ಗುರುವಾರ , ಜನವರಿ 23, 2020
26 °C

ಅಂಗನವಾಡಿ: ಶೀಘ್ರವೇ ಶೌಚಾಲಯ ನಿರ್ಮಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಶೀಘ್ರವೇ ಶೌಚಾಲಯ ನಿರ್ಮಾಣ ಕಾರ್ಯ ಆರಂಭಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಕಾರ್ಯಕ್ರಮ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಗ್ರಾಮ ಪಂಚಾಯಿತಿಗಳಲ್ಲಿ ಶೇ 100ರಷ್ಟು ತೆರಿಗೆ ಸಂಗ್ರಹವಾಗಬೇಕು. ತೆರಿಗೆ ಸಂಗ್ರಹಣೆಯನ್ನು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿಗಳು ಖಾತರಿ ಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಕಾರ್ಯ ನಿರ್ವಹಣೆ ಸಂಬಂಧ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಕಾಲಕಾಲಕ್ಕೆ ಮಾಹಿತಿ ನೀಡಬೇಕು. ಸಮಸ್ಯೆಯಿರುವ ಘಟಕಗಳ ದುರಸ್ತಿಗೆ ಹೆಚ್ಚು ಆದ್ಯತೆ ಕೊಡಬೇಕು. ತಾ.ಪಂ ಕಾರ್ಯ ನಿರ್ವಹಣಾಧಿಕಾರಿಗಳು ನೀರಿನ ಘಟಕಗಳ ದುರಸ್ತಿ ಕಾರ್ಯದ ಮೇಲ್ವಿಚಾರಣೆ ನಡೆಸಬೇಕು’ ಎಂದು ಹೇಳಿದರು.

‘ಸ್ಥಳೀಯವಾಗಿ ಸಕ್ರಿಯವಾಗಿರುವ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರನ್ನು ಗುರುತಿಸಿ ಅವರಿಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಬಗ್ಗೆ ತರಬೇತಿ ನೀಡಬೇಕು. ಬಳಿಕ ಅವರ ಸಹಾಯ ಪಡೆದು ಘಟಕ ದುರಸ್ತಿ ಮಾಡಬೇಕು’ ಎಂದು ಸಲಹೆ ನೀಡಿದರು.

ನೀರಿನ ಸಮಸ್ಯೆ: ‘ಜಿಲ್ಲೆಯ 77 ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶದ 28 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. 65 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಯಿಂದ ಹಾಗೂ 12 ಗ್ರಾಮಕ್ಕೆ ಖಾಸಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾಹಿತಿ ನೀಡಿದರು.

‘ಎಲ್ಲಾ ಇಲಾಖೆಗಳು ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪ ಯೋಜನೆ (ಟಿಎಸ್‌ಪಿ) ಅನುದಾನವನ್ನು ಶೇ 100ರಷ್ಟು ಖರ್ಚು ಮಾಡಬೇಕು. ಅನುದಾನ ಬಳಕೆಯಾಗದೆ ಸರ್ಕಾರಕ್ಕೆ ವಾಪಸ್‌ ಹೋದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ. ಜಿಲ್ಲೆಯಲ್ಲಿ 1,099 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ 1,042 ಘಟಕಗಳು ಕಾರ್ಯ ನಿರ್ವಹಿಸುತ್ತಿವೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಪುಷ್ಪಲತಾ, ಉಪ ವಿಭಾಗಾಧಿಕಾರಿ ಸೋಮಶೇಖರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಅಂಕಿ ಅಂಶ.....
* 28 ವಾರ್ಡ್‌ನಲ್ಲಿ ನೀರಿನ ಸಮಸ್ಯೆ
* 12 ಗ್ರಾಮಕ್ಕೆ ಟ್ಯಾಂಕರ್ ನೀರು
* 1,099 ನೀರಿನ ಘಟಕಗಳು
* 1,042 ಘಟಕ ಸುಸ್ಥಿತಿಯಲ್ಲಿವೆ

ಪ್ರತಿಕ್ರಿಯಿಸಿ (+)