ಶುಕ್ರವಾರ, ಜುಲೈ 30, 2021
28 °C

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮ: ರಮ್ಯ ದೀಪಿಕಾ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಕೋವಿಡ್‌ 3ನೇ ಅಲೆ ಆತಂಕದ ನಡುವೆ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಿಸಬೇಕು. ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅಗತ್ಯವಿದ್ದು, 18 ವರ್ಷದೊಳಗಿನ ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮ್ಯ ದೀಪಿಕಾ ಹೇಳಿದರು.

ಆರೋಗ್ಯ ಇಲಾಖೆಯು ರಾಷ್ಟ್ರೀಯ ಬಾಲ್ಯಸ್ವಾಸ್ಥ್ಯ ಕಾರ್ಯಕ್ರಮದಡಿ 18 ವರ್ಷದೊಳಗಿನ ಮಕ್ಕಳಿಗೆ ತಾಲ್ಲೂಕಿನ ಅರಾಭಿಕೊತ್ತನೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

‘ಮಕ್ಕಳಲ್ಲಿ ಅಪೌಷ್ಟಿತೆ ತಡೆಯುವುದು ಬಹಳ ಮುಖ್ಯ. ಈ ಉದ್ದೇಶಕ್ಕಾಗಿಯೇ ಎಸ್ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪ್ರತ್ಯೇಕ ಘಟಕವಿದೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ಚಿಕಿತ್ಸೆ ನೀಡಲಾಗುತ್ತದೆ. ಮಕ್ಕಳ ಜತೆಗೆ ಪೋಷಕರಿಗೂ ಹೋಗಿ ಬರುವ ಖರ್ಚು ನೀಡಲಾಗುತ್ತದೆ’ ಎಂದು ವಿವರಿಸಿದರು.

‘ಈಗ ಡೆಂಗಿ ವಿರೋಧಿ ಮಾಸಾಚರಣೆ ನಡೆಸಲಾಗುತ್ತಿದ್ದು. ಡೆಂಗಿ ಕಾಯಿಲೆ ನಿಯಂತ್ರಣದ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಸೊಳ್ಳೆಗಳ ಉತ್ಪತ್ತಿ ನಿಯಂತ್ರಿಸುವ ಮೂಲಕ ಡೆಂಗಿ ಕಾಯಿಲೆಯಿಂದ ರಕ್ಷಣೆ ಪಡೆಯಬಹುದು. ಮನೆಯ ಅಕ್ಕಪಕ್ಕ, ತೆಂಗಿನ ಚಿಪ್ಪು, ಟಯರ್‌ಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳ ಸಂತತಿ ಬೆಳೆಯದಂತೆ ಎಚ್ಚರ ವಹಿಸಬೇಕು’ ಎಂದರು.

ಆಪ್ತ ಸಮಾಲೋಚನೆ: ‘ಶಿಬಿರದಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ಜತೆಗೆ ಹದಿಹರೆಯದ ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಲಾಗುತ್ತದೆ. ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳನ್ನು ಗುರುತಿಸಿ ಅವರನ್ನು ಜಿಲ್ಲಾ ಆಸ್ಪತ್ರೆಯ ಮಕ್ಕಳ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ’ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಾಹಿತಿ ನೀಡಿದರು.

‘ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಮನೆಯಲ್ಲಿ ಸೊಳ್ಳೆ ಪರದೆ ಮತ್ತು ಸೊಳ್ಳೆ ನಾಶಕಗಳನ್ನು ಬಳಸಬೇಕು. ಮಕ್ಕಳಿರುವ ಮನೆಯಲ್ಲಿನ ಎಲ್ಲಾ ಪೋಷಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂಬ ತಜ್ಞರ ಸೂಚನೆ ಹಿನ್ನೆಲೆಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಕೋರಿದರು.

ಅರಾಭಿಕೊತ್ತನೂರು ಗ್ರಾ.ಪಂ ಅಧ್ಯಕ್ಷ ರಾಜಣ್ಣ ಸದಸ್ಯರಾದ ಎ.ಎಸ್.ನಂಜುಂಡಗೌಡ, ವೀಣಾ, ಕವಿತಾ, ವೈದ್ಯರಾದ ಡಾ.ಕವಿತಾ, ಡಾ.ಶಾಂತಾ, ಡಾ.ತೇಜಸ್ವಿನಿ, ಹಿರಿಯ ಆರೋಗ್ಯ ಸಹಾಯಕಿ ವಾಣಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು