ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆ ಮೂಲಸೌಕರ್ಯಕ್ಕೆ ಶಾಸಕರ ಮನವಿ

Last Updated 15 ಫೆಬ್ರುವರಿ 2020, 14:33 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ನೂತನ ಕಟ್ಟಡ, ಸಿಬ್ಬಂದಿ ಹಾಗೂ ಮೂಲಸೌಕರ್ಯ ಕಲ್ಪಿಸಬೇಕೆಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಇಲ್ಲಿ ಶನಿವಾರ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿದರು.

‘ಮಾಲೂರು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಿನಕ್ಕೆ ಸುಮಾರು 1,200 ಹೊರ ರೋಗಿಗಳು ಬರುತ್ತಾರೆ. ಜತೆಗೆ ಸುಮಾರು 150 ಒಳ ರೋಗಿಗಳು ಇದ್ದಾರೆ. ಜಿಲ್ಲಾ ಆಸ್ಪತ್ರೆಗೆ ಸಮನಾಗಿರುವ ಈ ಆಸ್ಪತ್ರೆಯಲ್ಲಿ ನೀರು, ಶೌಚಾಲಯ, ಸಿಬ್ಬಂದಿ, ವಾರ್ಡ್ ಸೇರಿದಂತೆ ಮೂಲಸೌಕರ್ಯ ಸಮಸ್ಯೆಯಿದ್ದು, ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ’ ಎಂದು ಶಾಸಕರು ಸಚಿವರಿಗೆ ಹೇಳಿದರು.

‘ಆಸ್ಪತ್ರೆ ಕಟ್ಟಡ ಸುಮಾರು 45 ವರ್ಷಗಳಷ್ಟು ಹಳೆಯದು. 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ತಡೆ ಉಪಕರಣಗಳಿಲ್ಲ. ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಆಸ್ಪತ್ರೆಯ ಮೂಲಸೌಕರ್ಯಕ್ಕೆ ಆದ್ಯತೆ ಮೇರೆಗೆ ಬಜೆಟ್‌ನಲ್ಲಿ ಅನುದಾನ ಮಂಜೂರು ಮಾಡಬೇಕು’ ಎಂದು ಕೋರಿದರು.

‘ಮಾಲೂರು ಸುತ್ತಮುತ್ತ ಸಾಕಷ್ಟು ಕೈಗಾರಿಕೆಗಳಿವೆ. ತಾಲ್ಲೂಕು ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿಯಲ್ಲಿದ್ದು, ರಸ್ತೆ ಅಪಘಾತ ಪ್ರಕರಣದ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಲು ಸೌಕರ್ಯಗಳ ಕೊರತೆಯಿದೆ. ತುರ್ತು ಚಿಕಿತ್ಸಾ ಕೇಂದ್ರದ ಜತೆಗೆ ಮಹಿಳಾ ಮತ್ತು ಮಕ್ಕಳ ಚಿಕಿತ್ಸಾ ಘಟಕ ಮಂಜೂರು ಮಾಡಬೇಕು’ ಎಂದು ಮನವಿ ಮಾಡಿದರು.

ಅನುದಾನದ ಭರವಸೆ: ‘ಟೇಕಲ್ ಮತ್ತು ಲಕ್ಕೂರು ಹೋಬಳಿಗಳು ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಕ್ಕೆ ತುಂಬಾ ದೂರದಲ್ಲಿವೆ. ಈ ಹೋಬಳಿಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂಲಸೌಕರ್ಯಗಳಿಲ್ಲ. ಆಂಬುಲೆನ್ಸ್‌ ಸೇವೆ ಸಹ ಸಮರ್ಪಕವಾಗಿಲ್ಲ. ಆದ್ದರಿಂದ ಆಂಬುಲೆನ್ಸ್‌ಗಳ ಸಂಖ್ಯೆ ಹೆಚ್ಚಿಸಬೇಕು. ಲಕ್ಕೂರು ಆಸ್ಪತ್ರೆಗೆ ಹೊಸ ಕಟ್ಟಡ ನಿರ್ಮಿಸಬೇಕು’ ಎಂದು ಹೇಳಿದರು.

ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು, ಮಾಲೂರು ತಾಲ್ಲೂಕು ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಲಕ್ಕೂರು ಆಸ್ಪತ್ರೆಯ ಹೊಸ ಕಟ್ಟಡಕ್ಕೆ ಬಜೆಟ್‌ನಲ್ಲಿ ಅನುದಾನ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT