ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ: ಮುಖ್ಯ ಶಿಕ್ಷಕರಿಗೆ ಡಿಡಿಪಿಐ ಕೃಷ್

Last Updated 7 ಮೇ 2021, 12:28 IST
ಅಕ್ಷರ ಗಾತ್ರ

ಕೋಲಾರ: ‘ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಆನ್‌ಲೈನ್‌ ಮತ್ತು ದೂರವಾಣಿ ಮೂಲಕ ಸಂಪರ್ಕಿಸಿ ನಿರಂತರವಾಗಿ ಅವರ ಶೈಕ್ಷಣಿಕ ಪ್ರಗತಿಯ ಪರಿಶೀಲನೆ ನಡೆಸಿ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ ಜಿಲ್ಲೆಯ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರಿಗೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರ ಜತೆ ಇಲ್ಲಿ ಶುಕ್ರವಾರ ಆನ್‌ಲೈನ್ ಮೂಲಕ ಸಭೆ ನಡೆಸಿದ ಅವರು, ‘ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗದಂತೆ ಕ್ರಮ ವಹಿಸಿ’ ಎಂದು ಕಿವಿಮಾತು ಹೇಳಿದರು.

‘ಜನತಾ ಕರ್ಫ್ಯೂ ಹಾಗೂ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಆತಂಕದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗುತ್ತಿದೆ. ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ಮಕ್ಕಳನ್ನು ಸಿದ್ಧಪಡಿಸಬೇಕಿದೆ. ಎಸ್ಸೆಸ್ಸೆಲ್ಸಿಯು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಮಕ್ಕಳ ಕಲಿಕೆ ಕುಂಠಿತವಾಗಲು ಬಿಡಬಾರದು’ ಎಂದು ಸಲಹೆ ನೀಡಿದರು.

‘ಆನ್‌ಲೈನ್‌ನಲ್ಲಿ ಮಕ್ಕಳಿಗೆ ಕಲಿಕೆ ಮುಂದುವರಿಸಲು ಇರುವ ಅವಕಾಶ ಬಳಸಿಕೊಳ್ಳಿ. ಆನ್‌ಲೈನ್‌ನಲ್ಲಿ ಸಾಧ್ಯವಾಗದಿದ್ದರೆ ಮಕ್ಕಳಿಗೆ ದಿನಕ್ಕೊಂದು ಬಾರಿ ಮೊಬೈಲ್‌ ಕರೆ ಮಾಡಿ ಮಾತನಾಡಿ. ಅವರಿಗೆ ಪರೀಕ್ಷೆ ಸಂಬಂಧ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡಿ’ ಎಂದು ತಿಳಿಸಿದರು.

‘ಇಲಾಖೆ ಮಕ್ಕಳ ಕಲಿಕೆಗೆ ಸುಲಭವಾಗಲಿ ಎಂಬ ಉದ್ದೇಶಕ್ಕೆ 6 ಸೆಟ್ ಅಧ್ಯಾಯವಾರು ಪ್ರಶ್ನೆಪತ್ರಿಕೆ ನೀಡಿದೆ. ಇದೇ ಮೊದಲ ಬಾರಿಗೆ ‘ನನ್ನನ್ನೊಮ್ಮೆ ಗಮನಿಸಿ’ ಪ್ರಶ್ನೋತ್ತರ ಕೋಠಿ ಕೊಡಲಾಗಿದೆ. ಮಕ್ಕಳು ಇದನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಶಿಕ್ಷಕರು ಖಾತ್ರಿಪಡಿಸಿಕೊಳ್ಳಬೇಕು. ಮಕ್ಕಳಿಗೆ ಅನುಮಾನವಿರುವ ಪ್ರಶ್ನೆಗಳಿಗೆ ಪ್ರಶ್ನೋತ್ತರ ಕೋಠಿಯಲ್ಲೇ ಉತ್ತರ ಸಿಗುತ್ತದೆ. ಅದನ್ನು ನಿರಂತರ ಅಭ್ಯಾಸ ಮಾಡುವಂತೆ ತಿಳಿಸಿ’ ಎಂದರು.

ಮೌಲ್ಯಾಂಕನ ಪೂರ್ಣ: ‘ಕೋವಿಡ್ ಆತಂಕದ ಹಿನ್ನೆಲೆಯಲ್ಲಿ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳನ್ನು ಮೌಲ್ಯಾಂಕನದ ಆಧಾರದಲ್ಲಿ ಮುಂದಿನ ತರಗತಿಗೆ ಉತ್ತೀರ್ಣ ಮಾಡಲು ಆದೇಶಿಸಲಾಗಿದೆ. ಶಾಲೆಗಳಲ್ಲಿ ಮೌಲ್ಯಾಂಕನ ಕಾರ್ಯ ಪೂರ್ಣಗೊಂಡಿದೆಯೇ, ಮಕ್ಕಳ ಕ್ರೋಢೀಕೃತ ಅಂಕಗಳ ವಹಿ ದಾಖಲಿಸಲಾಗಿದೆಯೇ ಮತ್ತು ಅಂಕಗಳನ್ನು ಎಸ್‍ಎಟಿಎಸ್‌ನಲ್ಲಿ ದಾಖಲು ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸಿ’ ಎಂದು ತಾಕೀತು ಮಾಡಿದರು.

‘ಶಾಲೆಗೆ ರಜೆಯಿರುವ ಕಾರಣ ಮಕ್ಕಳು ಮನೆಯಲ್ಲಿದ್ದಾರೆ. ಗ್ರಾಮೀಣ ಪ್ರದೇಶಕ್ಕೂ ಕೋವಿಡ್‌ ಮಹಾಮಾರಿ ವ್ಯಾಪಕವಾಗಿ ಹರಡಿದೆ. ಕೊರೊನಾ ಸೋಂಕಿನ ಬಗ್ಗೆ ಶಿಕ್ಷಕರು ಮಕ್ಕಳಿಗೆ ನಿರಂತರವಾಗಿ ಜಾಗೃತಿ ಮೂಡಿಸಬೇಕು. ಆನ್‌ಲೈನ್‌ ತರಗತಿಯಲ್ಲಿ ಮತ್ತು ದೂರವಾಣಿ ಕರೆ ಮಾಡಿದಾಗ ಮಕ್ಕಳಿಗೆ ಪಾಠದ ಜತೆಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿ’ ಎಂದು ಹೇಳಿದರು.

ಶಿಕ್ಷಕರ ನೋಂದಣಿ: ‘ಎಸ್ಸೆಸ್ಸೆಲ್ಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಶಿಕ್ಷಕರ ಹೆಸರು ನೋಂದಣಿಗೆ ತಿಳಿಸಲಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಂಡಿದೆಯೇ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ. ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳ ಪುನರಾರಂಭದ ದಿನಾಂಕ ಏರುಪೇರಾಗಿದೆ. 2021-22ರ ಶೈಕ್ಷಣಿಕ ವರ್ಷದ ಪುನರಾರಂಭಕ್ಕೆ ಈಗಲೇ ಸಿದ್ಧತೆ ಮಾಡಿಕೊಳ್ಳಿ. ಶಾಲೆಗಳಲ್ಲಿ ಮೂಲಸೌಕರ್ಯ ಸಮಸ್ಯೆ ಪರಿಹರಿಸುವ ಬಗ್ಗೆ ಗಮನಹರಿಸಿ’ ಎಂದು ಸೂಚಿಸಿದರು.

ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್, ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ವಿಷಯ ಪರಿವೀಕ್ಷಕರಾದ ಶಶಿವಧನ, ಗಾಯತ್ರಿ, ಕೃಷ್ಣಪ್ಪ ಹಾಗೂ ಜಿಲ್ಲೆಯ ವಿವಿಧ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರು ಸಭೆಯಲ್ಲಿ ಭಾಗಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT