ಮಂಗಳವಾರ, ಸೆಪ್ಟೆಂಬರ್ 17, 2019
27 °C
ಸಮಸ್ಯೆ ಪರಿಹಾರಕ್ಕೆ ಸಭೆಯಲ್ಲಿ ಜಿಲ್ಲಾಧಿಕಾರಿಗೆ ರೈತರ ಮನವಿ

ಸಾಲ ನೀಡಿಕೆಗೆ ಬ್ಯಾಂಕ್‌ಗಳ ಹಿಂದೇಟು

Published:
Updated:
Prajavani

ಕೋಲಾರ: ಪಿ ನಂಬರ್ ರದ್ದು ಹಾಗೂ ಸಾಲ ನೀಡಿಕೆಗೆ ಬ್ಯಾಂಕ್ ಅಧಿಕಾರಿಗಳ ಹಿಂದೇಟು ಕುರಿತ ಸಮಸ್ಯೆಯನ್ನು ರೈತರು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ರ ಗಮನಕ್ಕೆ ತಂದು ಪರಿಹರಿಸುವಂತೆ ಮನವಿ ಮಾಡಿದರು.

ಇಲ್ಲಿ ಗುರುವಾರ ನಡೆದ ರೈತರ ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು ವಿವಿಧ ಇಲಾಖೆ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

‘ರೈತರು ಮೊದಲಿನಿಂದಲೂ ಪಿ ನಂಬರ್ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಪಿ ನಂಬರ್ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದರೂ ಕಂದಾಯ ಇಲಾಖೆ ಅಧಿಕಾರಿಗಳು ತಿಂಗಳುಗಟ್ಟಲೇ ರೈತರನ್ನು ಅಲೆಸುತ್ತಿದ್ದಾರೆ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ಟೊಮೆಟೊ ಉತ್ಪಾದನೆಯಲ್ಲಿ ಕೋಲಾರ ಜಿಲ್ಲೆಯು ಏಷ್ಯಾ ಖಂಡದಲ್ಲೇ ಪ್ರಥಮ ಸ್ಥಾನದಲ್ಲಿದೆ. ಆದರೆ, ಟೊಮೆಟೊ ವಹಿವಾಟಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆಯಿಲ್ಲ. ಕಾಡಾನೆ ದಾಳಿಯಿಂದ ಬೆಳೆ ಹಾನಿಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಪರಿಹಾರ ಕೊಡುತ್ತಿಲ್ಲ. ಖಾಲಿ ಜಾಗದಲ್ಲಿ ನರೇಗಾ ಯೋಜನೆಯಡಿ ಮರಗಳನ್ನು ನೆಟ್ಟು ಆನೆ ದಾಳಿ ನಿಯಂತ್ರಿಸಬೇಕು’ ಎಂದು ಕೋರಿದರು.

‘ತಾಲ್ಲೂಕಿನ ವೇಮಗಲ್‌ನಲ್ಲಿ ಕೃಷಿ ಇಲಾಖೆಯ ಜಾಗವನ್ನು ಉದಯ್‌ಶಂಕರ್ ಎಂಬುವರು ಒತ್ತುವರಿ ಮಾಡಿಕೊಂಡು ವಾಣಿಜ್ಯ ಮಳಿಗೆ ನಿರ್ಮಿಸಿದ್ದಾರೆ. ಈ ಸಂಗತಿ ಇಲಾಖೆ ಅಧಿಕಾರಿಗಳಿಗೆ ಗೊತ್ತಿದ್ದರೂ ರಾಜಕೀಯ ಒತ್ತಡಕ್ಕೆ ಮಣಿದು ಒತ್ತುವರಿ ತೆರವು ಮಾಡುತ್ತಿಲ್ಲ’ ಎಂದು ಆರೋಪಿಸಿದರು.

‘ತಾಲ್ಲೂಕಿನ ಗಂಗರಸನಹಳ್ಳಿಯಲ್ಲಿ ಗಾಯಿತ್ರಿ ಎಂಬುವರ ಜಮೀನನ್ನು ಹರಿರೆಡ್ಡಿ ಎಂಬುವರು ಒತ್ತುವರಿ ಮಾಡಿಕೊಂಡಿದ್ದು, ಕೂಡಲೇ ತೆರವುಗೊಳಿಸಬೇಕು. ಸರ್ಕಾರಿ ಜಾಗ ಕಬಳಿಕೆಗೆ ಕುಮ್ಮಕ್ಕು ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ರೈತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವೈ.ಗಣೇಶ್‌ ಒತ್ತಾಯಿಸಿದರು.

ಅರ್ಜಿ ವಿಲೇವಾರಿ: ರೈತರ ಮುಖಂಡರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ‘ಬಿ ನಂಬರ್ ಸಮಸ್ಯೆ ಮನಗಂಡು 400ಕ್ಕೂ ಹೆಚ್ಚು ಅರ್ಜಿ ವಿಲೇವಾರಿ ಮಾಡಿದ್ದೇವೆ. ಉಳಿದ ಅರ್ಜಿಗಳನ್ನು ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

‘ಪ್ರತಿ ಗ್ರಾಮದಲ್ಲೂ ಸರ್ಕಾರಿ ಜಮೀನು ಗುರುತಿಸಿ ಒತ್ತುವರಿ ತೆರವು ಮಾಡಲಾಗುತ್ತಿದೆ. ಕೆ.ಸಿ ವ್ಯಾಲಿ ಯೋಜನೆ ನೀರು ಕೆರೆಗಳಿಗೆ ಹರಿಯುತ್ತಿದ್ದು, ರಾಜಕಾಲುವೆಗಳ ಹಾಗೂ ಕೆರೆ ಅಂಗಳದ ಒತ್ತುವರಿ ತೆರವುಗೊಳಿಸಲಾಗಿದೆ’ ಎಂದು ವಿವರಿಸಿದರು.

‘ಬ್ಯಾಂಕ್ ಅಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳಡಿ ರೈತರಿಗೆ ಸಾಲ ನಿರಾಕರಿಸುತ್ತಿರುವ ಬಗ್ಗೆ ದೂರು ಬಂದಿವೆ. ಸದ್ಯದಲ್ಲೇ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು, ಸಕಾಲಕ್ಕೆ ಸಾಲ ಮಂಜೂರು ಮಾಡುವಂತೆ ಸೂಚಿಸುತ್ತೇವೆ’ ಎಂದು ತಿಳಿಸಿದರು.

ಪರಿಹಾರ ಕೊಡಿ: ‘ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಈವರೆಗೆ ಪರಿಹಾರ ನೀಡಿಲ್ಲ. ಕೆಜಿಎಫ್‌ ತಾಲ್ಲೂಕಿನ ಮರದಘಟ್ಟ ಗ್ರಾಮದಲ್ಲಿ ಮೃತಪಟ್ಟ 6 ಮಕ್ಕಳ ಕುಟುಂಬ ಸದಸ್ಯರಿಗೆ ಹೆಚ್ಚಿನ ಪರಿಹಾರ ನೀಡಬೇಕು. ರೇಷ್ಮೆ ಇಲಾಖೆ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ಸಿಕ್ಕಿಲ್ಲ. ಅನರ್ಹರಿಗೆ ಸವಲತ್ತು ನೀಡಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು’ಎಂದು ರೈತ ಮುಖಂಡ ಎನ್.ಎನ್.ಶ್ರೀರಾಮ್ ಮನವಿ ಮಾಡಿದರು.

‘ಸಾಲ ಮನ್ನಾ ಯೋಜನೆಯಡಿ ಬಿಡುಗಡೆಯಾಗಿರುವ ಹಣವನ್ನು ಬ್ಯಾಂಕ್ ಅಧಿಕಾರಿಗಳು ಬಡ್ಡಿಗೆ ವಜಾ ಮಾಡಿಕೊಳ್ಳುತ್ತಿದ್ದಾರೆ. ಅಸಲು ಪಾವತಿಸುವಂತೆ ನೋಟಿಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ. ಈ ಶೋಷಣೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ರೈತ ಮುಖಂಡ ನಾರಾಯಣಸ್ವಾಮಿ ಒತ್ತಾಯಿಸಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಗಾಯಿತ್ರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್ ಹಾಜರಿದ್ದರು.

Post Comments (+)