ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರಪೇಟೆ: ಸರ್ಕಾರಿ ಶಾಲೆಗೆ ಸೇರಲು ‍ಪೈಪೋಟಿ

ಸತತ 2 ವರ್ಷ ಶೇ 100 ಫಲಿತಾಂಶ ಪಡೆದ ಸರ್ಕಾರಿ ಶಾಲೆ; ವಿದ್ಯಾರ್ಥಿಗಳ ಸಂತಸ
Last Updated 11 ಮಾರ್ಚ್ 2023, 4:25 IST
ಅಕ್ಷರ ಗಾತ್ರ

ಸೋಮವಾರಪೇಟೆ: ಇಲ್ಲಿನ ಐಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಎರಡು ವರ್ಷಗಳಿಂದ ಸತತವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ದಾಖಲಿಸಿದೆ.

ಇಲ್ಲಿನ ಶಿಕ್ಷಕರು ಉತ್ತಮ ಶಿಕ್ಷಣ ನೀಡುತ್ತಿದ್ದು, ಈ ಪ್ರೌಢಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 129 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಸುತ್ತಮುತ್ತಲ ಪ್ರದೇಶಗಳಲ್ಲಿ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಖಾಸಗಿ ಶಾಲೆಗಳಿಗೂ ಸೆಡ್ಡು ಹೊಡೆಯುವಂತಿದೆ. ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಮಾತ್ರವಲ್ಲ, ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ವಿದ್ಯಾರ್ಥಿಗಳನ್ನೂ ಈ ಶಾಲೆ ಸೂಜಿಗಲ್ಲಿನಂತೆ ಸೆಳೆಯುತ್ತಿದೆ.

ಸರ್ಕಾರಿ ಕನ್ನಡ ಶಾಲೆಗಳಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುತ್ತಿರುವ ಲ್ಯಾಪ್‌ಟಾಪ್‌ ಅನ್ನು ಕಳೆದ 7 ವರ್ಷದಿಂದ ಇಲ್ಲಿನ ವಿದ್ಯಾರ್ಥಿಗಳು ನಿರಂತರವಾಗಿ ಪಡೆಯುತ್ತಿದ್ದಾರೆ. ಖಾಸಗಿ ಶಾಲೆ ಮೀರಿಸುವ ಸುಸಜ್ಜಿತ ವಿಜ್ಞಾನ ಪ್ರಯೋಗಶಾಲೆ ಮತ್ತು ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇಲ್ಲಿ ಇರುವುದು ವಿಶೇಷ. ಪ್ರಯೋಗಶಾಲೆಗೆ ಸಂಬಂಧಿಸಿದಂತೆ ಎಲ್ಲಾ ಉಪಕರಣಗಳು ಇಲ್ಲಿ ಇರುವುದರಿಂದ ವಿದ್ಯಾರ್ಥಿಗಳು ನೇರವಾಗಿ ಇಲ್ಲಿ ಬಂದು, ಪಾಠಕ್ಕೆ ಸಂಬಂಧಿಸಿದ ಪ್ರಯೋಗಗಳಲ್ಲಿ ತೊಡಗಿಕೊಳ್ಳುತ್ತಾರೆ.

‘ಶಾಲೆಯ ವಿಜ್ಞಾನ ಶಿಕ್ಷಕಿ ರಂಜಿನಿ ವಿದ್ಯಾರ್ಥಿಗಳಿಗೆ ಕೇವಲ ಮಾರ್ಗದರ್ಶನವನ್ನು ಮಾತ್ರ ಮಾಡುತ್ತಿದ್ದು, ಎಲ್ಲ ಪ್ರಯೋಗಗಳನ್ನು ವಿದ್ಯಾರ್ಥಿಗಳಿಂದಲೇ ಮಾಡಿಸುತ್ತಿರುವುದು ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತಿದೆ’ ಎಂದು ವಿದ್ಯಾರ್ಥಿನಿ ಗೌತಮಿ ತಿಳಿಸಿದರು.

ವಿಜ್ಞಾನ ವಿಷಯದಲ್ಲಿ ಪ್ರತಿ ತರಗತಿಯಲ್ಲಿ 6 ವಿದ್ಯಾರ್ಥಿಗಳ ತಂಡಗಳನ್ನು ರಚಿಸಿದ್ದು, ಪ್ರಯೋಗ ಶಾಲೆಯಲ್ಲಿ 6 ಟೇಬಲ್ ಹಾಕಿ, ಒಂದೊಂದು ಗುಂಪು ಒಂದೊಂದು ಟೇಬಲ್‌ನಲ್ಲಿ ಪ್ರಯೋಗಗಳನ್ನು ಮಾಡುತ್ತಾರೆ. ಇದು ಗುಂಪು ಚರ್ಚೆಗೂ ಹೆಚ್ಚಿನ ಅನುಕೂಲವಾಗುತ್ತಿದೆ. ಇದರೊಂದಿಗೆ ಸರ್ಕಾರದ ‘ದೀಕ್ಷಾ ಆ್ಯಪ್‌’ ಮೂಲಕ ನೀಡುತ್ತಿರುವ ಶಿಕ್ಷಣವನ್ನು ಸ್ಮಾರ್ಟ್ ತರಗತಿಯ ಮೂಲಕ ನೀಡುತ್ತಿರುವುದು ವಿದ್ಯಾರ್ಥಿಗಳಿಗೆ ಹೆಚ್ಚಿನ ವಿಷಯಗಳನ್ನು ತಿಳಿಯಲು ಅನುಕೂಲವಾಗಿದೆ.

‘ಹೆಚ್ಚಿನ ಪೋಷಕರು ಖಾಸಗಿ ಶಾಲೆಗಳತ್ತ ತಮ್ಮ ಮಕ್ಕಳನ್ನು ಸೇರಿಸುತ್ತಿದ್ದು, ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಐಗೂರಿನ ಸರ್ಕಾರಿ ಶಾಲೆ ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಶಿಕ್ಷಣ ನೀಡುತ್ತಿರುವುದು ಗ್ರಾಮೀಣ ವಿದ್ಯಾರ್ಥಿಗಳಿಗೆ ವರದಾನವಾಗಿದೆ’ ಎಂದು ಹೊಸತೋಟ ದಿನೇಶ್ ಹೇಳಿದರು.

‘ಶಾಲೆಯಲ್ಲಿ ಎಲ್ಲ ಶಿಕ್ಷಕರು ಉತ್ತಮವಾಗಿ ಪಾಠ ಮಾಡುತ್ತಿರುವುದು ನಮಗೆ ಹೆಚ್ಚಿನ ಕಲಿಕೆಗೆ ಅವಕಾಶವಾಗಿದೆ. ಶಿಕ್ಷಕರು ವಿಶೇಷ ತರಗತಿಗಳನ್ನು ತೆಗೆದುಕೊಂಡು ಸಮಯಕ್ಕೂ ಮುನ್ನ ಪಠ್ಯವನ್ನು ಮುಗಿಸುವುದರಿಂದ ನಾವು ಅಭ್ಯಾಸ ಮಾಡಲು ಸಮಯಾವಕಾಶ ಹೆಚ್ಚು ಸಿಗುತ್ತದೆ’ ಎಂದು ವಿದ್ಯಾರ್ಥಿ ಮನು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT