ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘152 ದೇಶಗಳಲ್ಲಿರುವ ಅಂಬೇಡ್ಕರ್ ಪ್ರತಿಮೆ ಕೊಡಗಿನಲ್ಲಿ ಇಲ್ಲ’

ಕರ್ನಾಟಕ ದಲಿತ ಸಂಘರ್ಷ ಸಮಿತಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಸಿ.ನವೀನ್ ಕುಮಾರ್ ಬೇಸರ
Published 29 ಜೂನ್ 2024, 6:34 IST
Last Updated 29 ಜೂನ್ 2024, 6:34 IST
ಅಕ್ಷರ ಗಾತ್ರ

ಮಡಿಕೇರಿ: ‘ಜಗತ್ತಿನ 152 ದೇಶಗಳಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಇದೆ. ಆದರೆ, ಕೊಡಗಿನಲ್ಲಿ ಇನ್ನೂ ಪ್ರತಿಮೆ ಅವರ ಸ್ಥಾಪನೆಯಾಗಿಲ್ಲ’ ಎಂದು ಮಕ್ಕಳ ತಜ್ಞ ವೈದ್ಯ ಡಾ.ಬಿ.ಸಿ.ನವೀನ್ ಕುಮಾರ್ ಬೇಸರ ವ್ಯಕ್ತಪಡಿಸಿದರು.

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಗರಸಭೆಯ ಪೌರಕಾರ್ಮಿಕರಿಗೆ ಸ್ವೆಟರ್ ಹಾಗೂ ಶ್ರೀ ಶಕ್ತಿ ವೃದ್ಧಾಶ್ರಮದ ವಾಸಿಗಳಿಗೆ ಬಟ್ಟೆ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಇತ್ತೀಚಿನ ಸಾಮಾಜಿಕ ಮತ್ತು ಜಾತಿ ವ್ಯವಸ್ಥೆಯು ಒಂದು ಸಮುದಾಯಕ್ಕೆ ಸೀಮಿತಗೊಳಿಸಿರುವುದು ಸರಿಯಲ್ಲ ಎಂದು ಅವರು ಹೇಳಿದರು.

ಅಂಬೇಡ್ಕರ್ ಅವರು ಈ ಸಮಾಜದ ಶೋಷಿತ ವರ್ಗ, ಕಾರ್ಮಿಕರು, ಮಹಿಳೆಯರು, ರೈತರ ಅಭ್ಯುದಯ ಮತ್ತು ದೇಶದ ಅಭಿವೃದ್ಧಿಗಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರನ್ನು ಜಾತಿ ರಹಿತವಾಗಿ ಕಾಣಬೇಕು ಎಂದು ಪ್ರತಿಪಾದಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮಾತನಾಡಿ, ‘ಡಾ.ಅಂಬೇಡ್ಕರ್ ಅವರು ಸಾಗರ ಇದ್ದಂತೆ, ಅವರ ಸಮ ಸಮಾಜದ ಕಲ್ಪನೆಯ ಕನಸನ್ನು ನನಸು ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ’ ಎಂದು ತಿಳಿಸಿದರು.

ಪ್ರತಿಯೊಂದು ವರ್ಗದವರ ಅಭಿವೃದ್ಧಿಯಲ್ಲೂ ಅಂಬೇಡ್ಕರ್ ಅವರ ಪಾತ್ರವಿದೆ. ಸಮಾಜದಲ್ಲಿ ಎಲ್ಲರಿಗೂ ಎಲ್ಲಾ ಕ್ಷೇತ್ರಗಳಲ್ಲಿ ಸಮಾನ ಅವಕಾಶ ಸಿಗಲು ಕಾರಣಕರ್ತರಾಗಿರುವ ಅವರ ಚಿಂತನೆಗಳು ಸದಾ ಜೀವಂತವಾಗಿರಲಿದೆ ಎಂದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ಮಾತನಾಡಿ, ಪೌರಕಾರ್ಮಿಕರು ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ, ಆದರೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ’ ಎಂದು ಶ್ಲಾಘಿಸಿದರು.

ಸಮಿತಿಯ ಕೊಡಗು-ಮೈಸೂರು ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಸಮಾಜ ಸೇವಕ ಪ್ರದೀಪ್ ಕರ್ಕೆರ, ನಗರಸಭೆಯ ಹಿರಿಯ ಪೌರಕಾರ್ಮಿಕ ರಾಮು, ವಿಕಾಸ್ ಜನಸೇವಾ ಟ್ರಸ್ಟ್ ಸದಸ್ಯೆ ಪೂವಮ್ಮ, ಸಮಿತಿ ಸದಸ್ಯ ವೇಣುಕಿಶೋರ್, ಪ್ರೇಮ ಕೃಷ್ಣಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT