ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಇಲಾಖೆ ವಿರುದ್ಧ ಕ್ರಮ: ಡಿ.ಸಿ ಎಚ್ಚರಿಕೆ

ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ: ಅಕ್ರಮಕ್ಕೆ ಕಡಿವಾಣ ಹಾಕಲು ಸೂಚನೆ
Last Updated 11 ಜೂನ್ 2021, 14:23 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಆರಂಭವಾಗಿದ್ದು, ರಸಗೊಬ್ಬರಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರುತ್ತಿರುವ ಬಗ್ಗೆ ಆರೋಪ ಕೇಳಿಬಂದಿವೆ. ಈ ಅಕ್ರಮಕ್ಕೆ ಕಡಿವಾಣ ಹಾಕದಿದ್ದರೆ ಇಲಾಖೆ ಮೇಲೆ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರೂಪಾದೇವಿ ಅವರಿಗೆ ಎಚ್ಚರಿಕೆ ನೀಡಿದರು.

ಇಲ್ಲಿ ಶುಕ್ರವಾರ ನಡೆದ ಮುಂಗಾರು ಮತ್ತು ಹಿಂಗಾರು ಮಳೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ರೈತರ ಹಿತ ಕಾಯುವುದು ಅಧಿಕಾರಿಗಳ ಜವಾಬ್ದಾರಿ. ಈ ಜವಾಬ್ದಾರಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ರೈತರಿಗೆ ನ್ಯಾಯ ಒದಗಿಸುವುದು ಸಾಧ್ಯವಿಲ್ಲ. ಅಧಿಕಾರಿಗಳು ರೈತರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಸಮಸ್ಯೆ ಆಗದಂತೆ ಎಚ್ಚರ ವಹಿಸುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಖಾಸಗಿಯವರ ಬಳಿ ರಸಗೊಬ್ಬರದ ದಾಸ್ತಾನು ಎಷ್ಟಿದೆ, ತೂಕದ ಪ್ರಮಾಣ ಸರಿ ಇದೆಯೇ, ದಿನನಿತ್ಯದ ವಹಿವಾಟಿನ ವಿವರ ಸೇರಿದಂತೆ ಎಲ್ಲವನ್ನೂ ಅಧಿಕಾರಿಗಳು ಪರಿಶೀಲಿಸಬೇಕು’ ಎಂದು ಹೇಳಿದರು.

‘ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಿಗಬೇಕು. ಜಿಲ್ಲಾ ಕೇಂದ್ರದಲ್ಲಿ ಗೊಬ್ಬರ, ಬಿತ್ತನೆ ಬೀಜ ದಾಸ್ತಾನು ಮಾಡಬೇಕು. ಬೇಡಿಕೆ ಹೆಚ್ಚಿದೆ ಎಂದು ಹೆಚ್ಚುವರಿಯಾಗಿ ಹಣ ವಸೂಲಿ ಮಾಡುವ ಅಂಗಡಿಗಳ ಮಾಲೀಕರ ವಿರುದ್ಧ ಮುಲಾಜಿಲ್ಲದ ಕ್ರಮ ಕೈಗೊಂಡರೆ ಮಾತ್ರ ಬುದ್ಧಿ ಕಲಿಯುುತ್ತಾರೆ. ಹೀಗಾಗಿ ಅಧಿಕಾರಿಗಳು ಮೊದಲು ಈ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

ದರಪಟ್ಟಿ ಹಾಕಿ: ‘ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವ ಕಾರಣ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ. ಈ ಹಿಂದೆ ಕೂಡ ಅಂಗಡಿ ಮಾಲೀಕರು ಮತ್ತು ಡೀಲರ್‌ಗಳು ಹೆಚ್ಚಿನ ಬೆಲೆಗೆ ಗೊಬ್ಬರ ಮತ್ತು ಬಿತ್ತನೆ ಬೀಜ ಮಾರಾಟ ಮಾಡಿದ ಬಗ್ಗೆ ರೈತರಿಂದಲೇ ದೂರು ಬಂದಿವೆ. ಅಂಗಡಿಗಳ ಮುಂಭಾಗದಲ್ಲಿ ರಸಗೊಬ್ಬರ ದಾಸ್ತಾನು ವಿವರ ಮತ್ತು ದರಪಟ್ಟಿ ಫಲಕವನ್ನು ಕಡ್ಡಾಯವಾಗಿ ಹಾಕಬೇಕು’ ಎಂದು ತಾಕೀತು ಮಾಡಿದರು.

‘ಎಲ್ಲೆಡೆ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಿರುವುದರಿಂದ ಖಾಸಗಿ ಡೀಲರ್‌ಗಳು ಸರ್ಕಾರಿ ಸೊಸೈಟಿಗಳಿಂದ ಕಡಿಮೆ ಬೆಲೆಗೆ ರಸಗೊಬ್ಬರ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಾಧ್ಯತೆಯಿದೆ. ಅಧಿಕಾರಿಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೋವಿಡ್‌ ಕಾರಣಕ್ಕೆ ಎಲ್ಲರಿಗೂ ಸಂಕಷ್ಟ ಎದುರಾಗಿದೆ. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದರು.

ಡಿಎಪಿ ಕೊರತೆ: ‘ಸಮೃದ್ಧವಾಗಿ ಮಳೆ ಬರುತ್ತಿರುವುದರಿಂದ ರೈತರು ಬೆಳೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಹಾಕುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಡಿಎಪಿ ಗೊಬ್ಬರದ ಕೊರತೆ ಎದುರಾಗಿದೆ. ಜಿಲ್ಲೆಗೆ ಹೆಚ್ಚಿನ ಪ್ರಮಾಣದಲ್ಲಿ ಗೊಬ್ಬರ ಸರಬರಾಜು ಮಾಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ. ರೈತರಿಗೆ ಅಗತ್ಯತೆಗೆ ತಕ್ಕಂತೆ ಗೊಬ್ಬರ ಒದಗಿಸುತ್ತೇವೆ. ಕೀಟನಾಶಕಗಳು, ಬಿತ್ತನೆ ಬೀಜ, ಗೊಬ್ಬರಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ರೂಪಾದೇವಿ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ನೆಪ ಮಾತ್ರಕ್ಕೆ ಒಂದೆರೆಡು ಕಡೆ ದಾಳಿ ನಡೆಸಿ ಸುಮ್ಮನಾಗುವುದಲ್ಲ. ರೈತರಿಂದ ದೂರು ಬಂದ ತಕ್ಷಣ ಸ್ಥಳಕ್ಕೆ ತೆರಳಿ ಕ್ರಮ ಕೈಗೊಂಡು ಅವರಿಗೆ ನ್ಯಾಯ ಒದಗಿಸಬೇಕು’ ಎಂದು ಸೂಚಿಸಿದರು.
ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು, ರಸಗೊಬ್ಬರ ಮಾರಾಟ ಮಳಿಗೆಗಳ ಮಾಲೀಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT