ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು | ‘ಯುವನಿಧಿ’ಗೆ 881 ಅಭ್ಯರ್ಥಿಗಳು ಅರ್ಹರು

ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ
Published 27 ಡಿಸೆಂಬರ್ 2023, 8:37 IST
Last Updated 27 ಡಿಸೆಂಬರ್ 2023, 8:37 IST
ಅಕ್ಷರ ಗಾತ್ರ

ಮಡಿಕೇರಿ: ‘ಯುವನಿಧಿ’ ಯೋಜನೆಗೆ ಚಾಲನೆ ನೀಡಲಾಗಿದ್ದು, ಕೊಡಗು ಜಿಲ್ಲೆಯಲ್ಲಿ  ಒಟ್ಟು 881 ಅಭ್ಯರ್ಥಿಗಳನ್ನು ಈ ಯೋಜನೆಗಾಗಿ ಗುರುತಿಸಲಾಗಿದೆ.

ಇವರಲ್ಲಿ ಬಿಕಾಂ ವಿಭಾಗದಲ್ಲಿ 300, ಬಿಸಿಎ 120, ಬಿಬಿಎ 84, ಬಿಎ 120, ಬಿಎಸ್ಸಿ 70, ಡಿಪ್ಲೋಮಾ ವಿಭಾಗದಲ್ಲಿ 187  ಅಭ್ಯರ್ಥಿಗಳಿದ್ದಾರೆ.

ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ವತಿಯಿಂದ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ‘ಭಿತ್ತಿಪತ್ರ’ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘2023ನೇ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ, ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಸೇರಿದಂತೆ) ಪ್ರತೀ ತಿಂಗಳು ₹ 3 ಸಾವಿರ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತೀ ತಿಂಗಳು ₹ 1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ‘ಯುವನಿಧಿ’ ಯೋಜನೆಯಡಿ ನೀಡಲಾಗುವುದು’ ಎಂದು ಅವರು ತಿಳಿಸಿದರು.

ಪದವಿ ಅಥವಾ ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು 2 ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. 2 ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವು ಸ್ಥಗಿತಗೊಳ್ಳಲಿದೆ. ಭತ್ಯೆಯನ್ನು ‘ಡಿಬಿಟಿ’ ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಿದೆ ಎಂದು ಹೇಳಿದರು.

ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಉಮಾ ಮಾತನಾಡಿ, ‘ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು, ಶಿಶಿಕ್ಷು ವೇತನ ಪಡೆಯುತ್ತಿರುವವರು, ಸರ್ಕಾರಿ, ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ’ ಎಂದು ಮಾಹಿತಿ ನೀಡಿದರು.

ಯುವನಿಧಿ ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಬಹುದು. ಉಚಿತವಾಗಿ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸಹಾಯವಾಣಿ ಸಂಖ್ಯೆ 18005999918 ಸಂಪರ್ಕಿಸಬಹುದು.

ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ಸಾಂಖ್ಯಿಕ ಅಧಿಕಾರಿ ಡಾ.ಎಚ್.ಜೆ.ರೂಪಾ, ಜಿಲ್ಲಾ ಸಂಯೋಜಕ ಎನ್.ಆರ್.ರವಿಕುಮಾರ್ ಭಾಗವಹಿಸಿದ್ದರು.

www.sevasindhugs.karnataka.gov.in ಮೂಲಕ ಅರ್ಜಿ ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರದಲ್ಲೂ ಅರ್ಜಿ ಸಲ್ಲಿಸಬಹುದು ಸಹಾಯವಾಣಿ ಸಂಖ್ಯೆ 18005999918

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT