ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಗೆಲುವು: ಕಾರ್ಯಕರ್ತರ ವಿಜಯೋತ್ಸವ

ಪಟಾಕಿ ಸಿಡಿಸಿ ಸಿಹಿ ಹಂಚಿಕೆ: ಪ್ರಧಾನಿ ಮೋದಿ ಪರ ಘೋಷಣೆ
Last Updated 10 ಮಾರ್ಚ್ 2022, 14:31 IST
ಅಕ್ಷರ ಗಾತ್ರ

ಕೋಲಾರ: ದೇಶದ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಇಲ್ಲಿ ಗುರುವಾರ ವಿಜಯೋತ್ಸವ ಆಚರಿಸಿದರು.

ಪಟಾಕಿ ಸಿಡಿಸಿ ಸಿಹಿ ಹಂಚಿದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪರ ಘೋಷಣೆ ಕೂಗಿ ಸಂಭ್ರಮಿಸಿದರು.

‘ಬಿಜೆಪಿಯು ಪಂಜಾಬ್ ಬಿಟ್ಟು ಉತ್ತರಪ್ರದೇಶ, ಗೋವಾ, ಉತ್ತರಾಖಂಡ, ಮಣಿಪುರ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಷ್ಟ್ರಿಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ರ ವರ್ಚಸ್ಸಿನಿಂದ ಇದು ಸಾಧ್ಯವಾಗಿದೆ. ದೇಶದ ಜನಮೋದಿಯವರ ಆಡಳಿತ ಮೆಚ್ಚಿ ಮತ ನೀಡಿದ್ದಾರೆ' ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.

‘ಕಾಂಗ್ರೆಸ್ ‍ಪಕ್ಷ 5 ರಾಜ್ಯಗಳಲ್ಲೂ ಹೀನಾಯ ಸೋಲು ಕಂಡಿದೆ. ಕಾಂಗ್ರೆಸ್‌ ಇನ್ನಾದರೂ ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಲಿ. ಈ ಫಲಿತಾಂಶವು ರಾಜ್ಯ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಕರ್ನಾಟಕದಲ್ಲೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ. ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲವು ಸಾಧಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ಗೆ ಭವಿಷ್ಯವಿಲ್ಲ: ‘ಕೇಂದ್ರ ಸರ್ಕಾರದ ಜನಪರ ಕಾರ್ಯಗಳಿಂದ ಪಕ್ಷಕ್ಕೆ ಗೆಲುವು ಸಿಕ್ಕಿದೆ. ಚುನಾವಣೆಯಲ್ಲಿ ಜನರು ಬಿಜೆಪಿ ಪರ ಒಲವು ತೋರಿದ್ದಾರೆ. ಕಾಂಗ್ರೆಸ್‌ ಸಂಪೂರ್ಣ ನೆಲಕಚ್ಚಿದ್ದು, ದೇಶದಲ್ಲಿ ಆ ಪಕ್ಷಕ್ಕೆ ಭವಿಷ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಕಾಂಗ್ರೆಸ್‌ ಪಕ್ಷವು ಮುಳುಗುವ ಹಡಗು’ ಎಂದು ಕಾರ್ಯಕರ್ತರು ವ್ಯಂಗ್ಯವಾಡಿದರು.

‘ಪಕ್ಷವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಕರ್ನಾಟಕದಲ್ಲಿ ಚುನಾವಣೆ ಎದುರಿಸಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡುತ್ತೇವೆ. ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆದ್ದು ಅಧಿಕಾರ ಹಿಡಿಯುವುದು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಸಮನ್ವಯ ಸಮಿತಿ ಸದಸ್ಯ ವಿಜಯ್‌ಕುಮಾರ್, ನಗರ ಘಟಕದ ಅಧ್ಯಕ್ಷ ತಿಮ್ಮರಾಯಪ್ಪ, ಮುಖಂಡರಾದ ರಾಜೇಶ್‌ಸಿಂಗ್‌, ಮಮತಾ, ಅರುಣಮ್ಮ, ನಾಗರಾಜ್‌ಗೌಡ, ಸುರೇಶ್‌, ನಾರಾಯಣಸ್ವಾಮಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT