ಗುರುವಾರ , ಡಿಸೆಂಬರ್ 3, 2020
23 °C
ಪಿಡಿಓ, ಅಧ್ಯಕ್ಷರ ಸಭೆಯಲ್ಲಿ ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್‌ ಎಚ್ಚರಿಕೆ

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದಿದ್ದರೆ ಕ್ರಮ :ಸಿ.ಎಸ್.ವೆಂಕಟೇಶ್‌ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 ಕೋಲಾರ: ‘ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ತೊಂದರೆ ಅನುಭವಿಸಬೇಕಾಗುತ್ತದೆ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್‌ ಎಚ್ಚರಿಕೆ ನೀಡಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಗಂಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶ್ರೀನಿವಾಸಪುರ, ಬಂಗಾರಪೇಟೆ ತಾಲ್ಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಹಾಗೂ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿ, ‘ಗ್ರಾಮಗಳಲ್ಲಿ ಏನೇ ಸಮಸ್ಯೆ ಕಂಡುಬಂದರೂ ಜನ ಕೇಳುವುದು ಸ್ಥಳೀಯ ಜನಪ್ರತಿನಿಧಿಗಳನ್ನು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕೆಲಸದ ಕಡೆ ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.

‘ಸಾಕಷ್ಟು ಮಂದಿ ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದ್ದಾರೆ. ಇದಕ್ಕೆ ಸಕಾಲಕ್ಕೆ ಬಿಲ್ ಪಾವತಿ ಅಗಿಲ್ಲ ಎಂಬ ದೂರುಗಳು ಬಂದಿವೆ. ಪಿಡಿಒಗಳು ಸಂಬಂಧಪಟ್ಟ ಅಧಿಕಾರಿಗಳ ಜತೆ ಸ್ಥಳ ಪರಿಶೀಲನೆ ನಡೆಸಿ ಬಿಲ್ ಬಿಡುಗಡೆಗೆ ವರದಿ ಕಳುಹಿಸಲು ಅಗುವುದಿಲ್ಲವೆ’ ಎಂದು ತರಾಟೆಗೆ ತೆಗೆದುಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಉಪ ಕಾರ್ಯದರ್ಶಿ ಸಂಜೀವಪ್ಪ, ‘ನರೇಗಾ ಯೋಜನೆಯಡಿ ಕೆಲಸ ಮಾಡಿರುವ ವ್ಯಕ್ತಿಗಳಿಗೆ ಕೂಲಿ ಹಣ ಸಹ ಬಿಡುಗಡೆಯಾಗಿಲ್ಲ, ಈ ಸಂಬಂಧ ರಾಜ್ಯಮಟ್ಟದಲ್ಲಿ ಸಮಸ್ಯೆಯಾಗಿದ್ದು, ಅತಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಯಲಿದ್ದು, ಬಾಕಿ ಬಿಲ್ ಹಂತಹಂತವಾಗಿ ಬಿಡುಗಡೆಯಾಗುತ್ತದೆ’ ಎಂದು ಹೇಳಿದರು.

‘ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಿವೇಶನ, ವಸತಿ ರಹಿತರಿಗೆ ಹಕ್ಕು ಪತ್ರ ನೀಡಲು ಸರ್ಕಾರ ಆದೇಶ ನೀಡಿದೆ. ಸರ್ಕಾರಿ ಜಮೀನು ಗುರುತಿಸಿ ನಿವೇಶನ ಅಭಿವೃದ್ಧಿಪಡಿಸಬೇಕು’ ಎಂದು ಸೂಚಿಸಿದರು.

ಜಿ.ಪಂ ಸದಸ್ಯ ಬಿ.ವಿ.ಮಹೇಶ್ ಮಾತನಾಡಿ, ‘ಗ್ರಾಮ ಪಂಚಾಯಿತಿಮಟ್ಟದಲ್ಲಿ ಇ ಖಾತೆ ಮಾಡುವ ಅಧಿಕಾರ ಪಿಡಿಒಗಳಿಗೆ ಕೊಟ್ಟಿರುವ ಕಾರಣ, ಇವರ ವ್ಯವಹಾರ ಸೈಬರ್ ಸೆಂಟರ್, ರೆಸ್ಟೋರೆಂಟ್‌ಗಳಲ್ಲಿ ನಡೆಯುತ್ತಿದೆ. ಕನಿಷ್ಟ ಪಂಚಾಯಿತಿ ಅಧ್ಯಕ್ಷರ ಗಮನಕ್ಕೂ ತರುವುದಿಲ್ಲ, ಇದರ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕು ವ್ಯಾಪ್ತಿಯ ಗ್ರಾಮಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಏನು ಕ್ರಮಕೊಂಡಿದಿರಾ, ಅಧಿಕಾರಿಗಳ ಕಾರ್ಯವೈಖರಿಗೆ ಜನಪ್ರತಿನಿಧಿಗಳು ಜನರ ಮುಂದೆ ತಲೆ ತಗ್ಗಿಸಬೇಕಾದ ಪರಿಸ್ಥಿತಿ ಎದುರಾಗಿದೆ’ ಎಂದು ಅಸಮಾಧಾನವ್ಯಕ್ತಪಡಿಸಿದರು.

ಕುಡಿಯುವ ನೀರು ಸಬರಾಜು ಇಲಾಖೆ ಎಂಜನಿಯರ್ ಶೇಷಾದ್ರಿ ಮಾತನಾಡಿ, ‘ಒಟ್ಟು 28 ಸಮಸ್ಯಾತ್ಮಕ ಗ್ರಾಮಗಳಿದ್ದು, ಖಾಸಗಿ ಟ್ಯಾಂಕರ್ ಹಾಗೂ ರೈತರ ಕೊಳವೆಬಾವಿಯಿಂದ ನೀರು ಖರೀದಿ ಮಾಡಿ ಜನಕ್ಕೆ ನೀಡಲಾಗುತ್ತಿದೆ’ ಎಂದು ತಿಳಿಸಿದರು.

‘ಎರಡೂ ತಾಲ್ಲೂಕು ವ್ಯಾಪ್ತಿಯಲ್ಲಿ ಒಟ್ಟು 1,240 ಕೊಳವೆಬಾವಿಗಳನ್ನು ಕೊರೆಸಲಾಗಿದ್ದು, ಆ ಪೈಕಿ 472 ಕೊಳವೆಬಾವಿಗಳು ಬತ್ತಿ ಹೋಗಿದ್ದು, 768 ಕೊಳವೆಬಾವಿಗಳು ಚಾಲ್ತಿಯಲಿವೆ. ಕೊಳವೆಬಾವಿ ಕೊರೆದರು ನೀರು ಲಭ್ಯವಾಗದ ಗ್ರಾಮಗಳಿಗೆ ಖಾಸಗಿ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ’ ಎಂದು ವಿವರಿಸಿದರು.

ಸದಸ್ಯೆ ನಿರ್ಮಲಾ ಮಾತನಾಡಿ, ‘ಬೇತಮಂಗಲದಲ್ಲಿ ನಿರ್ಮಿಸಿರುವ ಸಮಯದಾಯ ಶೌಚಾಲಯದ ಕಟ್ಟಡ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಂಡಿಲ್ಲ’ ಎಂದು ದೂರಿದರು.

ಅಧ್ಯಕ್ಷ ಸಿ.ಎಸ್.ವೆಂಕಟೇಶ್‌ ಮಾತನಾಡಿ, ‘ಪಂಚಾಯತ್ ರಾಜ್ ವ್ಯವಸ್ಥೆಯನ್ನು ತಳಮಟ್ಟದಿಂದ ಸರಿಪಡಿಸುವ ಪ್ರಯತ್ನ ನಡೆಯುತ್ತಿದೆ. ಅಧಿಕಾರಿಗಳು ಇಷ್ಟುದಿನ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗೊತ್ತಿಲ್ಲ, ಇನ್ನಾದರೂ ನಿಮ್ಮ ವರ್ತನೆಗಳನ್ನು ಬದಲಾಯಿಸಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ತಾಕೀತು ಮಾಡಿದರು.

‘ಗ್ರಾಮಗಳಲ್ಲಿ ಸಾಕಷ್ಟು ಸರ್ಕಾರಿ ಜಾಗವಿದೆ, ಇದಕ್ಕೆ ಸಂಬಂಧಪಟ್ಟಂತೆ ಪಂಚಾಯಿತಿಗಳಲ್ಲಿ ಲಭ್ಯವಿರುವ ದಾಖಲೆಗನ್ನು ತೆಗೆದು ಆಸ್ತಿ ರಕ್ಷಣೆಗೆ ಮುಂದಾಗಬೇಕು, ಅಧಿಕಾರಿಗಳು ಪಕ್ಷಾತೀತವಾಗಿ ಕೆಲಸ ಮಾಡಬೇಕು, ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದರೆ ಕೂಡಲೇ ತೆರವುಗೊಳಿಸಬೇಕು’ ಎಂದು ಸೂಚಿಸಿದರು.

ಜಿ.ಪಂ ಉಪಾಧ್ಯಕ್ಷೆ ಯಶೋಧಾ, ಸದಸ್ಯರಾದ ಅಶ್ವಿನಿ, ಪಾರ್ವತಮ್ಮ, ಬಂಗಾರಪೇಟೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಮತಾ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು