದು ಚುನಾವಣೆ ಬಗ್ಗೆ ಚಿತ್ರಕಲಾ ಸ್ಪರ್ಧೆ ಸ್ಥಳೀಯ ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿದೆ. 13ರಂದು ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಸಲಾಗುವುದು ಹಾಗೂ ಬೈಕ್ ಜಾಥಾ ಆಯೋಜಿಸಲಾಗುವುದು’ ಎಂದು ತಿಳಿಸಿದರು.

ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯಕ್, ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ಕಾಳಾನಾಯಕ್, ತರಬೇತಿ ಅಧಿಕಾರಿಗಳಾದ ಜಯಕುಮಾರ್, ಪೂವಯ್ಯ, ಕಿರಣ್ ಇದ್ದರು.

ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದ ಸಿಬ್ಬಂದಿ
ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದ ಸಿಬ್ಬಂದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT