ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಗೊಂದಲದ ಗೂಡಾದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ

ಬೆಂಗಳೂರು ಉತ್ತರ ವಿ.ವಿ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ–ಪೋಷಕರ ಪ್ರತಿಭಟನೆ
Last Updated 27 ನವೆಂಬರ್ 2021, 12:48 IST
ಅಕ್ಷರ ಗಾತ್ರ

ಕೋಲಾರ: ಇಲ್ಲಿ ಶನಿವಾರ ನಡೆದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿನ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳು ವಿ.ವಿ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ಮಾಡಿದ್ದರಿಂದ ಸಮಾರಂಭವು ಗೊಂದಲದ ಗೂಡಾಯಿತು.

ನಗರದ ಹೊರವಲಯದ ವಿ.ವಿ ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿ ಘಟಿಕೋತ್ಸವ ಆಯೋಜಿಸಲಾಗಿತ್ತು, ವಿ.ವಿಯ ವಿವಿಧ ವಿಭಾಗಗಳ ಅಂತಿಮ ವರ್ಷದ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್‌ ಗಳಿಸಿದ 27 ವಿದ್ಯಾರ್ಥಿಗಳಿಗೆ ಮಾತ್ರ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಂದ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪ್ರದಾನ ಮಾಡಿಸಲು ವಿ.ವಿ ಆಡಳಿತ ಮಂಡಳಿ ನಿರ್ಧರಿಸಿತ್ತು.

ಈ ಬಗ್ಗೆ ವಿ.ವಿ ಆಡಳಿತ ಮಂಡಳಿಯು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿರಲಿಲ್ಲ. ದ್ವಿತೀಯ, ತೃತೀಯ ರ‍್ಯಾಂಕ್‌ ಗಳಿಸಿದ ವಿದ್ಯಾರ್ಥಿಗಳು ಘಟಿಕೋತ್ಸವದ ವೇದಿಕೆಯಲ್ಲೇ ಪದವಿ ಪ್ರಮಾಣಪತ್ರ ಸ್ವೀಕರಿಸುವ ಮಹಾದಾಸೆಯೊಂದಿಗೆ ಪೋಷಕರ ಜತೆ ಸಮಾರಂಭಕ್ಕೆ ಬಂದಿದ್ದರು. ರಾಜ್ಯಪಾಲರು ಪ್ರಥಮ ರ‍್ಯಾಂಕ್‌ ಗಳಿಸಿದ 27 ವಿದ್ಯಾರ್ಥಿಗಳಿಗೆ ಮಾತ್ರ ಚಿನ್ನದ ಪದಕ ಮತ್ತು ಪದವಿ ಪ್ರಮಾಣಪತ್ರ ಪ್ರದಾನ ಮಾಡಿ ನಿರ್ಗಮಿಸಿದರು. ಬಳಿಕ ಸಮಾರಂಭ ಅಂತ್ಯಗೊಂಡಿತು.

ಆದರೆ, ದ್ವಿತೀಯ ಹಾಗೂ ತೃತೀಯ ರ‍್ಯಾಂಕ್‌ ವಿಜೇತ ವಿದ್ಯಾರ್ಥಿಗಳು ತಮಗೂ ವೇದಿಕೆಯಲ್ಲೇ ಪದವಿ ಪ್ರಮಾಣಪತ್ರ ಪ್ರದಾನ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆಗಿಳಿದರು. ವಿದ್ಯಾರ್ಥಿಗಳ ಜತೆ ವೇದಿಕೆ ಮುಂಭಾಗಕ್ಕೆ ನುಗ್ಗಿದ ಪೋಷಕರು ವಿ.ವಿ ಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ವಿ.ವಿ ಕುಲಸಚಿವ (ಮೌಲ್ಯಮಾಪನ) ಕೆ.ಜನಾರ್ದನಂ ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು.

ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಲು ಮುಂದಾದಾಗ ನೂಕುನುಗ್ಗಲು ಉಂಟಾಗಿ ಗೊಂದಲ ಸೃಷ್ಟಿಯಾಯಿತು. ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಸಮಾರಂಭಕ್ಕೆ ಬಂದಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ನಿರಾಸೆಯಿಂದ ಮನೆಯತ್ತ ಹೆಜ್ಜೆಯಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT