ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲು ಖರೀದಿ ದರ ಹೆಚ್ಚಳಕ್ಕೆ ಮನವಿ

ಸಂಕಷ್ಟದಲ್ಲಿ ರೈತರು: ಕರ್ನಾಟಕ ರೈತ ಸೇನೆ ಸದಸ್ಯರ ಅಳಲು
Last Updated 9 ಫೆಬ್ರುವರಿ 2021, 16:19 IST
ಅಕ್ಷರ ಗಾತ್ರ

ಕೋಲಾರ: ಹಾಲು ಖರೀದಿ ದರ ಹೆಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸೇನೆ ಸದಸ್ಯರು ಇಲ್ಲಿ ಮಂಗಳವಾರ ಕೋಚಿಮುಲ್‌ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ವಿ.ತಿಪ್ಪಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

‘ಹೈನೋದ್ಯಮವು ಜಿಲ್ಲೆಯ ರೈತರ ಬೆನ್ನೆಲುಬು. ರೈತರು ನಿರೀಕ್ಷೆಗೂ ಮೀರಿ ಹಾಲು ಉತ್ಪಾದನೆ ಮಾಡಿ ಒಕ್ಕೂಟಕ್ಕೆ ಪೂರೈಸುತ್ತಿದ್ದಾರೆ. ಆದರೆ, ಹಾಲು ಖರೀದಿ ದರ ಕಡಿಮೆ ಇರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್‌ಗೌಡ ಹೇಳಿದರು.

‘ಬರ ಪರಿಸ್ಥಿತಿ ನಡುವೆಯೂ ಅವಿಭಜಿತ ಕೋಲಾರ ಜಿಲ್ಲೆಯ ರೈತರು ಹೈನೋದ್ಯಮ ನಿರ್ವಹಣೆ ಮಾಡುತ್ತಿದ್ದಾರೆ. ಕೋವಿಡ್‌–19 ಪರಿಸ್ಥಿತಿಯಿಂದ ರೈತರಿಗೆ ಸಮಸ್ಯೆಯಾಗಿದೆ. ಜಾನುವಾರುಗಳಿಗೆ ಮೇವಿನ ಸಮಸ್ಯೆಯಿದೆ. ಪಶು ಆಹಾರ ಹಾಗೂ ಮೇವಿನ ಬೆಲೆ ಗಗನಕ್ಕೇರಿದೆ. ಮೇವಿನ ಸಮಸ್ಯೆಯಿಂದಾಗಿ ಗುಣಮಟ್ಟದ ಹಾಲು ಪೂರೈಕೆಯಾಗುತ್ತಿಲ್ಲ’ ಎಂದು ತಿಳಿಸಿದರು.

‘ಘನ ಕೊಬ್ಬಿನ ಅಂಶ (ಎಸ್‌ಎನ್‌ಎಫ್‌) ಆಧರಿಸಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಕೊಡಲಾಗುತ್ತಿದೆ. ಒಂದು ಲೀಟರ್ ಹಾಲು ಉತ್ಪಾದನೆಗೆ ಅಂದಾಜು ₹ 35 ವೆಚ್ಚವಾಗುತ್ತಿದೆ. ಆದರೆ, ಒಕ್ಕೂಟವು ಉತ್ಪಾದನಾ ವೆಚ್ಚಕಿಂತಲೂ ಕಡಿಮೆ ದರಕ್ಕೆ ಹಾಲು ಖರೀದಿಸುತ್ತಿದೆ. ಇದರಿಂದ ರೈತರಿಗೆ ನಷ್ಟವಾಗುತ್ತಿದೆ’ ಎಂದು ಸಂಘಟನೆ ಸದಸ್ಯರು ದೂರಿದರು.

‘ಸರ್ಕಾರಗಳು ದೇಶದ ಸಂಪತ್ತು ಲೂಟಿ ಮಾಡುವ ಲೂಟಿಕೋರರನ್ನು ರಕ್ಷಿಸುತ್ತವೆ. ಆದರೆ, ದೇಶಕ್ಕೆ ಆರ್ಥಿಕ ಸಂಪನ್ಮೂಲ ಕಲ್ಪಿಸುವ ರೈತರು ಸಂಕಷ್ಟದ ಸ್ಥಿತಿಯಲ್ಲಿದ್ದರೂ ಸರ್ಕಾರಗಳು ನೆರವಿಗೆ ಧಾವಿಸುವುದಿಲ್ಲ. ಸರ್ಕಾರಗಳಿಗೆ ರೈತರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳ ಸಬೂಬು: ‘ಪಶು ಆಹಾರ ಮಾರಾಟಗಾರರು ಮನಸೋಇಚ್ಛೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ಆರ್ಥಿಕ ಹೊರೆಯಾಗುತ್ತಿದೆ. ಪಶು ಆಹಾರ ಬೆಲೆ ನಿಯಂತ್ರಣಕ್ಕೆ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರ ಪಶು ಆಹಾರದ ಬೆಲೆ ನಿಯಂತ್ರಿಸಬೇಕೆಂದು ಸಬೂಬು ಹೇಳಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ’ ಎಂದು ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

‘ಹಾಲು ಖರೀದಿ ದರ ಲೀಟರ್‌ಗೆ ₹ 50ಕ್ಕೆ ಹೆಚ್ಚಿಸಬೇಕು. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ಪಶು ಆಹಾರದ ಬೆಲೆ ಕಡಿತಗೊಳಿಸಬೇಕು ಮತ್ತು ಖರೀದಿಗೆ ಸಬ್ಸಿಡಿ ನೀಡಬೇಕು. ರಾಜ್ಯದೆಲ್ಲೆಡೆ ಎಲ್ಲಾ ಒಕ್ಕೂಟಗಳಲ್ಲೂ ಹಾಲಿಗೆ ಏಕರೂಪ ಖರೀದಿ ದರ ನಿಗದಿಪಡಿಸಬೇಕು. ಹಾಲು ಉತ್ಪಾದನಾ ವೆಚ್ಚಕ್ಕೆ ತಕ್ಕಂತೆ ಖರೀದಿ ದರ ನಿಗದಿಪಡಿಸಬೇಕು’ ಎಂದು ಮನವಿ ಮಾಡಿದರು.

ಸಂಘಟನೆಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ಕೆ.ಬಿ.ಮುನಿವೆಂಕಟಪ್ಪ, ಕಾರ್ಯಾಧ್ಯಕ್ಷ ಪ್ರಭಾಕರ್‌ ಗೌಡ, ಪ್ರಧಾನ ಕಾರ್ಯದರ್ಶಿ ವೆಂಕಟಚಲಪತಿ, ಉಪಾಧ್ಯಕ್ಷ ಅಂಬರೀಶ್, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಖಲೀಲ್. ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT