ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಕಲ್ಯಾಣಿ ಸುಂದರಗೊಳಿಸಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಸೂಚನೆ
Last Updated 23 ಫೆಬ್ರುವರಿ 2021, 15:26 IST
ಅಕ್ಷರ ಗಾತ್ರ

ಕೋಲಾರ: ‘ಸರ್ಕಾರದ ವಿವಿಧ ಯೋಜನೆಗಳ ಮೂಲಕ ಜಿಲ್ಲೆಯ ಕಲ್ಯಾಣಿಗಳನ್ನು ಸುಂದರಗೊಳಿಸಬೇಕು. ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಹೆಚ್ಚು ಕೆಲಸ ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಶಾಲಾ -ಕಾಲೇಜುಗಳಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಬಾರದು. ಗ್ರಾಮಾಂತರ ಪ್ರದೇಶದ ಶಾಲೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

‘ಶಾಲಾ ಹಂತದಲ್ಲಿ ಮಕ್ಕಳಿಗೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ಕಾರ್ಯಕ್ರಮ ರೂಪಿಸಬೇಕು. ಪ್ರತಿ ವಿದ್ಯಾರ್ಥಿಗೆ ಗ್ರಾಮ ಪಂಚಾಯಿತಿಯಿಂದ ಗ್ರಂಥಾಲಯದ ಕಾರ್ಡ್‌ ವಿತರಿಸಬೇಕು. ಕೋವಿಡ್ ಸಂದರ್ಭದಲ್ಲಿ ವಲಸೆ ಹೋದ ವಿದ್ಯಾರ್ಥಿಗಳ ದಾಖಲಾತಿ ಬಗ್ಗೆ ಮಾಹಿತಿ ಸಂಗ್ರಹಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ ಅವರಿಗೆ ಆದೇಶಿಸಿದರು.

‘ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಕೃಷಿ ಚಟುವಟಿಕೆಗಳು ಉತ್ತಮವಾಗಿವೆ. ಗ್ರಾ.ಪಂ ಸಕಾಲಕ್ಕೆ ತೆರಿಗೆ ವಸೂಲಿ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಸಮುದಾಯ ಶೌಚಾಲಯಗಳನ್ನು ನಿರ್ಮಿಸಬೇಕು. ಮಹಿಳೆಯರು ಕಸ ವಿಲೇವಾರಿ ವಾಹನಗಳನ್ನು ಚಲಾಯಿಸುವಂತೆ ಆಗಬೇಕು. ನಿರ್ಮಿತಿ ಕೇಂದ್ರಗಳಲ್ಲಿ ಮಹಿಳೆಯರಿಗೆ ವಿವಿಧ ಕೌಶಲ ತರಬೇತಿ ನೀಡಬೇಕು’ ಎಂದು ಹೇಳಿದರು.

‘ಕೆ.ಸಿ ವ್ಯಾಲಿ ಯೋಜನೆ ನೀರಿನ ಹರಿವಿನಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಹೆಚ್ಚಾಗಿವೆ. ಹಾಲು ಉತ್ಪಾದನೆಯಲ್ಲಿ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದ್ದು, ಜಾನುವಾರುಗಳ ಆರೈಕೆಗೆ ಹೆಚ್ಚು ಒತ್ತು ಕೊಡಬೇಕು. ಸರ್ಕಾರದ ವಿವಿಧ ಯೋಜನೆಗಳ ಕೆಲಸಗಳಲ್ಲಿ ಪಾಲ್ಗೊಳ್ಳಬೇಕು. ಸ್ಥಳೀಯ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹಿಸಬೇಕು’ ಎಂದು ಸಲಹೆ ನೀಡಿದರು.

ಕಸದ ಸಮಸ್ಯೆ: ‘ಜಿಲ್ಲೆಯಲ್ಲಿ ಕಸ ಸಂಗ್ರಹಣೆ ಮತ್ತು ವಿಲೇವಾರಿಯು ದೊಡ್ಡ ಸಮಸ್ಯೆಯಾಗಿದೆ. ಎಪಿಎಂಸಿಗಳಲ್ಲಿ ಜಾಗದ ಸಮಸ್ಯೆಯಿದ್ದು, ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಸಣ್ಣ ಉದ್ಯಮಗಳಲ್ಲಿ ಮಹಿಳೆಯರು ಹೆಚ್ಚಾಗಿ ಭಾಗವಹಿಸಬೇಕು. ಜಿಲ್ಲೆಯಲ್ಲಿ 9 ತಿಂಗಳಿಗೆ ಸಾಕಾಗುವಷ್ಟು ಜಾನುವಾರು ಮೇವು ಲಭ್ಯವಿದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಬಗ್ಗೆ ಅರಿವು ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT