ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿನವಿಡೀ ಸಂಭ್ರಮಿಸಿ, ಕನ್ನಡ ಉಳಿಸಿ: ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಮನವಿ

‘ಕರ್ನಾಟಕ ಸಂಭ್ರಮ-50’; ವಿಶೇಷವಾಗಿ ಸಂಭ್ರಮಿಸಲು ಜಿಲ್ಲಾಧಿಕಾರಿ ಮನವಿ
Published 31 ಅಕ್ಟೋಬರ್ 2023, 5:04 IST
Last Updated 31 ಅಕ್ಟೋಬರ್ 2023, 5:04 IST
ಅಕ್ಷರ ಗಾತ್ರ

ಮಡಿಕೇರಿ: ‘ಕರ್ನಾಟಕ ಸಂಭ್ರಮ-50’ರ ಪ್ರಯುಕ್ತ ನವೆಂಬರ್‌ 1ರಿಂದ ವರ್ಷವಿಡೀ ಕಾರ್ಯಕ್ರಮಕ್ಕೆ ಸಜ್ಜಾಗಿದ್ದು, ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಎಲ್ಲ ಜನರು ವಿಶೇಷವಾಗಿ ಸಂಭ್ರಮಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಮನವಿ ಮಾಡಿದ್ದಾರೆ.

‘ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವುದರಿಂದ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಜಿಲ್ಲೆಯ ಎಲ್ಲಾ ಜನತೆಯ ಸಹಕಾರದಿಂದ ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ನ.1ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ‘ಕರ್ನಾಟಕ ಸಂಭ್ರಮ-50’, ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ’ ಕೋರಿದ್ದಾರೆ.

‘ಅಂದು ಬೆಳಿಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ ನಾಡಗೀತೆ ಪ್ರಸಾರವಾಗಲಿದ್ದು, ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸಬೇಕು’ ಎಂದು ಸೂಚಿಸಿದ್ದಾರೆ.

‘ಸಂಜೆ 7 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವಂತೆಯೂ’ ಮನವಿ ಮಾಡಿದ್ದಾರೆ.

‘ರಾಜ್ಯೋತ್ಸವದ ದಿನ ಗಾಯನಕ್ಕಾಗಿ ಹುಯಿಲಗೋಳ ನಾರಾಯಣರಾಯರ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ಕುವೆಂಪು ಅವರ ‘ಎಲ್ಲಾದರು ಇರು ಎಂತಾದರು ಇರು...’, ದ.ರಾ.ಬೇಂದ್ರೆ ಅವರ ‘ಒಂದೇ ಒಂದೇ ಕರ್ನಾಟಕ ಒಂದೇ...’, ಸಿದ್ದಯ್ಯ ಪುರಾಣಿಕ ಅವರ ‘ಹೊತ್ತಿತೋ ಹೊತ್ತಿತು ಕನ್ನಡದ ದೀಪ..’ ಮತ್ತು ಚೆನ್ನವೀರ ಕಣವಿ ಅವರ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ..’ ಗೀತೆಗಳನ್ನು ಹಾಡಲಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ.

1ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ:

ಕೊಡಗು ಜಿಲ್ಲಾಡಳಿತ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನವೆಂಬರ್‌ 1ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸುವರು.

ಶಾಸಕ ಡಾ.ಮಂತರ್‌ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷೆ ಎನ್.ಪಿ.ಅನಿತಾ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಕೊಡಗು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಪಾಲ್ಗೊಳ್ಳುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT