ಗುರುವಾರ , ಅಕ್ಟೋಬರ್ 22, 2020
22 °C

ಸರ್ಕಾರದ ಜನ ವಿರೋಧಿ ನೀತಿ: ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ರೈತ ಸಂಘ ಸದಸ್ಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಇಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಗಾಂಧಿ ಜಯಂತಿ ಆಚರಿಸಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು, ‘ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕವಾದರೂ ಜನಸಾಮಾನ್ಯರು, ರೈತರು ಹಾಗೂ ಕಾರ್ಮಿಕರಿಗೆ ಸ್ವಾತಂತ್ರ್ಯ ಸಿಕ್ಕಿಲ್ಲ’ ಎಂದು ಕಿಡಿಕಾರಿದರು.

‘ದೇಶದಲ್ಲಿ ಮಹಿಳೆಯರು, ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ, ದೌರ್ಜನ್ಯ ಪ್ರಕರಣ ಹೆಚ್ಚುತ್ತಲೇ ಇವೆ. ಸರ್ಕಾರಗಳು ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿವೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ. ಯಾವುದೇ ಚರ್ಚೆಯಿಲ್ಲದೆ ತರಾತುರಿಯಲ್ಲಿ ರೈತ ಮತ್ತು ಕಾರ್ಮಿಕ ವಿರೋಧಿ ಕಾಯಿದೆಗಳನ್ನು ಜಾರಿಗೊಳಿಸುತ್ತಿವೆ. ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಯಾಗಿರುವ ಸರ್ಕಾರಗಳು ರೈತ ಕುಲ ನಾಶ ಮಾಡಲು ಹೊರಡಿವೆ’ ಎಂದು ಗುಡುಗಿದರು.

‘ಗಾಂಧೀಜಿ ಸೇರಿದಂತೆ ಹಲವು ಹೋರಾಟಗಾರರು ಬ್ರಿಟೀಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಆದರೆ, ಆ ಮಹನೀಯರ ಕನಸು ಇಂದಿಗೂ ನನಸಾಗಿಲ್ಲ. ಗ್ರಾಮಗಳು ಅಭಿವೃದ್ಧಿಯಾದರೆ ದೇಶದ ಆಭಿವೃದ್ಧಿ ಎಂಬ ಮಾತು ಸುಳ್ಳಾಗಿದೆ’ ಎಂದು ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ ಅಸಮಾಧಾನ ವ್ಯಕ್ತಪಡಿಸಿದರು.

ರದ್ದುಪಡಿಸಿ: ‘ರೈತ ಮತ್ತು ಕಾರ್ಮಿಕ ವಿರೋಧಿ ಕಾಯಿದೆಗಳನ್ನು ರದ್ದುಪಡಿಸಬೇಕು. ಮಹಿಳೆಯರು ಮತ್ತು ಹೆಣ್ಣು ಮಕ್ಕಳ ರಕ್ಷಣೆಗೆ ಪರಿಣಾಮಕಾರಿ ಕಾನೂನು ಜಾರಿಗೊಳಿಸಬೇಕು. ಮದ್ಯ ಮುಕ್ತ ಕರ್ನಾಟಕ ಮಾಡಬೇಕು. ಉತ್ತರಪ್ರದೇಶದ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಸಂಘಟನೆ ಸದಸ್ಯರು ಒತ್ತಾಯಿಸಿದರು.

ಸಂಘಟನೆ ಸದಸ್ಯರಾದ ಮಂಜುನಾಥ್, ನವೀನ್, ಮಣಿ, ರವಣಪ್ಪ ಪಾಲ್ಗೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.