ಮಂಗಳವಾರ, ಮೇ 17, 2022
25 °C

ಶಿಕ್ಷಣದ ಜತೆಗೆ ಮಾನವೀಯ ಮೌಲ್ಯ ಬೆಳೆಸಿ: ಸಿ.ಆರ್.ಅಶೋಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಭವ್ಯ ಭಾರತದ ಪ್ರಜೆಗಳಾದ ವಿದ್ಯಾರ್ಥಿಗಳು ಪ್ರಾಥಮಿಕ ಹಂತದಿಂದಲೇ ಶಿಕ್ಷಣದ ಜತೆಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು. ಗುರು-ಹಿರಿಯರು, ತಂದೆ-ತಾಯಿಗಳೆಂಬ ಬಾಂಧವ್ಯವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿಕ್ಷಣ ಪಡೆದಾಗ ಉದಾತ್ತ ಗುಣ ಮೈಗೂಡಿಸಿಕೊಳ್ಳಲು ಸಾಧ್ಯ’ ಎಂದು ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಅಭಿಪ್ರಾಯಪಟ್ಟರು.

ಸಾಲು ಮರದ ತಿಮ್ಮಕ್ಕ ಇಕೋ ಕ್ಲಬ್ ತಾಲ್ಲೂಕಿನ ಯಲವಾರ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಸಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ‘ಮನೆಯಲ್ಲಿರುವ ತಾತ, ಅಜ್ಜಿ, ಅಪ್ಪ, ಅಮ್ಮ ಸಂಬಂಧಗಳಿಗೆ ಹೆಚ್ಚಿನ ಆದ್ಯತೆ ನೀಡುವುದನ್ನು ವಿದ್ಯಾರ್ಥಿ ದಿಸೆಯಲ್ಲಿ ಕಲಿಯಬೇಕು’ ಎಂದು ಕಿವಿಮಾತು ಹೇಳಿದರು.

‘ಹಿರಿಯ ನಾಗರಿಕರು ಬದುಕಿದ ರೀತಿ ಮತ್ತು ಅವರ ಅನುಭವ ಸಮಾಜಕ್ಕೆ ಅತ್ಯಮೂಲ್ಯ ಆಸ್ತಿ. ಮನೆಯಲ್ಲಿನ ಹಿರಿಯ ನಾಗರಿಕರು ದೇವರ ಸಮಾನ. ನಮ್ಮನ್ನು ಸಾಕಿ ಬೆಳೆಸಿದ ಹಿರಿಯರನ್ನು ಗೌರವಿಸುವ ಮತ್ತು ಪ್ರೀತಿಸುವ ಕಾರ್ಯ ನಿರಂತರವಾಗಬೇಕು. ಈ ನಿಟ್ಟಿನಲ್ಲಿ ಅಕ್ಷರ ಆರೋಗ್ಯ ವೃದ್ಧಿಗೆ ತೊಡಗಿಸಿಕೊಳ್ಳುವ ಅಗತ್ಯವಿದೆ.  ತಂದೆ ತಾಯಿಯು ಮಕ್ಕಳಿಗೆ ಸಂಸ್ಕಾರ ಕಲಿಸಬೇಕು’ ಎಂದು ಸಲಹೆ ನೀಡಿದರು.

‘ಹಿರಿಯ ನಾಗರಿಕರು ಯೌವ್ವನದಲ್ಲಿ ದುಡಿದು, ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಮಾರ್ಗದರ್ಶಕರಾಗಿದ್ದಾರೆ. ಆದರೆ, ಯುವಕ ಯುವತಿಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಧಾವಂತದಲ್ಲಿ ಹಿರಿಯರನ್ನು ಮರೆಯುತ್ತಿದ್ದಾರೆ. ಈ ಹಿಂದೆ ಅವಿಭಕ್ತ ಕುಟುಂಬಗಳು ಹೆಚ್ಚಿನ ಪ್ರಮಾಣದಲ್ಲಿದ್ದವು. ಆದರೆ, ಈಗ ಅವಿಭಕ್ತ ಕುಟುಂಬಗಳು ಕಣ್ಮರೆಯಾಗುತ್ತಿವೆ. ಹಿರಿಯ ನಾಗರಿಕರನ್ನು ನೋಡಿಕೊಳ್ಳುವ ಮನಸ್ಥಿತಿ ಇಲ್ಲವಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಮನೆಗೆ ಎರಡು ಗಿಡ, ಊರಿಗೆ ಒಂದು ವನ ಎಂಬುದು ಹಳೆಯ ಮಾತು. ಶಾಲೆಯಲ್ಲಿ ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಸುಂದರಗೊಳಿಸುವ ಜತೆಗೆ ಆಮ್ಲಜನಕ ಪಡೆಯಲು ವಿದ್ಯಾರ್ಥಿಗಳು ಸನ್ನದ್ಧರಾಬೇಕು’ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್ ತಿಳಿಸಿದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೈ.ಎಂ.ಮುನಿಸ್ವಾಮಿ, ಮುಖ್ಯ ಶಿಕ್ಷಕಿ ವಿ.ಭಾಗ್ಯಲಕ್ಷ್ಮಮ್ಮ, ಶಿಕ್ಷಕರಾದ ವಿ.ಶ್ರೀನಿವಾಸ್, ವಿ.ಕೆ.ಬಾಬು, ಎಂ.ರವಿ, ಕೆ.ಎನ್.ಪದ್ಮಾ, ಟಿ.ಎಂ.ಉಮಾದೇವಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು