ಬುಧವಾರ, ಸೆಪ್ಟೆಂಬರ್ 29, 2021
20 °C

ಕಬಿನಿ ಜಲಾಶಯದಿಂದ 15 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕಬಿನಿ ಜಲಾಶಯದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸದ್ದಾರೆ.

ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳ ಹರಿವು ಹೆಚ್ಚಾಗಿದೆ. ನದಿ ಪಾತ್ರದಲ್ಲಿರುವ ಹಾಗೂ ನದಿ ದಂಡೆಯಲ್ಲಿರುವ ಜನರು ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಆಗುತ್ತಿರುವ ಕಾರಣ ಕಬಿನಿ ಜಲಾಶಯಕ್ಕೆ 13 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ. ಇಂದು 20 ಸಾವಿರ ಕ್ಯುಸೆಕ್‌ವರೆಗೆ ನೀರನ್ನು ನದಿಗೆ ಬಿಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ.

ರಾಜ್ಯದ ಹಲವೆಡೆ ವರುಣನ ಅಬ್ಬರ ಮುಂದುವರಿದಿದ್ದು, ನದಿ ಹಳ್ಳ–ಕೊಳ್ಳಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.

ಕೊಡಗು ಜಿಲ್ಲೆಯಲ್ಲಿ ಸೋಮವಾರ ದಿನವಿಡೀ ಧಾರಾಕಾರ ಮಳೆಯಾಗಿದೆ. ಹಾರಂಗಿ ಜಲಾಶಯದ ಒಳಹರಿವು ಏರಿಕೆಯಾಗುತ್ತಿದ್ದು, ಹೊರ ಹರಿವು ಸಹ ಹೆಚ್ಚಿಸಲಾಗಿದೆ. ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಹಾಸನ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಆಗಾಗ ಬಿಡುವು ನೀಡಿ ಅಬ್ಬರಿಸುತ್ತಿದೆ. ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಕುಮಾರಧಾರಾ ನದಿಯ ನೀರಿನ ಪ್ರಮಾಣ ಏರಿಕೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ನೇತ್ರಾವತಿ, ಫಲ್ಗುಣಿ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲೂ ಮಳೆ ಬಿರುಸುಗೊಂಡಿದ್ದು, ಕುಂದಾಪುರ, ಕಾರ್ಕಳ, ಬೈಂದೂರು, ಉಡುಪಿ, ಹೆಬ್ರಿ, ಕಾಪು, ಬ್ರಹ್ಮಾವರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ.

ಧಾರಾಕಾರ ಮಳೆ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಚುರುಕಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಹರಿವು ಸ್ವಲ್ಪ ಜಾಸ್ತಿಯಾಗಿದೆ. ಎನ್‌.ಆರ್‌.ಪುರ, ಮೂಡಿಗೆರೆ ಸುತ್ತಮುತ್ತ ಧಾರಾಕಾರವಾಗಿ ಸುರಿದಿದೆ. ಕೊಟ್ಟಿಗೆಹಾರದಲ್ಲಿ 5.4 ಸೆಂ.ಮೀ ಮಳೆಯಾಗಿದೆ. ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಮಲಯ ಮಾರುತ ಬಳಿ ಗುಡ್ಡದ ಮಣ್ಣು ರಸ್ತೆ ಬದಿಗೆ ಕುಸಿದಿದೆ. ತರೀಕೆರೆ, ಚಿಕ್ಕಮಗಳೂರು  ಗಿರಿಶ್ರೇಣಿ, ಶೃಂಗೇರಿ, ಕೊಪ್ಪ, ಕಳಸ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.