ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರಸ್ನೇಹಿಯಾಗಿ ಗಣೇಶ ಹಬ್ಬ ಆಚರಿಸಿ

ಸಾರ್ವಜನಿಕ ಸ್ಥಳದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ: ಡಿ.ಸಿ ಸತ್ಯಭಾಮ
Last Updated 12 ಆಗಸ್ಟ್ 2020, 16:52 IST
ಅಕ್ಷರ ಗಾತ್ರ

ಕೋಲಾರ: ‘ಕೊರೊನಾ ಸೋಂಕಿನ ಕಾರಣಕ್ಕೆ ಜಿಲ್ಲೆಯಲ್ಲಿ ಈ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಸಾಮೂಹಿಕ ಮೆರವಣಿಗೆ ಮತ್ತು ವಿಸರ್ಜನೆ ನಿರ್ಬಂಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು.

ಗೌರಿ–ಗಣೇಶ ಹಬ್ಬದ ಸಂಬಂಧ ಇಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿ, ‘ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟರ್‌್ ಆಫ್‌ ಪ್ಯಾರಿಸ್‌ನಿಂದ (ಪಿಓಪಿ) ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ ಮತ್ತು ಬಳಕೆ ಜಿಲ್ಲೆಯಲ್ಲಿ ನಿಷೇಧಿಸಲಾಗಿದೆ’ ಎಂದು ಹೇಳಿದರು.

‘ಜನರು ಸಗಣಿ, ಗೋಧಿ ಅಥವಾ ರಾಗಿ ಹಿಟ್ಟಿಗೆ ಅರಿಶಿನ ಪುಡಿ ಸೇರಿಸಿ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ಮನೆಗಳಲ್ಲಿ ಪೂಜಿಸಬೇಕು. ಅರಿಶಿಣದ ಬಳಕೆಯಿಂದ ಪರಿಸರಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಪರಿಸರಸ್ನೇಹಿಯಾಗಿ ಗಣೇಶ ಹಬ್ಬ ಆಚರಿಸಬೇಕು’ ಎಂದು ಮನವಿ ಮಾಡಿದರು.

‘ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ. ಮನೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಆರಾಧಿಸಲು ಯಾವುದೇ ಅಡ್ಡಿಯಿಲ್ಲ. ಸಾರ್ವಜನಿಕ ಕೆರೆ, ಬಾವಿಗಳಲ್ಲಿ ಈ ಬಾರಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶವಿಲ್ಲ. ಜನರು ತಮ್ಮ ಮನೆಗಳಲ್ಲಿ ನೀರಿನ ಬಕೆಟ್, ಪಾತ್ರೆಗಳಲ್ಲಿ ಮೂರ್ತಿ ವಿಸರ್ಜನೆ ಮಾಡಬೇಕು’ ಎಂದು ಸೂಚಿಸಿದರು.

ಮಾದರಿಯಾಗಿ: ‘ಗೌರಿ– ಗಣೇಶ ಹಬ್ಬವನ್ನು ಸರಳವಾಗಿ ಮತ್ತು ಕುಟುಂಬಕ್ಕೆ ಸೀಮಿತಗೊಳಿಸಿ ಮನೆಗಳಲ್ಲಿ ಆಚರಿಸೋಣ. ಶಾಂತಿ, ಸೌಹಾರ್ದತೆ ಕಾಪಾಡಿ ಮಾದರಿಯಾಗಬೇಕು. ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ. ಹೀಗಾಗಿ ಡಿ.ಜೆ ಅಥವಾ ಮೈಕ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ’ ಎಂದು ವಿವರಿಸಿದರು.

‘ಪಿಓಪಿ ಗಣೇಶ ಮೂರ್ತಿಗಳ ಸಂಗ್ರಹ ಅಥವಾ ಮಾರಾಟ ಮಾಡುವುದು ಕಂಡುಬಂದರೆ ಸಾರ್ವಜನಿಕರು ಪೊಲೀಸ್‌ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು. ನಗರಸಭೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮಾರುಕಟ್ಟೆಯಲ್ಲಿ ಪಿಓಪಿ ಗಣೇಶ ಮೂರ್ತಿಗಳ ಮಾರಾಟದ ಬಗ್ಗೆ ನಿಯಮಿತವಾಗಿ ಪರಿಶೀಲನೆ ನಡೆಸಬೇಕು’ ಎಂದು ತಿಳಿಸಿದರು.

ಜಮೀನು ಮಂಜೂರು: ‘ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ವಿಸ್ಟ್ರಾನ್‌ ಐ–ಪೋನ್ ಕಂಪನಿಗೆ 43 ಎಕರೆ ಜಮೀನು ಮಂಜೂರಾಗಿದೆ. ಕಂಪನಿಯು ಇನ್ನು 5 ಎಕರೆ ಜಮೀನಿಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) ಪ್ರಸ್ತಾವ ಸಲ್ಲಿಸಿದೆ. ₹ 687 ಕೋಟಿ ವೆಚ್ಚದಲ್ಲಿ ಕಂಪನಿ ಆರಂಭವಾಗುತ್ತಿದ್ದು, ಸುಮಾರು 10 ಸಾವಿರ ಮಂದಿಗೆ ಉದ್ಯೋಗ ಸಿಗಲಿದೆ. ಇದರಲ್ಲಿ ಶೇ 92ರಷ್ಷು ಉದ್ಯೋಗವಾಕಾಶ ಸ್ಥಳೀಯರಿಗೆ ಮೀಸಲಿಡಲಾಗಿದೆ’ ಎಂದು ಮಾಹಿತಿ ನೀಡಿದರು.

ಪರಿಸರಸ್ನೇಹಿ ಗಣೇಶ ಹಬ್ಬ ಆಚರಣೆ ಸಂಬಂಧ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಾಗೃತಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಎಸ್‌.ಕೆ.ವಾಸುದೇವ, ಡಿವೈಎಸ್ಪಿ ಚೌಡಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT