ಲಂಚದ ಹಾವಳಿ: ರೈತ ಸಂಘ ಧರಣಿ

ಭಾನುವಾರ, ಜೂಲೈ 21, 2019
26 °C

ಲಂಚದ ಹಾವಳಿ: ರೈತ ಸಂಘ ಧರಣಿ

Published:
Updated:
Prajavani

ಕೋಲಾರ: ಹಿರಿಯ ನೊಂದಣಾಧಿಕಾರಿ ಕಚೇರಿಯಲ್ಲಿ ಲಂಚದ ಹಾವಳಿ ಮಿತಿ ಮೀರಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶುಕ್ರವಾರ ನೊಂದಣಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

‘ಹಿರಿಯ ನೊಂದಣಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಲಂಚಕ್ಕಾಗಿ ಸಾರ್ವಜನಿಕರನ್ನು ಶೋಷಿಸುತ್ತಿದ್ದಾರೆ. ಸಾರ್ವಜನಿಕರು ಲಂಚ ಕೊಡದಿದ್ದರೆ ಅಧಿಕಾರಿಗಳು ಆಸ್ತಿ ನೊಂದಣಿ ಕೆಲಸ ಮಾಡಲು ಹಿಂದೇಟು ಹಾಕುತ್ತಾರೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಸರ್ವಾಧಿಕಾರಿಗಳಂತೆ ವರ್ತಿಸುತ್ತಿರುವ ಹಿರಿಯ ನೊಂದಣಾಧಿಕಾರಿ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಜನರಿಂದ ಲಂಚದ ರೂಪದಲ್ಲಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡುತ್ತಿದ್ದಾರೆ. ದಲ್ಲಾಳಿಗಳ ಜತೆ ಶಾಮೀಲಾಗಿ ಲಂಚದ ದಂಧೆ ನಡೆಸುತ್ತಿದ್ದಾರೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜಿಲ್ಲಾಡಳಿತ ಭವನ ನಿರ್ಮಿಸಿದೆ. ಆದರೆ, ಕೆಲ ಇಲಾಖೆಗಳ ಕಚೇರಿಗಳು ಖಾಸಗಿ ಕಟ್ಟಡಗಳಲ್ಲಿ ಮುಂದುವರಿದಿವೆ. ಲಂಚದ ದಂಧೆಗಾಗಿಯೇ ಖಾಸಗಿ ಕಟ್ಟಡಗಳಲ್ಲಿ ಕಚೇರಿಗಳನ್ನು ಮುಂದುವರಿಸಲಾಗಿದೆ’ ಎಂದು ಆರೋಪಿಸಿದರು.

ಹಣ ಪೋಲು: ‘ಸರ್ಕಾರಿ ಕಟ್ಟಡವಿದ್ದರೂ ಅಧಿಕಾರಿಗಳು ಖಾಸಗಿ ಕಟ್ಟಡಗಳನ್ನು ಬಾಡಿಗೆಗೆ ಪಡೆದು ಸಾರ್ವಜನಿಕರ ಹಣವನ್ನು ಪೋಲು ಮಾಡುತ್ತಿದ್ದಾರೆ. ನೊಂದಣಾಧಿಕಾರಿ ಕಚೇರಿಯನ್ನು ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಿಸಲು ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಲಂಚದಾಸೆಗಾಗಿ ಕಚೇರಿ ಸ್ಥಳಾಂತರಿಸದೆ ಸಬೂಬು ಹೇಳುತ್ತಿದ್ದಾರೆ’ ಎಂದು ಧರಣಿನಿರತರು ಕಿಡಿಕಾರಿದರು.

‘ಅಧಿಕಾರಿಗಳು ಜನರಿಗೆ ಸಿಗಬೇಕಾದ ಸವಲತ್ತುಗಳನ್ನು ಮಾರಾಟ ಮಾಡುವ ಸಂಚು ರೂಪಿಸಿದ್ದಾರೆ. ಲಂಚ ಕೊಡದ ಸಾರ್ವಜನಿಕರ ಆಸ್ತಿಯ ಕಡತಗಳನ್ನೇ ಅಧಿಕಾರಿಗಳು ನಾಪತ್ತೆ ಮಾಡುತ್ತಾರೆ. ದಾಖಲೆಪತ್ರಗಳಲ್ಲಿ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನಮೂದಿಸಿ ತೊಂದರೆ ಮಾಡುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಹಿರಿಯ ನೊಂದಣಾಧಿಕಾರಿ ಕಚೇರಿಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಕಚೇರಿಯನ್ನು ಶೀಘ್ರವೇ ಜಿಲ್ಲಾಡಳಿತ ಭವನಕ್ಕೆ ಸ್ಥಳಾಂತರಿಸಬೇಕು. ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಇಲ್ಲದಿದ್ದರೆ ಜಿಲ್ಲಾಡಳಿತ ಭವನದ ಎದುರು ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಸಂಚಾಲಕ ಕೆ.ಶ್ರೀನಿವಾಸಗೌಡ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್, ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್‌, ಶ್ರೀನಿವಾಸಪುರ ತಾಲ್ಲೂಕು ಘಟಕದ ಅಧ್ಯಕ್ಷ ಆಂಜಿನಪ್ಪ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !