ಶನಿವಾರ, ಆಗಸ್ಟ್ 13, 2022
22 °C
ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಉಸ್ತುವಾರಿ ಸಚಿವ ನಾಗೇಶ್‌ ಹೇಳಿಕೆ

ಜಿಲ್ಲೆಯ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಮುಳಬಾಗಿಲು ತಾಲ್ಲೂಕಿಗೆ ₹ 800 ಕೋಟಿ ಅನುದಾನ ಸೇರಿದಂತೆ ಒಟ್ಟಾರೆ ಜಿಲ್ಲೆಗೆ ₹ 3,300 ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಜಿಲ್ಲೆಯ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಹೇಳಿದರು.

ಇಲ್ಲಿ ಮಂಗಳವಾರ ನಡೆದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿ, ‘ಕೆಜಿಎಫ್‌ನಲ್ಲಿರುವ ಬಿಜಿಎಂಎಲ್‌ಗೆ ಸೇರಿದ ಜಮೀನನ್ನು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಲು ಒಪ್ಪಿದೆ. ಈ ಪ್ರದೇಶದಲ್ಲಿ ಕೈಗಾರಿಕಾ ವಲಯ ಸ್ಥಾಪಿಸಲಾಗುತ್ತದೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ದೊರೆತು ಬೆಂಗಳೂರಿಗೆ ವಲಸೆ ಹೋಗುವುದು ತಪ್ಪುತ್ತದೆ’ ಎಂದರು.

‘ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಸಮಸ್ಯೆ ಪರಿಹಾರಕ್ಕಾಗಿ ಬೃಹತ್ ಯೋಜನೆ ರೂಪಿಸಲು ಚಿಂತಿಸಲಾಗಿದೆ. ಪಕ್ಕದ ಆಂಧ್ರಪ್ರದೇಶದಲ್ಲಿ ಮುಳಬಾಗಿಲು ತಾಲ್ಲೂಕು ಗಡಿಯಿಂದ 2 ಕಿ.ಮೀ ದೂರದಲ್ಲಿ ಕೃಷ್ಣಾ ನದಿ ನೀರು ಹರಿಯುತ್ತಿದೆ. ಜಿಲ್ಲೆಗೆ ಕೃಷ್ಣಾ ನದಿ ನೀರು ತರುವ ಸಂಬಂಧ ಆಂಧ್ರಪ್ರದೇಶದ ಮುಖ್ಯಮಂತ್ರಿ ಜತೆ ಚರ್ಚಿಸುತ್ತೇವೆ’ ಎಂದು ಭರವಸೆ ನೀಡಿದರು.

‘ಕೋವಿಡ್‌–19 ಪರಿಸ್ಥಿತಿ ಗಂಭೀರವಾಗುವುದಕ್ಕೂ ಮುನ್ನ ಜಿಲ್ಲಾ ಕೇಂದ್ರದಲ್ಲಿ ನಾಲ್ಕೈದು ಬಾರಿ  ಕುಂದು ಕೊರತೆ ಸಭೆ ನಡೆಸಿ ಜನರ ಅಹವಾಲು ಆಲಿಸಿದ್ದೆ. ನಂತರ ಕೊರೊನಾ ಸೋಂಕಿನ ಕಾರಣಕ್ಕೆ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಈಗ ಎಲ್ಲವೂ ಸಹಜ ಸ್ಥಿತಿಗೆ ಮರಳಿರುವುದರಿಂದ ಸಭೆ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಪರಿಹರಿಸಲಾಗುತ್ತದೆ. ಸಭೆಯಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಅಧಿಕಾರಿಗಳಿಗೆ ರವಾನಿಸುತ್ತೇವೆ’ ಎಂದು ವಿವರಿಸಿದರು.

‘ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಬೆಳೆಗಳು ಚೆನ್ನಾಗಿವೆ. ರಾಗಿ, ನೆಲಗಡಲೆ ಸೇರಿದಂತೆ ಎಲ್ಲಾ ಬೆಳೆಗಳು ಹಸಿರಾಗಿ ಬೆಳೆದು ನಿಂತಿವೆ. ರೈತರು ಈ ಬಾರಿ ಹೆಚ್ಚು ಫಸಲಿನ ನಿರೀಕ್ಷೆಯಲ್ಲಿದ್ದಾರೆ. ಮಳೆಯಿಂದ ಜಿಲ್ಲೆಯ ಕೆಲ ಕೆರೆಗಳು ತುಂಬಿವೆ. ಮತ್ತೆ ಕೆಲ ಕೆರೆಗಳಿಗೆ ಅರ್ಧದಷ್ಟು ನೀರು ಬಂದಿದೆ. ಕೆ.ಸಿ ವ್ಯಾಲಿ ಯೋಜನೆ ನೀರಿನಿಂದ ಈಗಾಗಲೇ 50 ಕೆರೆ ತುಂಬಿವೆ. ಉಳಿದ ಕೆರೆಗಳನ್ನು ತುಂಬಿಸಲಾಗುವುದು’ ಎಂದರು.

‘ಜಿಲ್ಲೆಯ ಗಡಿ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಗಸ್ತು ಹೆಚ್ಚಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದೇ ರೀತಿ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಹೆಚ್ಚಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

ಉಪ ವಿಭಾಗಾಧಿಕಾರಿ ಸೋಮಶೇಖರ್‌ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.