ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಜಿಲ್ಲಾಮಟ್ಟದ ಮಾರ್ಗದರ್ಶಿ ಕಾರ್ಯಾಗಾರ
Last Updated 4 ನವೆಂಬರ್ 2019, 15:15 IST
ಅಕ್ಷರ ಗಾತ್ರ

ಮಡಿಕೇರಿ: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸ್ವಚ್ಛ, ಹಸಿರು ಮತ್ತು ಆರೋಗ್ಯವಂತ ರಾಷ್ಟ್ರಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಗಳು ಎಂಬ ಕೇಂದ್ರ ವಿಷಯದಡಿ ನಡೆಯಲಿರುವ 27ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಪೂರ್ವಭಾವಿಯಾಗಿ ಶಿಕ್ಷಕರಿಗೆ ಜಿಲ್ಲಾಮಟ್ಟದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರ ಸೋಮವಾರ ನಡೆಯಿತು. ನಗರದ ರೋಟರಿ ಮಕ್ಕಳ ವಿಜ್ಞಾನ ಕೇಂದ್ರದಲ್ಲಿ ನಡೆದ ಕಾರ್ಯಾಗಾರದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.

ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಶಿಕ್ಷಕರು ಮಕ್ಕಳಲ್ಲಿ ಮೂಲ ವಿಜ್ಞಾನ ಕಲಿಕೆಯಲ್ಲಿ ಆಸಕ್ತಿ ಬೆಳೆಸುವುದರೊಂದಿಗೆ, ಮಕ್ಕಳನ್ನು ಅನ್ವೇಷಣಾ ಕ್ಷೇತ್ರದಲ್ಲಿ ತೊಡಗಿಸುವ ಮೂಲಕ ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಪ್ರೇರೇಪಿಸಬೇಕು ಎಂದರು.

ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ನವೀನ ಪರಿಕಲ್ಪನೆಗಳು ಮತ್ತು ವೈಜ್ಞಾನಿಕ ವಿಧಾನಗಳ ಮೂಲಕ ಪ್ರಚಲಿತ ಪ್ರಾಕೃತಿಕ ಹಾಗೂ ಪರಿಸರ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲು ಇಂತಹ ಸಮ್ಮೇಳನಗಳು ಪೂರಕವಾಗಿವೆ ಎಂದರು.

ಜಿಲ್ಲೆಯಲ್ಲಿ ರಾಜ್ಯ ವಿಜ್ಞಾನ ಪರಿಷತ್ತು, ಶಿಕ್ಷಣ ಇಲಾಖೆ ಸಹಕಾರದೊಂದಿಗೆ ವೈವಿಧ್ಯಮಯ ವಿಜ್ಞಾನ ಕಾರ್ಯಕ್ರಮಗಳ ಮೂಲಕ ವಿಜ್ಞಾನ ಜನಪ್ರಿಯಗಳಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಬೇಬಿ ಮ್ಯಾಥ್ಯು ಹೇಳಿದರು.

ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಜಿ.ಪ್ರೇಮಕುಮಾರ್, ಈ ಸಮಾವೇಶವು ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸಲು ಉತ್ತಮ ವೇದಿಕೆ ಒದಗಿಸಿದೆ ಎಂದರು.

ಸಮಾವೇಶದ ಮೂಲಕ ಮಕ್ಕಳನ್ನು ಸ್ಥಳೀಯ ಸಾಮಾಜಿಕ ಸಮಸ್ಯೆಯನ್ನು ಪರಿಹರಿಸಲು ಹಾಗೂ ಸಂಶೋಧನೆ ಕೈಗೊಳ್ಳಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯಮಟ್ಟದ ಸಮಾವೇಶವು ಡಿ.16ರಿಂದ 18ರ ತನಕ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಹಾಗೂ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ಡಿ. 27ರಿಂದ 5 ದಿನಗಳ ಕಾಲ ಕೇರಳ ರಾಜ್ಯದ ತಿರುವನಂತಪುರದಲ್ಲಿ ನಡೆಯಲಿದೆ ಎಂದು ಪ್ರೇಮಕುಮಾರ್ ಮಾಹಿತಿ ನೀಡಿದರು.

ಸಮಾವೇಶದ ಕೈಪಿಡಿ ಬಿಡುಗಡೆಗೊಳಿಸಿದ ರೋಟರಿ ಕ್ಲಬ್ ಅಧ್ಯಕ್ಷ ರತನ್ ತಮ್ಮಯ್ಯ ಮಾತನಾಡಿ, ಈ ಸಮಾವೇಶದ ಮೂಲಕ ಮಕ್ಕಳು ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ವೈಜ್ಞಾನಿಕ ಕಾರಣಗಳೇನು ಎಂಬುದರ ಬಗ್ಗೆ ಸಂಶೋಧನೆ ನಡೆಸಲು ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ಸಲಹೆ ಮಾಡಿದರು.

ರೋಟರಿ ಮಿಸ್ಟಿಹಿಲ್ಸ್‌ ಅಧ್ಯಕ್ಷ ಎಂ.ಆರ್.ಜಗದೀಶ್, ಇಂತಹ ಸಮಾವೇಶದ ಮೂಲಕ ಕೊಡಗಿನ ಬಾಲ ವಿಜ್ಞಾನಿಗಳು ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿರುವುದು ಶ್ಲಾಘನೀಯ ಎಂದರು.

ಸಮಾವೇಶಕ್ಕೆ ಮಕ್ಕಳಿಂದ ವೈಜ್ಞಾನಿಕ ಯೋಜನಾ ಪ್ರಬಂಧ ತಯಾರಿಸುವ ಕುರಿತು ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಂಪನ್ಮೂಲ ಶಿಕ್ಷಕ ಜಿ.ಶ್ರೀನಾಥ್ ಅವರು ಮಾಹಿತಿ ನೀಡಿದರು.

ರೋಟರಿ ಮಿಸ್ಟಿ ಹಿಲ್ಸ್‌ ಕಾರ್ಯದರ್ಶಿ ಪ್ರಮೋದ್ ರೈ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತರಾದ ಜಿಮ್ಮಿ ಸಿಕ್ವೇರಾ ಅವರು ಮಾತನಾಡಿದರು.

ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಮಾಜಿ ಉಪಾಧ್ಯಕ್ಷರಾದ ರೇವತಿ ರಮೇಶ್, ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ, ಜಿಲ್ಲಾ ಶೈಕ್ಷಣಿಕ ಸಂಯೋಜಕ ಎಂ.ಎನ್.ವೆಂಕಟನಾಯಕ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT