ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ

ಶುಕ್ರವಾರ, ಏಪ್ರಿಲ್ 26, 2019
21 °C

ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ

Published:
Updated:

ಕೋಲಾರ: ‘ರಾಜಕೀಯ ಪಕ್ಷಗಳು ಹಾಗೂ ಮುಖಂಡರ ನಡುವೆ ಭಿನ್ನಾಭಿಪ್ರಾಯ ಸಹಜ. ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಪಕ್ಷದ ಹಿರಿಯರು ಹೇಳಿದಂತೆ ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ’ ಎಂದು ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕಿನ ವೇಮಗಲ್‌ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೋಲಾರ ಕ್ಷೇತ್ರ ಕ್ಷೇಮವಾಗಿದೆ. ದೊಡ್ಡ ಪಕ್ಷಗಳಲ್ಲಿ ಭಿನ್ನಮತ ಸಾಮಾನ್ಯ. ದಿನ ಕಳೆದಂತೆ ಎಲ್ಲಾ ಸರಿ ಹೋಗುತ್ತದೆ. ಇವತ್ತು ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಅವರು ಸಭೆ ನಡೆಸಿದ್ದು, ಕೆಲ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ. ಆ ಸಮಸ್ಯೆ ಬಗೆಹರಿಸಲಾಗುವುದು’ ಎಂದು ತಿಳಿಸಿದರು.

‘ಭಿನ್ನಾಭಿಪ್ರಾಯ ನೂರು ಇರಲಿ, ಪಕ್ಷದ ಹಿರಿಯ ನಾಯಕರು ಹೇಳಿದಂತೆ ತೀರ್ಮಾನವಾಗುತ್ತದೆ. ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ. ಜೆಡಿಎಸ್‌ನಲ್ಲೂ ಭಿನ್ನಾಭಿಪ್ರಾಯವಿದ್ದು, ಈ ಸಂಬಂಧ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದೇನೆ. ಗೊಂದಲ ಬಗೆಹರಿಯುತ್ತದೆ’ ಎಂದು ಹೇಳಿದರು.

‘ರಾಜ್ಯದಲ್ಲಿ ವಾತಾವರಣ ಚೆನ್ನಾಗಿದೆ. ನಾನು ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಹಾಸನ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಬಂದಿದ್ದೇನೆ. ಮೈತ್ರಿ ಅಭ್ಯರ್ಥಿಗಳ ಪರವಾಗಿ ಜೆಡಿಎಸ್, ಕಾಂಗ್ರೆಸ್‌ನ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಹಾಸನದಲ್ಲಿ ಮೈತ್ರಿ ಅಭ್ಯರ್ಥಿಗಳೇ ಗೆಲ್ಲುತ್ತಾರೆ. ಬಿಜೆಪಿಯವರಿಗೆ ಎಲ್ಲಿಯೂ ಬೋಣಿ ಆಗಲ್ಲ’ ಎಂದರು.

‘ಏ.13ರಂದು ಕೋಲಾರದಲ್ಲಿ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ದೇವೇಗೌಡ, ಕುಮಾರಸ್ವಾಮಿ, ಸಿದ್ದರಾಮಯ್ಯ, ಪರಮೇಶ್ವರ್ ಸೇರಿದಂತೆ ಅನೇಕ ಹಿರಿಯ ಮುಖಂಡರು ಭಾಗವಹಿಸುತ್ತಾರೆ. ರಾಷ್ಟ್ರದ ಪ್ರಧಾನಿಯಾಗಲಿರುವ ರಾಹುಲ್‌ ಗಾಂಧಿ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಸಂವಿಧಾನ, ರೈತರ ರಕ್ಷಣೆ ಮಾಡುತ್ತಾರೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !