ಮಡಿಕೇರಿ: ತಾತ್ಕಾಲಿಕ ಶೆಡ್ ನಿರ್ಮಾಣ ಚರ್ಚೆ, ಬಾಡಿಗೆ ಮನೆ ಪಡೆಯಲು ಅವಕಾಶ

ಮಡಿಕೇರಿ: ‘ತಾತ್ಕಾಲಿಕ ಶೆಡ್ ನಿರ್ಮಾಣ ಸಂಬಂಧ ಚರ್ಚೆ ನಡೆಯುತ್ತಿದ್ದು, ಶೆಡ್ನಲ್ಲಿ ಉಳಿಯಲು ಇಷ್ಟಪಡದವರು 6 ತಿಂಗಳ ಕಾಲ ಬಾಡಿಗೆ ಮನೆಯಲ್ಲಿರಲು ಅವಕಾಶವಿದೆ’ ಎಂದು ಮಡಿಕೇರಿ ತಹಶೀಲ್ದಾರ್ ಕುಸುಮಾ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಭೂಕುಸಿತದಿಂದ ಮನೆ ಕಳೆದುಕೊಂಡವರಿಗೆ ಆದ್ಯತೆ ಮೇರೆಗೆ ಮನೆ ನಿರ್ಮಿಸಲು ಸರ್ಕಾರ ಈಗಾಗಲೇ ಸೂಚಿಸಿದೆ. ಮನೆ ಕಳೆದುಕೊಂಡವರ ಪಟ್ಟಿಯನ್ನೂ ಸಿದ್ಧ ಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಬಿಳಿಗೇರಿ, ಕರ್ಣಂಗೇರಿ ಗ್ರಾಮದಲ್ಲಿ ಜಾಗ ಪರಿಶೀಲನೆ ಕಾರ್ಯ ಆರಂಭಿಸಲಾಗಿದೆ. ಮಡಿಕೇರಿಯಲ್ಲಿ ಜಾಗದ ಸಮಸ್ಯೆಯಿದ್ದು, ಸಂತ್ರಸ್ತರಿಗೆ ಮನೆ ನಿರ್ಮಿಸುವ ಮೊದಲು ಜಾಗದ ಸುರಕ್ಷತೆ ಸಂಬಂಧ ಭೂವಿಜ್ಞಾನಿಗಳಿಂದ ಸಂಪೂರ್ಣ ಮಾಹಿತಿ ಪಡೆಯಲಾಗುತ್ತದೆ ಎಂದು ಹೇಳಿದರು.
ಸದಸ್ಯ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಅನೇಕ ಕಡೆ ಪರಿಹಾರ ಸಾಮಗ್ರಿ ದುರುಪಯೋಗ ಆಗುತ್ತಿರುವ ಬಗ್ಗೆ ಸಭೆಯ ಗಮನ ಸೆಳೆದರು.
ತಾಲ್ಲೂಕು ಪಂಚಾಯಿತಿ ಇಒ ಪಿ. ಲಕ್ಷ್ಮಿ ಪ್ರತಿಕ್ರಿಯಿಸಿ, ‘ಸಂಬಂಧಪಟ್ಟವರ ವಿರುದ್ಧ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ 10 ಕಡೆ ದಾಳಿ ನಡೆಸಿ ದಾಸ್ತಾನು ಮಾಡಿದ್ದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಸ್ಪಷ್ಟನೆ ನೀಡಿದರು.
ಮಡಿಕೇರಿ ತಾಲ್ಲೂಕಿನಲ್ಲಿ 6,500 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ನಾಟಿ ಗುರಿ ಹೊಂದಲಾಗಿತ್ತು. ಆದರೆ, ಶೇ.20ರಷ್ಟು ನಾಟಿ ಮಾತ್ರ ಆಗಿದೆ. ಪ್ರಾರಂಭಿಕ ಹಂತದಲ್ಲಿಯೇ ಮಳೆ ಹೆಚ್ಚಾದ ಕಾರಣ ಸಸಿಮಡಿಗಳು ನಾಶವಾಗಿದೆ. ಇಂತಹ ರೈತರಿಗೆ ಪರ್ಯಾಯವಾಗಿ 200 ಕೆ.ಜಿ.ಭತ್ತದ ಬೀಜ ವಿತರಣೆಯಾಗಿದೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು.
ಕೊಡಗಿನ ಹಲವು ಭಾಗದಲ್ಲಿ ಕೂಲಿ ಕಾರ್ಮಿಕರು ಕೆಲಸವಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸದಸ್ಯ ದಬ್ಬಡ್ಕ ಶ್ರೀಧರ್ ಒತ್ತಾಯಿಸಿದರು.
ಉಪಾಧ್ಯಕ್ಷ ಸಂತು ಸುಬ್ರಮಣಿ, ಸ್ಥಾಯಿ ಸಮಿತಿ ಸದಸ್ಯ ಕೊಡಪಾಲು ಗಣಪತಿ ಹಾಜರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.