ಭಾನುವಾರ, ಆಗಸ್ಟ್ 14, 2022
28 °C
ಬಿತ್ತನೆ ಬೀಜ–ರಸಗೊಬ್ಬರದ ಕೃತಕ ಅಭಾವ ಸೃಷ್ಟಿ

ಗೊಬ್ಬರದ ಕೃತಕ ಅಭಾವ ಸೃಷ್ಟಿ, ಮುಲಾಜಿಲ್ಲದೆ ಕ್ರಮ: ಕೃಷಿ ಸಚಿವರ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ರಾಜ್ಯದಲ್ಲಿ ಮುಂಗಾರು ಹಂಗಾಮು ಆರಂಭವಾಗಿದ್ದು, ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರುವವರ ವಿರುದ್ಧ ಮುಲಾಜಿಲ್ಲದೆ ಶಿಸ್ತುಕ್ರಮ ಜರುಗಿಸಿ ಪರವಾನಗಿ ರದ್ದುಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆಯಿಲ್ಲ. ಆದರೂ ಕೆಲವಡೆ ಬೀಜ, ಗೊಬ್ಬರದ ಕೊರತೆಯಿದೆ ಎಂದು ವದಂತಿ ಹಬ್ಬಿಸುತ್ತಿದ್ದಾರೆ. ಕೋಲಾರ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಕೊರತೆಯಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ನ್ಯಾನೋ ರಸಗೊಬ್ಬರ ಅರ್ಧ ಲೀಟರ್ ₹ 250ಕ್ಕೆ ಸಿಗುತ್ತದೆ. ಇದು 1 ಚೀಲ ಯೂರಿಯಾ ಗೊಬ್ಬರಕ್ಕೆ ಸಮ ಎನ್ನುತ್ತಿದ್ದಾರೆ. ರಾಜ್ಯದಲ್ಲೂ ಪ್ರಸಕ್ತ ವರ್ಷ ಈ ಗೊಬ್ಬರ ಬಳಕೆ ಮಾಡಿದ ಮೇಲೆ ಫಲಿತಾಂಶ ಗೊತ್ತಾಗುತ್ತದೆ. ‘ರೈತರ ಎಂತಹ ಸಂದರ್ಭದಲ್ಲೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ಇದ್ದು ಜಯಿಸಬೇಕು. ಸ್ವಲ್ಪ ತಾಳ್ಮೆ ತೆಗೆದುಕೊಳ್ಳಬೇಕು, ದುಡುಕಬಾರದು’ ಎಂದು ಕಿವಿಮಾತು ಹೇಳಿದರು.

‘ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯು ಮುಗಿದ ವಿಚಾರ. ಶಾಸಕ ಸಾ.ರಾ ಮಹೇಶ್ ವಿರುದ್ದದ ಭೂ ವಿವಾದ ಸಂಬಂಧ ಅಲ್ಲಿನ ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ವರದಿ ನೀಡಲಿದೆ. ಬಳಿಕ ಸರ್ಕಾರ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಸಹ ಮುಂದಿನ 2 ವರ್ಷ ತಾವೇ ಸಿ.ಎಂ ಎಂದು ಹೇಳಿದ್ದಾರೆ. ಹೀಗಾಗಿ ನಾಯಕತ್ವದ ಬದಲಾವಣೆ ಪ್ರಶ್ನೆಯಿಲ್ಲ. ಯಡಿಯೂರಪ್ಪ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ’ ಎಂದು ವಿವರಿಸಿದರು.

ಪ್ರಚಾರಕ್ಕೆ ಪ್ರತಿಭಟನೆ: ‘ಜಾಗತಿಕವಾಗಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದರಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್‌ ಮುಖಂಡರು ರಾಜ್ಯದಲ್ಲಿ ಪ್ರತಿಭಟಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ತೈಲೋತ್ಪನ್ನಗಳ ಮೇಲಿನ ತೆರಿಗೆ ಇಳಿಸಿದ್ದಾರಾ?. ತೈಲೋತ್ಪನ್ನಗಳ ಬೆಲೆ ಏರಿಕೆಯು ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ನ ಪ್ರಶ್ನೆಯಲ್ಲ. ಬದಲಿಗೆ ಇದು ಜಾಗತಿಕ ಸಮಸ್ಯೆ. ಆದರೆ, ಕಾಂಗ್ರೆಸ್‌ನವರು ಪ್ರಚಾರಕ್ಕಾಗಿ ಪ್ರತಿಭಟಿಸುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು