ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶನಿವಾರಸಂತೆ | ಕಾಡಾನೆ ದಾಳಿ: ರೈತ ಸಾವು

Published 31 ಮಾರ್ಚ್ 2024, 15:27 IST
Last Updated 31 ಮಾರ್ಚ್ 2024, 15:27 IST
ಅಕ್ಷರ ಗಾತ್ರ

ಶನಿವಾರಸಂತೆ (ಕೊಡಗು ಜಿಲ್ಲೆ): ಸಮೀಪದ ಹೊಸಗುತ್ತಿ ಗ್ರಾಮದ ಜಗದೀಶ್ ಅಲಿಯಾಸ್ ಕಾಂತ (50) ಎಂಬುವವರು ಭಾನುವಾರ ಬೆಳಿಗ್ಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಇದರೊಂದಿಗೆ, ಕೊಡಗು ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿದೆ. ಶನಿವಾರ ವಿರಾಜಪೇಟೆ ತಾಲ್ಲೂಕಿನಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು.

ಜಗದೀಶ್ ತಮ್ಮ ತೋಟದಲ್ಲಿನ ಮೋಟಾರ್‌ ಆಫ್ ಮಾಡಿ ವಾಪಸಾಗಲು ರಸ್ತೆಬದಿ ನಿಲ್ಲಿಸಿದ್ದ ದ್ವಿಚಕ್ರವಾಹನದ ಬಳಿಗೆ ಹೋಗುತ್ತಿದ್ದಾಗ ಆನೆ ದಾಳಿ ಮಾಡಿದೆ. ಅವರಿಂದ ತಪ್ಪಿಸಿಕೊಳ್ಳಲಾಗಿಲ್ಲ ಎಂದು ಸ್ಥಳೀಯರು ತಿಳಿಸಿದರು.

ಮಂಜು ಕವಿದಿದ್ದರಿಂದ ಕಾಡಾನೆ ಬರುವುದನ್ನು ಗುರುತಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದರು.

ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ‘ಮೃತರ ಕುಟುಂಬಕ್ಕೆ ತಕ್ಷಣವೇ ಪರಿಹಾರ ಕೊಡಬೇಕು. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಕಾಡಾನೆಯನ್ನು ಸೆರೆ ಹಿಡಿಯಬೇಕು’ ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಬಂದ ಡಿಸಿಎಫ್ ಭಾಸ್ಕರ್ ಪರಿಹಾರವಾಗಿ ₹ 15 ಲಕ್ಷ ಮೊತ್ತದ ಚೆಕ್‌ ನೀಡಿದರು. ‘ಕುಟುಂಬದವರಿಗೆ ಮಾಸಾಶನ ಬರುವಂತೆ ವ್ಯವಸ್ಥೆ ಮಾಡಲಾಗುವುದು. ಕಾಡಾನೆಯನ್ನು ಗುರುತಿಸಿ ಸೆರೆ ಹಿಡಿಯಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಭರವಸೆ ನೀಡಿದರು. 

ಡಿವೈಎಸ್‌ಪಿ ಗಂಗಾಧರ್, ಸಿಪಿಐ ವಸಂತ್‌ಕುಮಾರ್, ಎಸ್‌ಐ ರವಿಶಂಕರ್, ವಲಯ ಅರಣ್ಯಾಧಿಕಾರಿ ಗಾನಶ್ರೀ ಸ್ಥಳಕ್ಕೆ ಭೇಟಿ ನೀಡಿದ್ದರು.

ಕಾಡಾನೆಯನ್ನು ಗುರುತಿಸುವ ಕಾರ್ಯಕ್ಕೆ ಅರಣ್ಯ ಇಲಾಖೆ ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT