ಗುರುವಾರ , ಫೆಬ್ರವರಿ 27, 2020
19 °C
ಮಕ್ಕಳ ಆಸ್ಪತ್ರೆ ಉದ್ಘಾಟನೆಗೆ ರೈತ ಸಂಘ ಸದಸ್ಯರ ಒತ್ತಾಯ

ಕೋಲಾರ: ಆಸ್ಪತ್ರೆ ಎದುರು ಜಾನುವಾರು ಕಟ್ಟಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ನಗರದ ಶ್ರೀ ನರಸಿಂಹರಾಜ (ಎಸ್‌ಎನ್‌ಆರ್‌) ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಸೋಮವಾರ ಆಸ್ಪತ್ರೆ ಎದುರು ಜಾನುವಾರು ಕಟ್ಟಿ ಧರಣಿ ನಡೆಸಿದರು.

ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರ ಮುಖವಾಡ ಧರಿಸಿ ಡೋಲು ಮೇಳದ ಜತೆ ಆಸ್ಪತ್ರೆ ಉದ್ಘಾಟನೆಯ ಅಣಕು ಪ್ರದರ್ಶನ ನಡೆಸಿದ ಧರಣಿನಿರತರು, ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಸುಮಾರು ₹2.50 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸಿ ಏಳೆಂಟು ತಿಂಗಳಾಗಿದೆ. ಆದರೆ, ಜನಪ್ರತಿನಿಧಿಗಳಲ್ಲಿನ ಇಚ್ಛಾಶಕ್ತಿ ಕೊರತೆಯಿಂದ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿಲ್ಲ. ಜನಪ್ರತಿನಿಧಿಗಳ ವೈಯಕ್ತಿಕ ಕಾರಣಕ್ಕೆ ಆಸ್ಪತ್ರೆ ಉದ್ಘಾಟನೆ ದಿನವನ್ನು ಏಳೆಂಟು ಬಾರಿ ಮುಂದೂಡಲಾಗಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಅಸಮಾಧಾನ ವ್ಯಕ್ತಪಡಿಸಿದರು.

‘೧೦೦ ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಆರೋಗ್ಯ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಆಸ್ಪತ್ರೆಗೆ ಉದ್ಘಾಟನೆ ಭಾಗ್ಯ ಕೂಡಿ ಬಂದಿಲ್ಲ. ಹೀಗಾಗಿ ಆಸ್ಪತ್ರೆ ನಿರುಪಯುಕ್ತವಾಗಿದೆ’ ಎಂದು ಕಿಡಿಕಾರಿದರು.

ಹಾಸಿಗೆ ಸಮಸ್ಯೆ: ‘ಎಸ್‌ಎನ್‌ಆರ್‌ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ 90 ಹಾಸಿಗೆ ಸಾಮರ್ಥ್ಯವಿದೆ. ರೋಗಿಗಳ ಸಂಖ್ಯೆ ಹೆಚ್ಚಿದ್ದು, ಆಸ್ಪತ್ರೆಯಲ್ಲಿ ಹಾಸಿಗೆ ಸಮಸ್ಯೆ ಎದುರಾಗಿದೆ. ಇದರಿಂದ ರೋಗಿಗಳು ನೆಲದಲ್ಲಿ ಮಲಗುವ ಪರಿಸ್ಥಿತಿ ಸೃಷ್ಟಿಯಾಗಿದೆ. ಹಾಸಿಗೆ ಸಮಸ್ಯೆ ಕಾರಣಕ್ಕೆ ವೈದ್ಯರು ರೋಗಿಗಳನ್ನು ದಾಖಲು ಮಾಡಿಕೊಳ್ಳದೆ ಬೇರೆ ಆಸ್ಪತ್ರೆಗಳಿಗೆ ಕಳುಹಿಸುತ್ತಿದ್ದಾರೆ’ ಎಂದು ಧರಣಿನಿರತರು ಆರೋಪಿಸಿದರು.

‘ಈ ಹಿಂದೆ ಆರೋಗ್ಯ ಸಚಿವರಾಗಿದ್ದ ಕೆ.ಆರ್.ರಮೇಶ್‌ಕುಮಾರ್ ಅವರು ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶಕ್ಕಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮಂಜೂರು ಮಾಡಿಸಿದರು. ಅಲ್ಲದೇ, ಆಸ್ಪತ್ರೆಗೆ ಅನುದಾನ ಬಿಡುಗಡೆ ಮಾಡಿಸಿದರು. ನಿಗದಿತ ಅವಧಿಯೊಳಗೆ ಆಸ್ಪತ್ರೆ ಕಾಮಗಾರಿ ಸಹ ಪೂರ್ಣಗೊಂಡಿದೆ. ಆದರೆ, ಈಗ ಆಸ್ಪತ್ರೆ ಉದ್ಘಾಟನೆಗೆ ಜಿಲ್ಲಾಡಳಿತ ಮೀನಮೇಷ ಎಣಿಸುತ್ತಿದೆ’ ಎಂದು ಆರೋಪಿಸಿದರು.

ಸೇವೆಗೆ ಮುಕ್ತಗೊಳಿಸಿ

‘ಎಸ್‌ಎನ್‌ಆರ್ ಆಸ್ಪತ್ರೆಯು ಖಾಸಗಿ ಆಸ್ಪತ್ರೆಗಿಂತ ಕಡಿಮೆಯಿಲ್ಲ. ಕಾಲಕಾಲಕ್ಕೆ ಉತ್ತಮ ವೈದ್ಯಕೀಯ ಸೇವೆ ದೊರೆಯುತ್ತಿದೆ. ಆಸ್ಪತ್ರೆಯಲ್ಲಿ ಹೊರ ಮತ್ತು ಒಳ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಹೆಚ್ಚುವರಿ ಕಟ್ಟಡ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಾಧ್ಯವಾದಷ್ಟು ಬೇಗನೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್‌, ಸಂಚಾಲಕ ಕೆ.ಶ್ರೀನಿವಾಸಗೌಡ, ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿ, ಸದಸ್ಯರಾದ ವೆಂಕಟೇಶ್, ಅನುಶ್ರೀ, ತಿಮ್ಮಣ್ಣ, ನಾಗೇಶ್, ಮಂಜುನಾಥ್, ಹರೀಶ್, ಆಂಜಿನಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)