ಬುಧವಾರ, ಸೆಪ್ಟೆಂಬರ್ 18, 2019
23 °C
ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಕೆಂಚಪ್ಪ

ವಿದ್ಯಾರ್ಥಿಗಳಲ್ಲಿ ಸಂಶೋಧನಾ ‍ಪ್ರವೃತ್ತಿ ಅಗತ್ಯ

Published:
Updated:
Prajavani

ಮಡಿಕೇರಿ: ‘ವಿದ್ಯಾರ್ಥಿಗಳಲ್ಲಿ ಸಂಶೋಧನಾ ಪ್ರವೃತ್ತಿ ಹೆಚ್ಚಾಗಬೇಕು’ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ. ಕೆಂಚಪ್ಪ ಕರೆ ನೀಡಿದರು.

ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಆಯ್ಕೆ ಸ್ಪರ್ಧೆಯಲ್ಲಿ ವಿಜ್ಞಾನ ಪುಸ್ತಕಗಳ ಬಿಡುಗಡೆ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ವಿದ್ಯಾರ್ಥಿಗಳಿಗೆ ವೈವಿಧ್ಯಮಯ ಚಟುವಟಿಕೆ ಸಂಘಟಿಸಲಾಗುತ್ತಿದೆ. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಿ, ಭವಿಷ್ಯದಲ್ಲಿ ಉತ್ತಮ ಸಂಶೋಧಕರಾಗಿ ರೂಪುಗೊಳ್ಳಬೇಕು. ವಿದ್ಯಾರ್ಥಿಗಳು ಮೂಲ ವಿಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ವಿಜ್ಞಾನ ಮತ್ತು ಪರಿಸರದ ಸವಾಲು ಎದುರಿಸಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚು ಅಧ್ಯಯನ ಕೈಗೊಳ್ಳಬೇಕು’ ಎಂದು ಹೇಳಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ ಪರಿಸರ ಅಧಿಕಾರಿ ಜಿ.ಆರ್.ಗಣೇಶನ್‌ ಮಾತನಾಡಿ, ‘ವಿದ್ಯಾರ್ಥಿಗಳು ಜನರಲ್ಲಿ ನೀರಿನ ಮಿತಬಳಕೆ, ಪ್ಲಾಸ್ಟಿಕ್ ಬಳಕೆ ನಿಯಂತ್ರಣ ಸೇರಿದಂತೆ ಪರಿಸರ ಸ್ನೇಹಿ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದರು.

ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಟಿ.ಜಿ.ಪ್ರೇಮಕುಮಾರ್, ವಿದ್ಯಾಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆವಿಷ್ಕಾರ ಕೈಗೊಳ್ಳುವ ದಿಸೆಯಲ್ಲಿ ಇಂತಹ ಸ್ಪರ್ಧೆ ಸಂಘಟಿಸಲಾಗಿದೆ ಎಂದು ಹೇಳಿದರು.

2018ರಲ್ಲಿ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಪ್ರಬಂಧ ಮಂಡಿಸಿದ್ದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಯುವ ವಿಜ್ಞಾನಿ ಲಿಖಿತಾ ಮುತ್ತಕ್ಕ ಮಾತನಾಡಿ, ‘ವಿದ್ಯಾರ್ಥಿಗಳಾದ ನಾವು ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಸಂಶೋಧನೆ ಕೈಗೊಳ್ಳುವ ಮೂಲಕ ರಾಷ್ಟ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಪಣತೊಡಬೇಕು’ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್, ಉಪನ್ಯಾಸಕರಾದ ಎನ್.ಎಸ್. ಚಿದಾನಂದ, ಸಂಪನ್ಮೂಲ ವ್ಯಕ್ತಿಗಳಾದ ಜಿ.ಶ್ರೀನಾಥ್, ಎಸ್.ಎಚ್.ಈಶ, ಉಪನ್ಯಾಸಕ ಎಸ್.ನಂದೀಶ್ ಹಾಜರಿದ್ದರು.

ಜಿಲ್ಲೆಯ ವಿವಿಧ ಶಾಲಾ– ಕಾಲೇಜಿನಿಂದ ಆಗಮಿಸಿದ್ದ 17 ವಿದ್ಯಾರ್ಥಿಗಳ ತಂಡದ ವತಿಯಿಂದ ವಿಜ್ಞಾನ ಯೋಜನಾ ಮಾದರಿಗಳ ಬಗ್ಗೆ ಪ್ರಬಂಧ ಮಂಡಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು. 

Post Comments (+)