ಶನಿವಾರ, ಸೆಪ್ಟೆಂಬರ್ 25, 2021
24 °C
ಜಿಲ್ಲಾಧಿಕಾರಿ ಮಂಜುನಾಥ್‌ ಹೇಳಿಕೆ

ನೀರಿನ ಸಮಸ್ಯೆ ಪರಿಹಾರಕ್ಕೆ ವಿಡಿಯೋ ಸಂವಾದದಲ್ಲಿ ಸಿ.ಎಂ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಬೇಸಿಗೆ ಹಿನ್ನೆಲೆಯಲ್ಲಿ ಬಿಸಿಲ ಪ್ರಮಾಣ ಹೆಚ್ಚುತ್ತಿದ್ದು, ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಡಿಯೋ ಸಂವಾದದಲ್ಲಿ ಸೂಚಿಸಿದ್ದಾರೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.

ಮುಖ್ಯಮಂತ್ರಿಯವರ ವಿಡಿಯೋ ಸಂವಾದದ ನಂತರ ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ದಿನೇ ದಿನೇ ಬಿಸಿಲು ಹೆಚ್ಚಾಗುತ್ತಿದ್ದು, ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿದೆ. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ನೀರಿನ ಸಮಸ್ಯೆ ಸೃಷ್ಟಿಯಾದ ತಕ್ಷಣ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ’ ಎಂದರು.

‘ಜಿಲ್ಲೆಯ 113ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. 74 ಹಳ್ಳಿಗಳಿಗೆ ಟ್ಯಾಂಕರ್‌ ಮೂಲಕ ಪ್ರತಿನಿತ್ಯ 198 ಲೋಡ್‌ ನೀರು ಪೂರೈಸಲಾಗುತ್ತಿದೆ. ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು 39 ಹಳ್ಳಿಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ವಿವರಿಸಿದರು.

‘ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಬರ ಕಾಮಗಾರಿಗಳ ನಿರ್ವಹಣೆ ಸಂಬಂಧ ಹಲವು ಸಲಹೆ ನೀಡಿದ್ದಾರೆ. ಜಿಲ್ಲೆಯಲ್ಲಿ ನೀರು ಮತ್ತು ಮೇವಿನ ಸಮಸ್ಯೆ ಗಂಭೀರವಾಗದಂತೆ ಈಗಾಗಲೇ ಕ್ರಮ ಕೈಗೊಂಡಿದ್ದೇವೆ’ ಎಂದು ಮಾಹಿತಿ ನೀಡಿದರು.

ಅನುದಾನಕ್ಕೆ ಕೊರತೆಯಿಲ್ಲ

‘ಬರ ಪರಿಸ್ಥಿತಿ ನಿಭಾಯಿಸುವ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದು, ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ನೀರಿನ ಸಮಸ್ಯೆ ಸಂಬಂಧ ದೂರು ಬಂದ 24 ತಾಸಿನೊಳಗೆ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಸಾಧ್ಯವಾದಷ್ಟು ಕಡೆ ಖಾಸಗಿ ಕೊಳವೆ ಬಾವಿ ಬಾಡಿಗೆಗೆ ಪಡೆಯಲಾಗುತ್ತಿದೆ. ನೀರು ಲಭ್ಯವಿರುವ ಕಡೆ ಹೊಸದಾಗಿ ಕೊಳವೆ ಬಾವಿ ಕೊರೆಸಲಾಗುತ್ತಿದೆ. ಅನುದಾನಕ್ಕೆ ಕೊರತೆಯಿಲ್ಲ’ ಎಂದು ತಿಳಿಸಿದರು.

50 ಲಕ್ಷ ಮಾನವ ದಿನ

ನರೇಗಾ ಅಡಿ 2018–19ನೇ ಸಾಲಿನಲ್ಲಿ 22 ಲಕ್ಷ ಮಾನವ ದಿನ ಸೃಜಿಸುವ ಗುರಿಯಿತ್ತು. ಈಗಾಗಲೇ 40 ಲಕ್ಷ ಮಾನವ ದಿನ ಸೃಜಿಸಲಾಗಿದೆ. 2019-–20ನೇ ಸಾಲಿನಲ್ಲಿ 50 ಲಕ್ಷ ಮಾನವ ದಿನ ಸೃಜಿಸುವ ಗುರಿಯಿದೆ’ ಎಂದು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಜಗದೀಶ್‌ ಮಾಹಿತಿ ನೀಡಿದರು.

‘ಪ್ರಸಕ್ತ ಹಣಕಾಸು ವರ್ಷದಲ್ಲಿ ನರೇಗಾ ಅನುದಾನದಲ್ಲಿ 1 ಸಾವಿರ ಚೆಕ್‌ಡ್ಯಾಂ ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ 300 ಚೆಕ್‌ಡ್ಯಾಂ ಕಾಮಗಾರಿ ಪೂರ್ಣಗೊಂಡಿದೆ. 400 ಚೆಕ್‌ಡ್ಯಾಂ ಕಾಮಗಾರಿ ಪ್ರಗತಿಯಲ್ಲಿದ್ದು, 4 ತಿಂಗಳಲ್ಲಿ ಗುರಿ ಸಾಧಿಸುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ, ಉಪ ವಿಭಾಗಾಧಿಕಾರಿ ಸೋಮಶೇಖರ್, ಜಿ.ಪಂ ಉಪ ಕಾರ್ಯದರ್ಶಿ ಲಕ್ಷ್ಮೀನಾರಾಯಣ್‌, ತಹಶೀಲ್ದಾರ್ ಶ್ರೀನಿವಾಸ್‌ಪ್ರಸಾದ್‌, ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕ ಮಧುಸೂದನ್ ರೆಡ್ಡಿ, ತೋಟಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಕೆ.ಬಿ.ಕೃಷ್ಣಮೂರ್ತಿ, ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ (ಪಿಆರ್‌ಇಡಿ) ಕಾರ್ಯ ನಿರ್ವಾಹಕ ಎಂಜಿನಿಯರ್‌ ಗುಳ್ಳಪ್ಪನವರ್‌ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.