ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಗರ್‌ ಹುಕುಂ: ಅರ್ಜಿ ಸ್ವೀಕಾರಕ್ಕೆ ಮನವಿ

Last Updated 11 ಮಾರ್ಚ್ 2019, 14:10 IST
ಅಕ್ಷರ ಗಾತ್ರ

ಕೋಲಾರ: ಬಗರ್‌ ಹುಕುಂ ಸಾಗುವಳಿ ಅಕ್ರಮ ಸಕ್ರಮಕ್ಕೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ, ಪುರಸಭೆ ಮತ್ತು ನಗರಸಭೆ ವ್ಯಾಪ್ತಿಯಲ್ಲೂ ಫಾರಂ ನಂ 57ರ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್) ಸದಸ್ಯರು ಇಲ್ಲಿ ಸೋಮವಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅವರಿಗೆ ಮನವಿ ಸಲ್ಲಿಸಿದರು.

‘ಪಟ್ಟಣ ಹಾಗೂ ನಗರ ಪ್ರದೇಶದಲ್ಲಿ ರೈತರು, ಕೂಲಿ ಕಾರ್ಮಿಕರು, ಹಿಂದುಳಿದ ವರ್ಗದವರು ಮತ್ತು ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪುರಸಭೆ 3 ಕಿ.ಮೀ, ನಗರಸಭೆ 5 ಕಿ.ಮೀ ವ್ಯಾಪ್ತಿಯಲ್ಲಿ ವಾಸ ಇರುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ನಿರಾಕರಿಸಿ ಜಿಲ್ಲೆಯ ಒಂದೊಂದು ತಾಲ್ಲೂಕಿನಲ್ಲಿ ಅವೈಜ್ಞಾನಿಕವಾಗಿ ಗಡಿ ಗುರುತಿಸಲಾಗಿದೆ’ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

‘ಭೂ ಕಾಯ್ದೆ ತಿದ್ದಪಡಿಯಡಿ ಬಡವರು ಯಾವುದೇ ಪ್ರದೇಶದಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಲು ಸಂಘದ ನೇತೃತ್ವದಲ್ಲಿ ರಾಜ್ಯವ್ಯಾಪಿ ಹೋರಾಟ ನಡೆಸಿದ್ದು, ಸರ್ಕಾರ ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ. ಹೀಗಾಗಿ ಪಟ್ಟಣ ಮತ್ತು ನಗರ ಪ್ರದೇಶದಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಬೇಕು’ ಎಂದು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಒತ್ತಾಯಿಸಿದರು.

‘ರೈತರು ಗೋಮಾಳದ ಭೂಮಿ, ಅಕ್ರಮ ಸಕ್ರಮ ಸಾಗುವಳಿ ಜಮೀನು ಪಡೆದರೂ ಅರಣ್ಯ ಇಲಾಖೆಯವರು ವಶಪಡಿಸಿಕೊಂಡು ಸಾಕಷ್ಟು ತೊಂದರೆ ಕೊಡುತ್ತಿದ್ದಾರೆ. ಜಮೀನು ರೈತರ ಸ್ವಾಧೀನದಲ್ಲಿ ಇದ್ದರೂ ಪಹಣಿಯಲ್ಲಿ ಅರಣ್ಯವೆಂದು ನಮೂದಿಸಿರುವುದರಿಂದ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ’ ಎಂದು ದೂರಿದರು.

‘ಭೂ ಕಾಯ್ದೆ ತಿದ್ದುಪಡಿ ಮಾಡುವಂತೆ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿದ್ದವು. ಅದರ ಭಾಗವಾಗಿ ಕೋಲಾರ ಜಿಲ್ಲಾ ಹೊರತುಪಡಿಸಿ ಬೇರೆ ಜಿಲ್ಲೆಗಳ ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ನಿರ್ಬಂಧ ವಿಧಿಸದೆ ಅರ್ಜಿ ಸ್ವೀಕರಿಸಕಾಗುತ್ತಿದೆ. ಅದೇ ರೀತಿ ಕೋಲಾರ ಜಿಲ್ಲೆಯಲ್ಲೂ ಅರ್ಜಿ ಸ್ವೀಕರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು.

ಕೆಪಿಆರ್‌ಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ, ಕಾರ್ಯದರ್ಶಿ ಟಿ.ಎಂ.ವೆಂಕಟೇಶ್ ಸದಸ್ಯರಾದ ದೇವರಾಜ್, ಎನ್.ಎನ್.ಶ್ರೀರಾಮ್, ನವೀನ್, ವಿ.ನಾರಾಯಣರೆಡ್ಡಿ, ಮುನಿವೆಂಕಟೇಗೌಡ, ವೆಂಕಟೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT