ಗುರುವಾರ , ಜುಲೈ 7, 2022
25 °C
ಕೇಂದ್ರ ಸರ್ಕಾರ ಅರಾಜಕತೆ ಸೃಷ್ಟಿಸುತ್ತಿದೆ: ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷೆ ವರಲಕ್ಷ್ಮೀ ಕಿಡಿ

ಕಾರ್ಮಿಕ ವಿರೋಧಿ ನೀತಿ: ಸಂಘಟಿತ ಹೋರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ಬಂಡವಾಳಶಾಹಿ ಪರವಾದ ನಿಲುವಿನ ವಿರುದ್ಧ ಧ್ವನಿ ಎತ್ತಿ ಸಂಘಟಿತ ಹೋರಾಟ ನಡೆಸಬೇಕು’ ಎಂದು ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷೆ ಎಸ್.ವರಲಕ್ಷ್ಮೀ ಹೇಳಿದರು.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು (ಜೆಸಿಟಿಯು) ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕಾರ್ಮಿಕರ ಸಮಾವೇಶ ಉದ್ಘಾಟಿಸಿ ಮಾತನಾಡಿ, ‘ಬಂಡವಾಳಶಾಹಿಯು ಕಾರ್ಮಿಕರ ಶ್ರಮಕ್ಕೆ ತಕ್ಕಂತೆ ವೇತನ ನೀಡಬೇಕು. ಆದರೆ, ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಪರವಾದ ಕಾನೂನು ಜಾರಿಗೆ ತಂದು ಕಾರ್ಮಿಕರನ್ನು ಶೋಷಿಸುತ್ತಿದೆ’ ಎಂದು ಕಿಡಿಕಾರಿದರು.

‘ಕೇಂದ್ರವು ಕಾರ್ಮಿಕ ವರ್ಗವನ್ನು ಬಂಡವಾಳಶಾಹಿ ವ್ಯವಸ್ಥೆಗೆ ಶರಣಾಗುವಂತೆ ಮಾಡಿದೆ. ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಯಾಗಿರುವ ಕೇಂದ್ರ ಸರ್ಕಾರವು ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆದಿದೆ. ಉಳ್ಳವರ ಪರ ಆಡಳಿತ ನಡೆಸಿ ಮತ್ತು ಅವರ ಪರ ಕಾಯ್ದೆ ರೂಪಿಸಿ ದೇಶದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿಸುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಕಾರ್ಮಿಕರ ಪರಿಸ್ಥಿತಿ ಬದಲಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಜಾಗತೀಕರಣ, ಖಾಸಗೀಕರಣ ಹಾಗೂ ಉದಾರೀಕರಣದ ಜಾರಿಗೆ ಕಾಂಗ್ರೆಸ್ ಕಾರಣ. ಅದೇ ರೀತಿ ಬಿಜೆಪಿ ಸರ್ಕಾರ ಮುಂದುವರಿಸಿ ಕಾರ್ಮಿಕರ ಬದುಕನ್ನು ನರಕಸದೃಶವಾಗಿಸಿದೆ. ಕಾರ್ಮಿಕರ ಕಾನೂನುಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿವೆ. ಕಾರ್ಮಿಕ ಕಾನೂನುಗಳು ಉಲ್ಲಂಘನೆ ಆಗುತ್ತಿದ್ದರೂ ಅಧಿಕಾರಿಗಳು ಕಾರ್ಮಿಕರ ಹಿತ ಕಾಯುವ ಪ್ರಯತ್ನ ಮಾಡುತ್ತಿಲ್ಲ’ ಎಂದು ದೂರಿದರು.

‘ಕಾರ್ಮಿಕ ಸಂಹಿತೆ ಹಿಂಪಡೆಯಬೇಕು. ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಕೈಬಿಡಬೇಕು. ವಿವಿಧ ಕಾರ್ಮಿಕ ವರ್ಗದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 28 ಮತ್ತು 29ರಂದು ಕಾರ್ಮಿಕ ಸಂಘಗಳ ಸಹಕಾರದೊಂದಿಗೆ ಅಖಲ ಭಾರತ ಮಟ್ಟದ ಮುಷ್ಕರ ನಡೆಸಲಾಗುತ್ತಿದ್ದು, ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕು' ಎಂದು ಕೋರಿದರು.

ಘೋರ ಅನ್ಯಾಯ: ‘ದುಡಿಯುವ ವರ್ಗದ ಜನರಿಗೆ ಸರ್ಕಾರಗಳು ಘೋರ ಅನ್ಯಾಯ ಮಾಡುತ್ತಿವೆ. ಕಾರ್ಮಿಕರಿಗೆ ಸಮಾನ ವೇತನ ನೀಡದೆ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿವೆ. ಕಾರ್ಮಿಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ನಡೆಸುತ್ತಿರುವ ಹೋರಾಟಕ್ಕೆ ಸಂಘ ಸಂಸ್ಥೆಗಳು ಪಕ್ಷಾತೀತವಾಗಿ ಬೆಂಬಲ ನೀಡಬೇಕು’ ಎಂದು ಅಖಿಲ ಭಾರತ ಎಲ್ಐಸಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋಪಾಲ್ ಮನವಿ ಮಾಡಿದರು.

‘ಕಾರ್ಮಿಕರಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಆದರೆ, ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಬೇಕಾದ ಸರ್ಕಾರಗಳು ಮಾಲೀಕನ ಪರವಾಗಿವೆ. ಕಾರ್ಮಿಕರನ್ನು ಬೀದಿಗೆ ತಳ್ಳುವ ಪ್ರಯತ್ನ ಸದ್ದಿಲ್ಲದೆ ನಡೆದಿದ್ದು, ಇದರ ವಿರುದ್ಧ ತೀವ್ರ ಹೋರಾಟ ನಡೆಸಬೇಕು’ ಎಂದು ಸಿಐಟಿಯು ಜಿಲ್ಲಾ ಗೌರವಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ತಿಳಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಬಿಎಸ್ಎನ್ಎಲ್‌ ಕಾರ್ಮಿಕರ ಸಂಘದ ಮುನಿರಾಜು, ರೈತ ಮುಖಂಡ ಅಬ್ಬಣಿ ಶಿವಪ್ಪ, ಎಐಸಿಸಿಟಿಯು ಮುಖಂಡ ಪ್ರಭು, ಬೆಮಲ್ ಕಾರ್ಮಿಕ ಸಂಘದ ಗಣೇಶ್ ಕುಮಾರ್, ಸಿಪಿಎಂ ತಾಲ್ಲೂಕು ಸಮಿತಿ ಸದಸ್ಯ ಭೀಮರಾಜ್, ಕಾರ್ಮಿಕ ಮುಖಂಡ ಎ.ಆರ್‌.ಬಾಬು ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು