ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ರಾಜಕಾರಣ ನಗರಕ್ಕೆ ಸೀಮಿತ: ಸಚಿವ ಶಿವಕುಮಾರ್‌ ಟೀಕೆ

ಚುನಾವಣಾ ಪ್ರಚಾರ ಸಭೆ
Last Updated 13 ಏಪ್ರಿಲ್ 2019, 15:23 IST
ಅಕ್ಷರ ಗಾತ್ರ

ಕೋಲಾರ: ‘ಕೋಲಾರ ಜಿಲ್ಲೆಯು ಕಾಂಗ್ರೆಸ್‌ನ ಭದ್ರಕೋಟೆ. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುನಿಯಪ್ಪ ಅವರನ್ನು ಗೆಲ್ಲಿಸಿದಂತೆಯೇ ಈ ಬಾರಿಯೂ ಹೆಚ್ಚು ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಿ ಲೋಕಸಭೆ ಕಳುಹಿಸಬೇಕು’ ಎಂದು ಸಚಿವ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ಇಲ್ಲಿ ಶನಿವಾರ ಕಾಂಗ್ರೆಸ್‌– ಜೆಡಿಎಸ್‌ ಮೈತ್ರಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ಬಿಜೆಪಿಯವರು ಸ್ಥಳೀಯ ಅಭ್ಯರ್ಥಿ ಗತಿಯಿಲ್ಲವೆಂದು ಬೆಂಗಳೂರಿನಿಂದ ಅಭ್ಯರ್ಥಿಯನ್ನು ಆಮದು ಮಾಡಿಕೊಂಡಿದ್ದಾರೆ. ಅವರ ರಾಜಕಾರಣ ನಗರಕ್ಕೆ ಮಾತ್ರ ಸೀಮಿತ. ಹಳ್ಳಿಗೂ ಬಿಜೆಪಿಗೂ ಸಂಬಂಧವಿಲ್ಲ’ ಟೀಕಿಸಿದರು.

‘ಮುನಿಯಪ್ಪ 7 ಬಾರಿಯಿಂದ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರು ಗೆದ್ದರೆ ಮಾತ್ರ ಜಿಲ್ಲೆಯ ಜನ ನೆಮ್ಮದಿಯಿಂದ ಇರಲು ಸಾಧ್ಯ. ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುತ್ತಾರೆ. ಬಿಜೆಪಿ ಅಭ್ಯರ್ಥಿಯ ಪೂರ್ವಾಪರ ತಿಳಿದು ಅವರನ್ನು ಬೆಂಬಲಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಿ’ ಎಂದು ಕಿವಿಮಾತು ಹೇಳಿದರು.

‘ಕೋಮುವಾದಿಗಳಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ಅಲ್ಪಸಂಖ್ಯಾತರ ಮತ ಬೇಡ ಎಂದು ಹೇಳಿರುವ ಬಿಜೆಪಿ ನಾಯಕರನ್ನು ಜನರು ತಿರಸ್ಕರಿಸಬೇಕು. ಧರ್ಮ, ಜಾತಿ ನಡುವೆ ಬೆಂಕಿ ಹಚ್ಚಿ ರಾಜಕೀಯ ಮಾಡುವುದು ಬಿಜೆಪಿ ಸಂಸ್ಕೃತಿ’ ಎಂದು ವಿಧಾನಸಭೆ ಉಪಾಧ್ಯಕ್ಷ ಹಾಗೂ ಚಿಂತಾಮಣಿ ಕ್ಷೇತ್ರದ ಜೆಡಿಎಸ್‌ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಲೂಟಿಕೋರರಿಗೆ ಅನುಕೂಲ: ‘ಮೋದಿ ಹಿಂದಿನ ಲೋಕಸಭಾ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಅಮಾನ್ಯೀಕರಣದ ಮೂಲಕ ಲೂಟಿಕೋರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಜಿಎಸ್‌ಟಿ ಜಾರಿಗೊಳಿಸಿ ದೇಶದ ಅರ್ಥ ವ್ಯವಸ್ಥೆ ದುರ್ಬಲಗೊಳಿಸಿದ್ದಾರೆ. ಬಡವರ ಪರ ಯೋಜನೆ ರೂಪಿಸದೆ ಉದ್ಯಮಿಗಳ ಪರ ಯೋಜನೆ ರೂಪಿಸಿದ್ದಾರೆ’ ಎಂದು ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ದೂರಿದರು.

‘ಬಿಜೆಪಿಯುವರು ದೇಶದಲ್ಲಿ ಜಾತಿವಾದ ಹುಟ್ಟಿ ಹಾಕಿದರು. ದೇಶದ ವಿವಿಧೆಡೆ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಬಿಜೆಪಿ ಸರ್ಕಾರ ಶೋಷಕರ ವಿರುದ್ಧ ಶಿಸ್ತುಕ್ರಮ ಕೈಗೊಂಡಿಲ್ಲ. ಸಂವಿಧಾನ ಬದಲಾವಣೆ ಮಾಡುವ ಪಕ್ಷವನ್ನು ಅಧಿಕಾರಕ್ಕೆ ತರುವ ಅನಿವಾರ್ಯತೆ ಇದೆಯೇ?’ ಎಂದು ಪ್ರಶ್ನಿಸಿದರು.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಕಾಂಗ್ರೆಸ್‌ ಸಂಸದ ಮಲ್ಲಿಕಾರ್ಜುನ ಖರ್ಗೆ, ಶಾಸಕರಾದ ಕೆ.ಶ್ರೀನಿವಾಸಗೌಡ, ಕೆ.ವೈ.ನಂಜೇಗೌಡ, ಎಸ್‌.ಎನ್‌.ನಾರಾಯಣಸ್ವಾಮಿ, ಎಂ.ರೂಪಕಲಾ, ರಾಜ್ಯಸಭಾ ಸದಸ್ಯ ರಾಜೀವ್‌ಗೌಡ, ವಿಧಾನ ಪರಿಷತ್‌ ಸದಸ್ಯರಾದ ನಜೀರ್‌ ಅಹಮ್ಮದ್‌, ಆರ್‌.ಚೌಡರೆಡ್ಡಿ, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT