ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಟಲ್‌ ಭೂಜಲ ಯೋಜನೆ: ಅಂತರ್ಜಲ ವೃದ್ಧಿಸಿ: ಸಂಸದ ಮುನಿಸ್ವಾಮಿ

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
Last Updated 2 ಜುಲೈ 2021, 16:12 IST
ಅಕ್ಷರ ಗಾತ್ರ

ಕೋಲಾರ: ‘ಕೇಂದ್ರ ಸರ್ಕಾರದ ಅಟಲ್‌ ಭೂಜಲ ಯೋಜನೆ ಅನುದಾನವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಬಳಸಿಕೊಂಡು ಅಂತರ್ಜಲ ವೃದ್ಧಿಸಬೇಕು’ ಎಂದು ಸಂಸದ ಎಸ್‌.ಮುನಿಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿ ಶುಕ್ರವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ‘ರಾಜಕಾಲುವೆ, ಕುಂಟೆ, ಕೆರೆ ಮತ್ತು ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸಬೇಕು. ಮಳೆ ನೀರು ಸಂಗ್ರಹಣೆಗೆ ಅಗತ್ಯವಿರುವ ಕಡೆ ಚೆಕ್‌ಡ್ಯಾಮ್‌ ನಿರ್ಮಿಸಬೇಕು’ ಎಂದು ತಿಳಿಸಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಅಧಿಕಾರಿಗಳು ಜನರಿಗೆ ಸಂಪೂರ್ಣ ಮಾಹಿತಿ ನೀಡಬೇಕು. ಆಗ ಮಾತ್ರ ಜನರು ಯೋಜನೆಗಳ ಸದುಪಯೋಗ ಪಡೆಯಲು ಸಾಧ್ಯ. ಯೋಜನೆಗಳನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ಕಿವಿಮಾತು ಹೇಳಿದರು.

‘ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ 25 ಹಳ್ಳಿಗಳಿಗೆ 3 ಟ್ಯಾಂಕರ್ ಮತ್ತು 25 ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ‘ಗ್ರಾಮೀಣ ಭಾಗದಲ್ಲಿ ನೀರು ಸಿಗುವ ಜಾಗದಲ್ಲಿ ಕೊಳವೆ ಬಾವಿ ಕೊರೆಸಿ ಪೈಪ್‌ಲೈನ್ ಮೂಲಕ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಿ’ ಎಂದು ತಿಳಿಸಿದರು.

ಜನೌಷಧ ಕೇಂದ್ರ: ‘ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಾಗಿ ಸಾಮಾನ್ಯ ಹೆರಿಗೆ ಮಾಡಿಸಿ. ಹೆಚ್ಚಿನ ಸಂಖ್ಯೆಯಲ್ಲಿ ಜನೌಷಧ ಕೇಂದ್ರಗಳನ್ನು ಸ್ಥಾಪಿಸಿ. ಕಪ್ಪು ಶಿಲೀಂಧ್ರ (ಬ್ಲ್ಯಾಕ್‌ ಫಂಗಸ್‌) ಸೋಂಕಿತರಿಗೆ ಸಕಾಲಕ್ಕೆ ಔಷಧ ಮತ್ತು ಚಿಕಿತ್ಸೆ ನೀಡಿ. ಕೋವಿಡ್‌ ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸಿ. ಲಸಿಕೆ ಕೊರತೆಯಿದ್ದರೆ ನನ್ನ ಗಮನಕ್ಕೆ ತನ್ನಿ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳ ಆರೈಕೆಗೆ ಬೆಡ್‌ ವ್ಯವಸ್ಥೆ ಕಲ್ಪಿಸಿ. ಜತೆಗೆ ವೈದ್ಯರಿಗೆ ಮಾರ್ಗದರ್ಶನ ನೀಡಿ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ತಾಯಂದರಿಗೆ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಅರಿವು ಮೂಡಿಸಿ’ ಎಂದು ಹೇಳಿದರು.

ಆದಾಯ ದ್ವಿಗುಣ: ‘ತೋಟಗಾರಿಕೆ, ಕೃಷಿ ಮತ್ತು ರೇಷ್ಮೆ ಇಲಾಖೆ ಅಧಿಕಾರಿಗಳು ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಮಾರ್ಗದರ್ಶನ ನೀಡಬೇಕು. ರೈತರಿಗೆ ಹೊಸ ತಳಿಯ ಬೆಳೆಗಳನ್ನು ಬೆಳೆಯುವುದಕ್ಕೆ ಪ್ರೋತ್ಸಾಹ ನೀಡಿ. ಸರ್ಕಾರದ ಯೋಜನೆಗಳ ಬಗ್ಗೆ ಹೋಬಳಿವಾರು ರೈತ ಸಂರ್ಪಕ ಕೇಂದ್ರಗಳ ಮೂಲಕ ವ್ಯಾಪಕ ಪ್ರಚಾರ ನಡೆಸಿ’ ಎಂದು ತಿಳಿಸಿದರು.

‘ನರೇಗಾ ಯೋಜನೆಯಡಿ ಜಿಲ್ಲೆಯ ಹಳ್ಳಿಗಳನ್ನು ಅಭಿವೃದ್ಧಿಪಡಿಸಿ ದೇಶಕ್ಕೆ ಜಿಲ್ಲೆ ಮಾದರಿಯಾಗುವಂತೆ ಕಾರ್ಯಕ್ರಮ ಹಮ್ಮಿಕೊಳ್ಳಿ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಪ್ರತಿ ಗ್ರಾಮದಲ್ಲೂ ಶೌಚಾಲಯ ನಿರ್ಮಾಣ ಮಾಡಿ. ಗ್ರಾ.ಪಂ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳನ್ನು ಗುರುತಿಸಿ ನಿವೇಶನರಹಿತರಿಗೆ ಮನೆ ನಿರ್ಮಿಸಿ ಕೊಡಿ’ ಎಂದರು.

ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್‌ಬಾಬು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT