ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ ನಿಲ್ದಾಣ ಎದುರು ಎಬಿವಿಪಿ ಧರಣಿ

ಎಲ್ಲಾ ವರ್ಗಕ್ಕೂ ಉಚಿತ ಬಸ್‌ ಪಾಸ್‌ ನೀಡುವಂತೆ ಒತ್ತಾಯ
Last Updated 4 ಜುಲೈ 2018, 13:23 IST
ಅಕ್ಷರ ಗಾತ್ರ

ಕೋಲಾರ: ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್ ನೀಡಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸದಸ್ಯರು ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಎದುರು ಬುಧವಾರ ಧರಣಿ ನಡೆಸಿದರು.

‘ಎಲ್ಲಾ ವರ್ಗದ ವಿದ್ಯಾರ್ಥಿಗಳು ಸಮಾನರು. ಆದರೆ, ಸರ್ಕಾರ ಜಾತಿ ಆಧಾರದಲ್ಲಿ ತಾರತಮ್ಯ ಮಾಡುತ್ತಿದೆ. ಉಚಿತ ಬಸ್‌ ಪಾಸ್‌ ನೆಪದಲ್ಲಿ ವಿದ್ಯಾರ್ಥಿಗಳ ಮಧ್ಯೆ ಜಾತಿಯ ವಿಷ ಬೀಜ ಬಿತ್ತುತ್ತಿದೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು. ‘ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ ಪಾಸ್‌ ಕೊಡಲಾಗುತ್ತಿತ್ತು. ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಈ ಸೌಲಭ್ಯ ವಿಸ್ತರಿಸುವಂತೆ ಹಿಂದಿನ ವರ್ಷ ಹೋರಾಟ ನಡೆಸಿದ್ದೆವು. ಹೋರಾಟಕ್ಕೆ ಮಣಿದ ಹಿಂದಿನ ಕಾಂಗ್ರೆಸ್‌ ಸರ್ಕಾರ ಬೇಡಿಕೆ ಈಡೇರಿಕೆಗೆ ಒಪ್ಪಿಗೆ ಸೂಚಿಸಿತ್ತು’ ಎಂದು ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಎಚ್‌.ನವೀನ್‌ ಹೇಳಿದರು.

‘ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಫೆಬ್ರುವರಿಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ 19.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಕೊಡುವುದಾಗಿ ಘೋಷಿಸಿದ್ದರು. ಪರಿಶಿಷ್ಟರು ಮತ್ತು ಇತರ ವರ್ಗಗಳ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 22 ಲಕ್ಷ ಮಂದಿಗೆ ಬಸ್‌ ಪಾಸ್‌ ಅಗತ್ಯವಿದೆ. ಈಗ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರವು ಹಿಂದಿನ ಸರ್ಕಾರದ ಆದೇಶ ಹಿಂಪಡೆದು ಪರಿಶಿಷ್ಟ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ ಪಾಸ್‌ ಕೊಡುವಂತೆ ಆದೇಶಿಸಿದೆ’ ಎಂದು ತಿಳಿಸಿದರು.

‘ಸರ್ಕಾರ ಉಚಿತ ಬಸ್‌ ಪಾಸ್‌ ಸೌಲಭ್ಯಕ್ಕಾಗಿ ₹ 836.96 ಕೋಟಿ ಬಿಡುಗಡೆ ಮಾಡಿದೆ. ಆದರೆ, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಕೊಡಲು ಹೆಚ್ಚುವರಿಯಾಗಿ ₹ 629.32 ಕೋಟಿ ಅಗತ್ಯವಿದೆ. ಈ ಸಂಬಂಧ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಹಣಕಾಸು ಇಲಾಖೆಗೆ ಪತ್ರ ಬರೆದು ಹೆಚ್ಚುವರಿ ಅನುದಾನ ಕೇಳಿದ್ದಾರೆ. ಆದರೆ, ಹಣಕಾಸು ಇಲಾಖೆಯು ಅನುದಾನ ಬಿಡುಗಡೆಗೆ ನಿರಾಕರಿಸಿದೆ’ ಎಂದರು.

ತರಾತುರಿ ನಿರ್ಧಾರ: ‘ರೈತರ ಸಾಲ ಮಾಡುವ ಉದ್ದೇಶಕ್ಕಾಗಿ ಸರ್ಕಾರ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಹೊರಟಿದೆ. ಇದರ ಭಾಗವಾಗಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಪಾಸ್‌ ಬಸ್ ವಿತರಣೆಯ ಆದೇಶ ಹಿಂಪಡೆದಿದೆ. ಗ್ರಾಮೀಣ ಭಾಗದ ರೈತರು ಹಾಗೂ ಕೃಷಿ ಕಾರ್ಮಿಕರ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಬಸ್‌ ಪಾಸ್‌ ಮೇಲೆ ಅವಲಂಬಿತರಾಗಿದ್ದಾರೆ. ಸರ್ಕಾರ ಈ ಸಂಗತಿಯನ್ನು ಪರಿಗಣನೆಗೆ ತೆಗೆದುಕೊಳ್ಳದೆ ತರಾತುರಿಯಲ್ಲಿ ನಿರ್ಧಾರ ಕೈಗೊಂಡಿದೆ’ ಎಂದು ಧರಣಿನಿರತರು ಆರೋಪಿಸಿದರು.

‘ರಾಜ್ಯದೆಲ್ಲೆಡೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸ್ಥಿತಿಯಲ್ಲಿ ಮಕ್ಕಳ ಶೈಕ್ಷಣಿಕ ವೆಚ್ಚ ಭರಿಸುವುದು ಅವರಿಗೆ ಕಷ್ಟ. ಹೀಗಾಗಿ ಕೇರಳ ಮತ್ತು ತಮಿಳುನಾಡು ರಾಜ್ಯದ ಮಾದರಿಯಲ್ಲಿ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಾಸ್‌ ಕೊಟ್ಟರೆ ಪೋಷಕರ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗುತ್ತದೆ’ ಎಂದು ಹೇಳಿದರು.

ಹಣ ಹಿಂದಿರುಗಿಸಲಿ: ‘ಕೆಲ ಶಾಲಾ ಕಾಲೇಜುಗಳಲ್ಲಿ ಬಸ್‌ ಪಾಸ್‌ಗಾಗಿ ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸಿ ಕೆಎಸ್‌ಆರ್‌ಟಿಸಿ ಡಿಪೊಗಳಿಗೆ ಕಟ್ಟಲಾಗಿದೆ. ಈ ಹಣ ಹಿಂದಿರುಗಿಸಬೇಕು. ಸರ್ಕಾರ ಉಚಿತ ಶಿಕ್ಷಣ, ಉಚಿತ ಪ್ರಯಾಣ ಬೇಡಿಕೆ ಈಡೇರಿಸುವ ಮೂಲಕ ವಿದ್ಯಾರ್ಥಿಗಳ ಪರ ನಿಲ್ಲಬೇಕು. ಇಲ್ಲವಾದರೆ ರಾಜ್ಯದೆಲ್ಲೆಡೆ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಎಬಿವಿಪಿ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಚೇತನ್‌, ಶಿವು, ಗಣೇಶ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT