ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿ ಬಂದ್ ಮಾಡಿಸುವ ಎಚ್ಚರಿಕೆ

ಲಾಕ್‌ಡೌನ್‌ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸತ್ಯಭಾಮ ಸೂಚನೆ
Last Updated 19 ಮೇ 2020, 13:57 IST
ಅಕ್ಷರ ಗಾತ್ರ

ಕೋಲಾರ: ‘ಲಾಕ್‌ಡೌನ್‌ ಪಾಲನೆಗೆ ಎಪಿಎಂಸಿ ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಕೊರೊನಾ ಸೋಂಕು ಹರಡುವಿಕೆ ತಡೆ ವಿಚಾರದಲ್ಲಿ ಲಘುವಾಗಿ ನಡೆದುಕೊಂಡರೆ ಎಪಿಎಂಸಿಗಳನ್ನು ಬಂದ್ ಮಾಡಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಖಡಕ್‌ ಎಚ್ಚರಿಕೆ ನೀಡಿದರು.

ಎಪಿಎಂಸಿ ಅಧ್ಯಕ್ಷರು ಹಾಗೂ ವ್ಯಾಪಾರಿಗಳ ಜತೆ ಇಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿ, ‘ತಮಿಳುನಾಡು, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅಲ್ಲಿನ ಮಾರುಕಟ್ಟೆಗಳಿಗೆ ಹೋಗಿ ಬಂದಿರುವ ಸರಕು ಸಾಗಣೆ ವಾಹನ ಚಾಲಕರು, ಕ್ಲೀನರ್‌ಗಳು ಹಾಗೂ ತರಕಾರಿ ವ್ಯಾಪಾರಿಗಳಿಂದ ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗಿ ಹರಡಿದೆ’ ಎಂದರು.

‘ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಎಪಿಎಂಸಿ ಆಡಳಿತ ಮಂಡಳಿಗಳು ಪರಿಣಾಮಕಾರಿ ಕ್ರಮ ತೆಗೆದುಕೊಳ್ಳಬೇಕು. ಮುಖ್ಯವಾಗಿ ಸರಕು ಸಾಗಣೆ ವಾಹನ ಚಾಲಕರು ಹಾಗೂ ಕ್ಲೀನರ್‌ಗಳ ಚಲನವಲನದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು’ ಎಂದು ಸೂಚನೆ ನೀಡಿದರು.

‘ಜಿಲ್ಲೆಯಲ್ಲಿ ಈವರೆಗೆ 9 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇವರೆಲ್ಲಾ ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಬಂದವರು. ಅದರಲ್ಲೂ ಮುಖ್ಯವಾಗಿ ಸರಕು ಸಾಗಣೆ ವಾಹನ ಚಾಲಕರಿಂದ ಸೋಂಕು ಹರಡಿರುವುದು ದೃಢಪಟ್ಟಿರುವುದರಿಂದ ಎಂಪಿಎಂಸಿಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಆದೇಶಿಸಿದರು.

ರಾಸಾಯನಿಕ ಸಿಂಪಡಿಸಿ: ‘ಎಪಿಎಂಸಿಗಳಿಗೆ ಬರುವ ಸರಕು ಸಾಗಣೆ ವಾಹನಗಳ ಒಳಗೆ ಮತ್ತು ಹೊರಗೆ ಸೋಂಕು ನಿರೋಧಕ ರಾಸಾಯನಿಕ ಸಿಂಪಡಿಸಬೇಕು. ವಾಹನದ ಚಾಲಕರು ಮತ್ತು ಕ್ಲೀನರ್‌ಗಳು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಮತ್ತು ಸ್ಯಾನಿಟೈಸರ್‌ ಬಳಸಿ ಕೈ ಸ್ವಚ್ಛಗೊಳಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಚಾಲಕರು ಮತ್ತು ಕ್ಲೀನರ್‌ಗಳು ವಾಹನ ಚಾಲನೆ ನಂತರ ಎಲ್ಲೆಂದರಲ್ಲಿ ಓಡಾಡುವಂತಿಲ್ಲ. ಹೊರ ರಾಜ್ಯಗಳಿಂದ ಬಂದ ನಂತರ ಸಮೀಪದ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಕ್ವಾರಂಟೈನ್‌ನಲ್ಲಿ ಇರಬೇಕು’ ಎಂದು ಹೇಳಿದರು.

‘ಮಾರುಕಟ್ಟೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೊಳೆತ ಟೊಮೆಟೊ ಮತ್ತು ತರಕಾರಿಗಳನ್ನು ಮನಬಂದಂತೆ ಎಲ್ಲೆಂದರಲ್ಲಿ ಸುರಿಯಬಾರದು. ತರಕಾರಿ ತ್ಯಾಜ್ಯದ ಅಸಮರ್ಪಕ ವಿಲೇವಾರಿ ಸಂಬಂಧ ಸಾಕಷ್ಟು ದೂರು ಬಂದಿವೆ. ಎಪಿಎಂಸಿ ಆಡಳಿತ ಮಂಡಳಿ ಈ ಬಗ್ಗೆ ಎಚ್ಚರ ವಹಿಸಬೇಕು’ ಎಂದು ಸೂಚಿಸಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ, ಎಪಿಎಂಸಿ ಅಧ್ಯಕ್ಷ ಡಿ.ಎಲ್.ನಾಗರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT