ಭಾನುವಾರ, ನವೆಂಬರ್ 29, 2020
22 °C
ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರ ವಿಜಯೋತ್ಸವ

ಸರ್ಕಾರಕ್ಕೆ ಶಕ್ತಿ ತುಂಬಿದ ಪದವೀಧರರು: ವೈಎಎನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಯಡಿಯೂರಪ್ಪರ ಸರ್ಕಾರಕ್ಕೆ ಶಕ್ತಿ ತುಂಬಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡು ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಅವರು ಗೆಲುವು ಸಾಧಿಸಿದ ಬಳಿಕ ನಡೆದ ವಿಜಯೋತ್ಸವದಲ್ಲಿ ಮಾತನಾಡಿದರು.

‘ಚಿದಾನಂದಗೌಡ ಅವರು 7,037 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ವಿಧಾನಸಭೆ ಉಪ ಚುನಾವಣೆ ಜತೆಗೆ ವಿಧಾನ ಪರಿಷತ್ ಚುನಾವಣೆಯಲ್ಲೂ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ವಿಪಕ್ಷಗಳ ಟೀಕೆ, ಆರೋಪಗಳಿಗೆ ಮನ್ನಣೆ ನೀಡದ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ಕೆ ಬೆಂಬಲ ನೀಡಿದ್ದಾರೆ’ ಎಂದರು.

‘ಶಿಕ್ಷಕರು, ಸರ್ಕಾರಿ ನೌಕರರು ಮತ್ತು ಪದವೀಧರರ ಸಮಸ್ಯೆಗಳ ಪರಿಹಾರ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ಚಿದಾನಂದಗೌಡರು ಆಯ್ಕೆ ಆಗಿರುವುದರಿಂದ ವಿಧಾನ ಪರಿಷತ್ತಿನಲ್ಲಿ ಶಿಕ್ಷಕರು ಮತ್ತು ಪದವೀಧರರ ಧ್ವನಿ ಮತ್ತಷ್ಟು ಬಲಗೊಳ್ಳಲಿದೆ. ಶಿಕ್ಷಕರ, ನೌಕರರ ಬಹುದಿನಗಳ ಸಮಸ್ಯೆಗಳನ್ನು ಪರಿಹರಿಸಲು ಶಕ್ತಿ ಬಂದಿದೆ’ ಎಂದು ತಿಳಿಸಿದರು.

‘ಚುನಾವಣಾ ಸೋಲಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವವೇ ಅಲುಗಾಡುತ್ತಿದೆ. ಆ ಪಕ್ಷದ ನಾಯಕರಿಗೆ ಕಾಂಗ್ರೆಸ್‌ನಲ್ಲಿ ತಮಗೆ ಭವಿಷ್ಯವಿಲ್ಲ ಎಂಬ ಆತಂಕ ಶುರುವಾಗಿದೆ. ಈ ಚುನಾವಣೆಗಳು ಮುಂದಿನ 10 ವರ್ಷ ರಾಜ್ಯದಲ್ಲಿ ಬಿಜೆಪಿಯೇ ಸಾರ್ವಭೌಮ ಎಂಬುದನ್ನು ಸಾಕ್ಷೀಕರಿಸಿವೆ. ಕಾರ್ಯಕರ್ತರು, ಶಿಕ್ಷಕರ ಸಂಘಟನೆಗಳು, ಪದವೀಧರರ ಸಂಘಟಿತ ಹೋರಾಟದಿಂದ ಈ ಗೆಲುವು ಲಭಿಸಿದೆ’ ಎಂದು ಸಂತಸ ವ್ಯಕ್ತಪಡಿಸಿದರು.

ಸಮಸ್ಯೆಗೆ ಸ್ಪಂದಿಸುವೆ: ‘ನನ್ನ ಗೆಲುವು ಎಲ್ಲಾ ಶಿಕ್ಷಕರು, ಪದವೀಧರರ ಗೆಲುವಾಗಿದೆ. ನನ್ನ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವೈ.ಎ.ನಾರಾಯಣಸ್ವಾಮಿ ಮಾರ್ಗದರ್ಶನದಲ್ಲಿ ಸಮಸ್ಯೆಗಳಿಗೆ ಸ್ಪಂದಿಸುವೆ’ ಎಂದು ವಿಜೇತ ಅಭ್ಯರ್ಥಿ ಚಿದಾನಂದಗೌಡ ಭರವಸೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೇಣುಗೋಪಾಲ್, ಉಪಾಧ್ಯಕ್ಷ ನಾರಾಯಣಸ್ವಾಮಿ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.