ಬುಧವಾರ, ಜುಲೈ 6, 2022
23 °C
ಅಧಿಕಾರಿಗಳಿಗೆ ರಾಷ್ಟೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಸೂಚನೆ

ಮಕ್ಕಳ ಹಕ್ಕು ರಕ್ಷಣೆ ಕುರಿತು ಕ್ರಮ ಕೈಗೊಳ್ಳಿ: ಆರ್.ಜಿ.ಆನಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಮಕ್ಕಳಿಗೆ ಮೂಲಭೂತ ಹಕ್ಕು ಒದಗಿಸಲು ಹಾಗೂ ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಿ’ ಎಂದು ರಾಷ್ಟೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಆರ್.ಜಿ.ಆನಂದ್ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಮಕ್ಕಳು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯು ಆಯೋಗದ ಮುಖ್ಯ ಉದ್ದೇಶ. ಮಕ್ಕಳ ಹಕ್ಕುಗಳಿಗೆ ಚ್ಯುತಿಯಾಗದಂತೆ ಅಧಿಕಾರಿಗಳು ಗಮನ ಹರಿಸಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆ ಆಗಬೇಕು. ಹೋಟೆಲ್‌, ಕಾರ್ಖಾನೆ, ಕಟ್ಟಡ ನಿರ್ಮಾಣ ಮತ್ತು ಅಂಗಡಿಗಳಲ್ಲಿ ಕೆಲಸ ಮಾಡುವ ಬಾಲ ಕಾರ್ಮಿಕರನ್ನು ಗುರುತಿಸಿ ರಕ್ಷಣೆ ಮಾಡಬೇಕು. ಜತೆಗೆ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಶಿಸ್ತುಕ್ರಮ ಜರುಗಿಸಿ’ ಎಂದು ಖಡಕ್‌ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ‘ರಾಜ್ಯ ಸರ್ಕಾರ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯಲ್ಲಿ ಇಟ್ಟಿಗೆ ಕಾರ್ಖಾನೆ, ಅಂಗಡಿ, ಗ್ಯಾರೇಜ್‌ಗಳಲ್ಲಿ ಕೆಲಸ ಮಾಡುವ ಬಾಲ ಕಾರ್ಮಿಕರನ್ನು ಗುರುತಿಸಿ ರಕ್ಷಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ‘ಆರ್‌ಟಿಇಯನ್ನು ಕಡ್ಡಾಯ ಶಿಕ್ಷಣದ ಭಾಗವಾಗಿ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಖಾಸಗಿ ಶಾಲೆಗಳಲ್ಲಿ ಶೇ 25ರಷ್ಟು ಸೀಟುಗಳನ್ನು ಆರ್‌ಟಿಇ ಅಡಿ ಮೀಸಲಿಡಲಾಗಿದೆ’ ಎಂದು ವಿವರಿಸಿದರು.

‘ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 94 ಬಾಲ್ಯವಿವಾಹ ಪ್ರಕರಣ ವರದಿಯಾಗಿದ್ದು, ಈ ಪೈಕಿ 91 ವಿವಾಹ ತಡೆಯಲಾಗಿದೆ. 3 ಪ್ರಕರಣಗಳಲ್ಲಿ ದೂರು ದಾಖಲಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಎಂ.ಜಿ.ಪಾಲಿ ತಿಳಿಸಿದರು.

ಸಿದ್ಧತೆ ಮಾಡಿಕೊಳ್ಳಿ: ‘ಮಕ್ಕಳಿಗೆ ಕೊರೊನಾ ಹರಡದಂತೆ ತಡೆಯುವಲ್ಲಿ ಸರ್ಕಾರ ಸಫಲವಾಗಿದೆ. ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಉತ್ತಮ ಕ್ರಮ ಕೈಗೊಂಡಿದೆ. ಜಿಲ್ಲೆಯಲ್ಲಿ 6 ಲಕ್ಷ ಮಕ್ಕಳಿದ್ದು, ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹರಡದಂತೆ ಹೆಚ್ಚು ನಿಗಾ ವಹಿಸಬೇಕು. ಬೆಡ್‌, ಆಮ್ಲಜನಕ ಸೇರಿದಂತೆ ಚಿಕಿತ್ಸೆಗೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಆನಂದ್‌ ಹೇಳಿದರು.

‘ರಾಷ್ಟ್ರೀಯ ಸಂವೇದನಾ ಸಹಾಯವಾಣಿ ಸಂಖ್ಯೆ 18001212830ನ್ನು ದೇಶದೆಲ್ಲೆಡೆ ಪ್ರಾದೇಶಿಕ ಭಾಷೆಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ಕೊರೊನಾ ಸೋಂಕು ತಗುಲಿದರೆ ಅಥವಾ ಸಮಸ್ಯೆಗಳಿದ್ದರೆ ಪೋಷಕರು ಹಾಗೂ ಮಕ್ಕಳು ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಸಲಹೆ ಪಡೆಯಬಹುದು’ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್‌ಬಾಬು, ಕೆಜಿಎಫ್‌ ಪೊಲೀಸ್‌ ಜಿಲ್ಲಾ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ, ತಹಶೀಲ್ದಾರ್ ಶೋಭಿತಾ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.