ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಜಿಲ್ಲೆಯಲ್ಲಿ 3 ಸೋಂಕಿತರ ಸಾವು

ಸಾವಿನ ಸಂಖ್ಯೆ 67ಕ್ಕೆ ಏರಿಕೆ: ಮತ್ತೆ 106 ಮಂದಿಗೆ ಸೋಂಕು
Last Updated 9 ಸೆಪ್ಟೆಂಬರ್ 2020, 16:32 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಬುಧವಾರ 3 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 67ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿದ್ದ ಸೋಂಕಿತರ ಪೈಕಿ ಕೋಲಾರ, ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, 106 ಮಂದಿಗೆ ಸೋಂಕು ಹರಡಿರುವುದು ಬುಧವಾರ ದೃಢಪಟ್ಟಿದೆ.

ಗುಣಮುಖ ಪ್ರಮಾಣಕ್ಕೆ ಹೋಲಿಸಿದರೆ ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಹೆಚ್ಚಳವಾಗಿರುವುದು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ವಿಷಮ ಶೀತ ಜ್ವರವಿರುವ 78 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 20 ಮಂದಿಗೆ ಸೋಂಕು ಬಂದಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 53 ಮಂದಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ. ವಿಷಮ ಶೀತ ಜ್ವರಪೀಡಿತ 37 ಮಂದಿ, ಸೋಂಕಿತರ ಸಂಪರ್ಕದಿಂದ 10 ಮಂದಿ, 5 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಹೊರ ಜಿಲ್ಲೆಗೆ ಹೋಗಿದ್ದ ಒಬ್ಬರಿಗೆ ಸೋಂಕು ಹರಡಿದೆ.

ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 4 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 4 ಮಂದಿಗೆ, ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 8 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 6 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 15 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಹಾಗೂ ಹೊರ ಜಿಲ್ಲೆಗೆ ಹೋಗಿದ್ದ ಒಬ್ಬರಿಗೆ ಸೋಂಕು ಬಂದಿರುವುದು ದೃಢಪಟ್ಟಿದೆ.

ಮಾಲೂರು ತಾಲ್ಲೂಕಿನ 5 ಮಂದಿ ಮತ್ತು ಮುಳಬಾಗಿಲು ತಾಲ್ಲೂಕಿನ 9 ಮಂದಿಗೆ ಸೋಂಕು ತಗುಲಿದೆ. ಇವರೆಲ್ಲರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸುರಕ್ಷತಾ ಕ್ರಮವಾಗಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT