ಶುಕ್ರವಾರ, ಸೆಪ್ಟೆಂಬರ್ 17, 2021
30 °C

ದೌರ್ಜನ್ಯ: ಆರೋಪಿಗಳ ಗಡಿಪಾರಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಬಳಿ ದಲಿತ ಹೆಣ್ಣು ಮಕ್ಕಳ ಮೇಲೆ ಹಲ್ಲೆ ದೌರ್ಜನ್ಯ ಎಸಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಇಲ್ಲಿ ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಸುರೇಶ್‌ಬಾಬು ಅವರಿಗೆ ಮನವಿ ಸಲ್ಲಿಸಿದರು.

‘ಚಿಂತಾಮಣಿಯ ಕಾಲೇಜಿಗೆ ಬಸ್‌ನಲ್ಲಿ ಹೋಗುತ್ತಿದ್ದ ಹೆಣ್ಣು ಮಕ್ಕಳ ಮೇಲೆ ಸವರ್ಣೀಯ ಯುವಕರ ಗುಂಪು ದೌರ್ಜನ್ಯ ನಡೆಸಿದೆ. ಬಸ್‌ ಅಡ್ಡಗಟ್ಟಿ ಹೆಣ್ಣು ಮಕ್ಕಳ ಮೇಲೆ ಯುವಕರು ಹಲ್ಲೆ ನಡೆಸಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ’ ಎಂದು ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

‘ಹೆಣ್ಣು ಮಕ್ಕಳ ಸಂಬಂಧಿಕರ ಮೇಲೆ ಯುವಕರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಈ ಘಟನೆಯಿಂದ ಹೆಣ್ಣು ಮಕ್ಕಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಮತ್ತೊಂದೆಡೆ ಪೋಷಕರು ಮಕ್ಕಳನ್ನು ಶಾಲೆ ಅಥವಾ ಕಾಲೇಜಿಗೆ ಕಳುಹಿಸಲು ಹಿಂದೇಟು ಹಾಕುವ ಪರಿಸ್ಥಿತಿ ಸೃಷ್ಟಿಯಾಗಿದೆ’ ಎಂದು ಸಮಿತಿ ಜಿಲ್ಲಾ ಮಹಿಳಾ ಸಂಚಾಲಕಿ ಪಿ.ಲಕ್ಷ್ಮಿ ಆತಂಕ ವ್ಯಕ್ತಪಡಿಸಿದರು.

‘ಪ್ರಕರಣದ ಆರೋಪಿಗಳ ವಿರುದ್ಧ ಕಟ್ಟುನಿಟ್ಟನ ಕ್ರಮ ಜರುಗಿಸಬೇಕು. ಜತೆಗೆ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆ ನಡೆಸಬೇಕು. ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಹೆಚ್ಚಿನ ಪೊಲೀಸ್‌ ರಕ್ಷಣೆ ನೀಡಬೇಕು. ದಲಿತರ ಹಿತ ಕಾಯದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆ ಎಚ್ಚರಿಕೆ: ‘ಶ್ರೀನಿವಾಸಪುರ ಶಾಸಕ ಕೆ.ಆರ್.ರಮೇಶ್‌ಕುಮಾರ್‌ ಹಾಗೂ ಸಂಸದ ಎಸ್.ಮುನಿಸ್ವಾಮಿ ಅವರು ಮಧ್ಯಪ್ರವೇಶಿಸಿ ದೌರ್ಜನ್ಯಕ್ಕೆ ಒಳಗಾಗಿರುವ ಹೆಣ್ಣು ಮಕ್ಕಳಿಗೆ ನ್ಯಾಯ ದೊರಕಿಸಿ ಕೊಡಬೇಕು. ಹಲ್ಲೆಗೊಳಗಾಗಿರುವ ಹೆಣ್ಣು ಮಕ್ಕಳ ಕುಟುಂಬ ಸದಸ್ಯರಿಗೆ ಪರಿಹಾರ ಘೋಷಿಸಬೇಕು. ಇಲ್ಲವಾದರೆ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ’ ಎಂದು ಸಮಿತಿ ಸದಸ್ಯರು ಎಚ್ಚರಿಕೆ ನೀಡಿದರು.

ಸಮಿತಿಯ ರಾಜ್ಯ ವಿಭಾಗೀಯ ಸಂಚಾಲಕಿ ಲಕ್ಷ್ಮಮ್ಮ, ಸದಸ್ಯರಾದ ಮಾಲಾ, ನಾಗರತ್ನಮ್ಮ, ವರಲಕ್ಷ್ಮೀ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.