ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿ: ಮೂಲಸೌಕರ್ಯಕ್ಕೆ ಒತ್ತಾಯ

ಟೊಮೆಟೊ ಸುರಿದು ರೈತ ಸಂಘ ಸದಸ್ಯರ ಧರಣಿ
Last Updated 9 ಸೆಪ್ಟೆಂಬರ್ 2019, 20:22 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಸೋಮವಾರ ಧರಣಿ ನಡೆಸಿದರು.

‘ಎಪಿಎಂಸಿ ಆಡಳಿತ ಮಂಡಳಿಗೆ ಸುಂಕದ ರೂಪದಲ್ಲಿ ಕೋಟಿಗಟ್ಟಲೆ ಆದಾಯ ಬರುತ್ತದೆ. ಆದರೆ, ಆಡಳಿತ ಮಂಡಳಿಯು ಮಾರುಕಟ್ಟೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಾರುಕಟ್ಟೆ ಅಭಿವೃದ್ಧಿ ನಿರ್ಲಕ್ಷಿಸಿದ್ದಾರೆ’ ಎಂದು ಆರೋಪಿಸಿದ ಧರಣಿನಿರತರು ಎಪಿಎಂಸಿ ಕಚೇರಿ ಎದುರು ಟೊಮೆಟೊ ಸುರಿದು ಆಕ್ರೋಶ ವ್ಯಕ್ತಪಡಿಸಿದರು.

‘ಎಪಿಎಂಸಿ ಆವರಣ ತುಂಬಾ ಕಿರಿದಾಗಿದೆ. ಈ ಸಂಬಂಧ ಎಪಿಎಂಸಿ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತಕ್ಕೆ ದೂರು ಕೊಟ್ಟು ಮಾರುಕಟ್ಟೆ ವಿಸ್ತರಣೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ, ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸುತ್ತಿಲ್ಲ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ನಾರಾಯಣಗೌಡ ದೂರಿದರು.

‘ಮಾರುಕಟ್ಟೆಯಲ್ಲಿ ರೈತರ ವಿಶ್ರಾಂತಿಗೆ ಸೂಕ್ತ ವ್ಯವಸ್ಥೆ ಇಲ್ಲ. ಕುಡಿಯುವ ನೀರು, ಶೌಚಾಲಯ, ರಸ್ತೆ ಸೇರಿದಂತೆ ಯಾವುದೇ ಮೂಲಸೌಕರ್ಯಗಳಿಲ್ಲ. ಮತ್ತೊಂದೆಡೆ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯುತ್ತಿಲ್ಲ. ಆಡಳಿತ ಮಂಡಳಿ ನಿರ್ಲಕ್ಷ್ಯದಿಂದ ರೈತರು ಹಾಗೂ ವರ್ತಕರು ಬವಣೆ ಪಡುವಂತಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಲ್ಲಾಳಿಗಳ ಹಾವಳಿ: ‘ಎಪಿಎಂಸಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಿದ್ದು, ರೈತರಿಂದ ನಿಯಮಬಾಹಿರವಾಗಿ ಕಮಿಷನ್ ಪಡೆಯಲಾಗುತ್ತಿದೆ. ಮತ್ತೊಂದೆಡೆ ಕೃಷಿ ಉತ್ಪನ್ನಗಳ ತೂಕದಲ್ಲಿ ಮೋಸ ಮಾಡಲಾಗುತ್ತಿದೆ. ರೈತರು ಈ ಅಕ್ರಮ ಪ್ರಶ್ನಿಸಿದರೆ ಮಂಡಿ ಮಾಲೀಕರು ಹರಾಜು ನಡೆಸುವುದಿಲ್ಲ ಎಂದು ಬೆದರಿಸುತ್ತಾರೆ’ ಎಂದು ಧರಣಿನಿರತರು ಆರೋಪಿಸಿದರು.

‘ದಲ್ಲಾಳಿಗಳ ಹಾವಳಿ ಸಂಬಂಧ ಆಡಳಿತ ಮಂಡಳಿ ಸದಸ್ಯರು ಹಾಗೂ ಎಪಿಎಂಸಿ ಅಧಿಕಾರಿಗಳಿಗೆ ಹಲವು ಬಾರಿ ದೂರು ಕೊಟ್ಟಿದ್ದೇವೆ. ಆದರೂ ಸಮಸ್ಯೆ ಬಗೆಹರಿದಿಲ್ಲ. ಅಧಿಕಾರಿಗಳು ದಲ್ಲಾಳಿಗಳು ಮತ್ತು ಮಂಡಿ ಮಾಲೀಕರ ಜತೆ ಕೈಜೋಡಿಸಿ ರೈತರನ್ನು ಶೋಷಿಸುತ್ತಿದ್ದಾರೆ. ಅಧಿಕಾರಿಗಳು ಕಮಿಷನ್‌ ದಂಧೆಯಲ್ಲಿ ಪಾಲು ಪಡೆಯುತ್ತಿದ್ದಾರೆ’ ಎಂದು ಕಿಡಿಕಾರಿದರು.

ಸ್ಥಳಾಂತರಿಸಿ: ‘ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಸ್ಥಳೀಯ ಎಪಿಎಂಸಿಗೆ ಟೊಮೆಟೊ ತರಿಸುವುದನ್ನು ನಿಲ್ಲಿಸಬೇಕು. ದಲ್ಲಾಳಿ ಹಾವಳಿ ಹಾಗೂ ಕಮಿಷನ್‌ ದಂಧೆಗೆ ಕಡಿವಾಣ ಹಾಕಬೇಕು. ಮಾರುಕಟ್ಟೆಯಲ್ಲಿ ಮೂಲಸೌಕರ್ಯ ಕಲ್ಪಿಸಬೇಕು. ರೈತರು ಹಾಗೂ ವರ್ತಕರಿಗೆ ಅನುಕೂಲವಾಗುವ ಜಾಗ ಮಾರುಕಟ್ಟೆ ಸ್ಥಳಾಂತರಿಸಬೇಕು’ ಎಂದು ಒತ್ತಾಯಿಸಿದರು.

ಧರಣಿನಿರತರನ್ನು ಭೇಟಿಯಾಗಿ ಮನವಿ ಸ್ವೀಕರಿಸಿದ ಸಂಸದ ಎಸ್‌.ಮುನಿಸ್ವಾಮಿ, ‘ಎಪಿಎಂಸಿ ಆಡಳಿತ ಮಂಡಳಿ ಸದಸ್ಯರು ಹಾಗೂ ಮಂಡಿ ಮಾಲೀಕರ ಸಭೆ ಕರೆದು ಸಮಸ್ಯೆ ಬಗೆಹರಿಸುತ್ತೇವೆ’ ಎಂದು ಭರವಸೆ ನೀಡಿದರು. ಸಂಘನೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿ, ರಾಜ್ಯ ಘಟಕ ಸಂಚಾಲಕ ನಾಗರಾಜಗೌಡ, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್‌, ಶ್ರೀನಿವಾಸಪುರ ತಾಲ್ಲೂಕು ಘಟಕದ ಅಧ್ಯಕ್ಷ ಆಂಜಿನಪ್ಪ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT