ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲೋತ್ಪನ್ನ ಬೆಲೆ ಏರಿಕೆ: ಪ್ರಧಾನಿ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕೇಂದ್ರ ಸರ್ಕಾರದ ಅಣಕು ಶವ ಯಾತ್ರೆ
Last Updated 11 ಜನವರಿ 2021, 16:34 IST
ಅಕ್ಷರ ಗಾತ್ರ

ಕೋಲಾರ: ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ನಗರದಲ್ಲಿ ಸೋಮವಾರ ಕೇಂದ್ರ ಸರ್ಕಾರದ ಅಣಕು ಶವ ಯಾತ್ರೆ ನಡೆಸಿ ಪ್ರತಿಭಟನೆ ಮಾಡಿದರು.

ಗಾಂಧಿವನದಿಂದ ಮೆಕ್ಕೆ ವೃತ್ತದವರೆಗೆ ಅಣಕು ಶವ ಯಾತ್ರೆ ನಡೆಸಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿ ದಹಿಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಏರು ಗತಿಯಲ್ಲಿ ಸಾಗಿದೆ. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರವು ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

‘ಕೋವಿಡ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಜನಸಾಮಾನ್ಯರಿಗೆ ಜೀವನ ನಿರ್ವಹಣೆ ಮಾಡುವುದೇ ಕಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ತೈಲೋತ್ಪನ್ನಗಳ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆ ಜನಸಾಮಾನ್ಯರ ಆರ್ಥಿಕ ಸಂಕಷ್ಟದ ಅರಿವಿಲ್ಲ’ ಎಂದು ಆರೋಪಿಸಿದರು.

‘ಲೀಟರ್‌ ಪೆಟ್ರೋಲ್‌ ಬೆಲೆ ₹ 87 ಹಾಗೂ ಡೀಸೆಲ್‌ ಬೆಲೆ ₹ 78ರ ಗಡಿ ದಾಟಿದೆ. ಅಡುಗೆ ಅನಿಲ ಸಿಲಿಂಡರ್‌ ಬೆಲೆ ₹ 800ರ ಆಸುಪಾಸಿನಲ್ಲಿದೆ. ಬೇಳೆ ಕಾಳು, ಅಕ್ಕಿ, ಅಡುಗೆ ಎಣ್ಣೆಯಂತಹ ಆಹಾರ ಪದಾರ್ಥಗಳ ಬೆಲೆ ದುಪ್ಪಟ್ಟಾಗಿದೆ. ಜನರ ದುಡಿಮೆಯ ಹಣ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ಕೇಂದ್ರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಬಡ, ಮಧ್ಯಮ ವರ್ಗದ ಜನರು ತೊಂದರೆ ಅನುಭವಿಸುವಂತಾಗಿದೆ’ ಎಂದು ಕಿಡಿಕಾರಿದರು.

ಕೈಗೊಂಬೆ: ‘ಪ್ರಧಾನಿ ಮೋದಿ ಜನಪರ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಯಾಗಿರುವ ಅವರಿಗೆ ಜನಸಾಮಾನ್ಯರ ಕಷ್ಟದ ಅರಿವಿಲ್ಲ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ಸಣ್ಣ ವ್ಯಾಪಾರಿಗಳು ಹಾಗೂ ಉದ್ದಿಮೆದಾರರು ಬೀದಿ ಪಾಲಾಗಿದ್ದಾರೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ತೈಲೋತ್ಪನ್ನಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದಕ್ಕೆ ಅನುಗುಣವಾಗಿ ಬಸ್‌ ಪ್ರಯಾಣ ದರ ಹೆಚ್ಚಳವಾಗಿದೆ. ತೈಲ ಕಂಪನಿಗಳು ಬಡ ಜನರ ಹಣ ಲೂಟಿ ಮಾಡುತ್ತಿವೆ. ಸರಕು ಮತ್ತು ಸೇವಾ ತೆರಿಗೆಯು (ಜಿಎಸ್‌ಟಿ) ಜನಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ’ ಎಂದು ಕಿಡಿಕಾರಿದರು.

‘ಬಿಜೆಪಿಯ ದುರಾಡಳಿತದಿಂದ ಬೇಸತ್ತಿರುವ ಜನ ಹಿಡಿಶಾಪ ಹಾಕುತ್ತಿದ್ದಾರೆ. ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸದಿದ್ದರೆ ದೇಶಕ್ಕೆ ಭವಿಷ್ಯದಲ್ಲಿ ಮತ್ತಷ್ಟು ಕಷ್ಟದ ದಿನಗಳು ಎದುರಾಗುತ್ತವೆ. ಜನ ಬೀದಿಗಿಳಿದು ಹೋರಾಟ ನಡೆಸುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್, ಮಾಲೂರು ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್, ಬಂಗಾರಪೇಟೆ ತಾಲ್ಲೂಕು ಘಟಕದ ಮಂಜುನಾಥ್, ಸದಸ್ಯರಾದ ಕಿರಣ್, ನಾಗೇಶ್, ತಿಮ್ಮಣ್ಣ, ಕೇಶವ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT